ರಾಜ್ಯ ಕಾಂಗ್ರೆಸ್ ಸರ್ಕಾರದ ಮೂರು ವರ್ಷದ ಆಡಳಿತ ಶೂನ್ಯ : ರಾಜು ಕುರುಡಗಿ ಟೀಕೆ
ಗದಗ, 20 ಮೇ (ಹಿ.ಸ.) : ಆ್ಯಂಕರ್ : ರಾಜ್ಯದಲ್ಲಿ ಕಳೆದ ಮೂರು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಜನಪರ ಆಡಳಿತ ನೀಡುವಲ್ಲಿ ಸಂಪೂರ್ಣ ವಿಫಲವಾಗಿದ್ದು, ಸರ್ಕಾರದ ಸಾಧನೆ ಶೂನ್ಯವಾಗಿದೆ ಎಂದು ಬಿಜೆಪಿ ಗದಗ ಜಿಲ್ಲಾ ಅಧ್ಯಕ್ಷ ತೋಟಪ್ಪ (ರಾಜು) ಕುರುಡಗಿ ಆರೋಪಿಸಿದ್ದಾರೆ. ಈ ಕುರಿತು ಪತ
ಫೋಟೋ


ಗದಗ, 20 ಮೇ (ಹಿ.ಸ.) :

ಆ್ಯಂಕರ್ : ರಾಜ್ಯದಲ್ಲಿ ಕಳೆದ ಮೂರು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಜನಪರ ಆಡಳಿತ ನೀಡುವಲ್ಲಿ ಸಂಪೂರ್ಣ ವಿಫಲವಾಗಿದ್ದು, ಸರ್ಕಾರದ ಸಾಧನೆ ಶೂನ್ಯವಾಗಿದೆ ಎಂದು ಬಿಜೆಪಿ ಗದಗ ಜಿಲ್ಲಾ ಅಧ್ಯಕ್ಷ ತೋಟಪ್ಪ (ರಾಜು) ಕುರುಡಗಿ ಆರೋಪಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ ಅವರು, ರಾಜ್ಯ ಸರ್ಕಾರದಲ್ಲಿ ಮುಖ್ಯಮಂತ್ರಿ ಸ್ಥಾನ ಬದಲಾವಣೆ ಕುರಿತ ಚರ್ಚೆಗಳು ಜೋರಾಗಿರುವ ಪರಿಣಾಮ ಆಡಳಿತ ವ್ಯವಸ್ಥೆ ಸಂಪೂರ್ಣ ಕುಸಿದಿದ್ದು, ಜನರ ಸಮಸ್ಯೆಗಳು ಕಡೆಗಣನೆಗೆ ಒಳಗಾಗಿವೆ ಎಂದು ಆರೋಪಿಸಿದರು.

ಸರ್ಕಾರದ ಒಳಜಗಳ ಹಾಗೂ ಅಧಿಕಾರದ ಕಿತ್ತಾಟದಿಂದ ಅಭಿವೃದ್ಧಿ ಕಾರ್ಯಗಳು ಹಿನ್ನೆಡೆಯಾಗಿವೆ. ರಾಜ್ಯದ ಜನತೆ ಸರ್ಕಾರದ ಆಡಳಿತದಿಂದ ಬೇಸತ್ತು ಬದಲಾವಣೆ ಬಯಸುವಂತ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.

ಮೂರು ವರ್ಷದ ಆಡಳಿತದಲ್ಲಿ ಸರ್ಕಾರ ಅಭಿವೃದ್ಧಿ ಕಾರ್ಯಗಳಿಗಿಂತಲೂ ಆರ್ಎಸ್ಎಸ್, ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆರೋಪ ಮಾಡುವುದನ್ನೇ ಪ್ರಮುಖ ಸಾಧನೆಯನ್ನಾಗಿ ಮಾಡಿಕೊಂಡಿದೆ ಎಂದು ಕುರುಡಗಿ ವಾಗ್ದಾಳಿ ನಡೆಸಿದರು.

ರಾಜ್ಯ ಸರ್ಕಾರ ಜಾರಿಗೊಳಿಸಿರುವ ಗೃಹಲಕ್ಷ್ಮೀ ಯೋಜನೆ ಕುರಿತು ಪ್ರಶ್ನೆ ಎತ್ತಿದ ಅವರು, ಎಷ್ಟು ಫಲಾನುಭವಿಗಳಿಗೆ ಹಣ ತಲುಪಿದೆ ಎಂಬುದನ್ನು ಸರ್ಕಾರ ಸ್ಪಷ್ಟಪಡಿಸಬೇಕು. ಯೋಜನೆಗಾಗಿ ಮೀಸಲಿಟ್ಟ ಸಾವಿರಾರು ಕೋಟಿ ರೂಪಾಯಿ ಹೇಗೆ ಬಳಕೆಯಾಗಿದೆ ಎಂಬುದರ ಕುರಿತು ಸರ್ಕಾರ ಪಾರದರ್ಶಕ ಮಾಹಿತಿ ನೀಡಬೇಕು ಎಂದು ಆಗ್ರಹಿಸಿದರು.

ಯುವ ನಿಧಿ ಯೋಜನೆಯ ಅನುಷ್ಠಾನ ಕುರಿತು ಇನ್ನೂ ಸ್ಪಷ್ಟತೆ ಇಲ್ಲ. ಮತ್ತೊಂದೆಡೆ ಜನರ ಮೇಲೆ ಬೆಲೆ ಏರಿಕೆಯ ಹೊರೆ ಹಾಕಲಾಗಿದ್ದು, ಸಾಲ ಮಾಡುವುದರಲ್ಲಿ ಕರ್ನಾಟಕದ ಕಾಂಗ್ರೆಸ್ ಸರ್ಕಾರ ಮೊದಲ ಸ್ಥಾನದಲ್ಲಿದೆ ಎಂದು ಟೀಕಿಸಿದರು.

ರಾಜ್ಯದ ಆಡಳಿತ ಯಂತ್ರ ಅವ್ಯವಸ್ಥಿತವಾಗಿದ್ದು, ಜನರಿಗೆ ನಿರೀಕ್ಷಿತ ಸೇವೆ ಮತ್ತು ಅಭಿವೃದ್ಧಿ ನೀಡುವಲ್ಲಿ ಸರ್ಕಾರ ವಿಫಲವಾಗಿದೆ. ಇದೇ ಕಾಂಗ್ರೆಸ್ ಸರ್ಕಾರದ ಮೂರು ವರ್ಷದ ಆಡಳಿತದ ನಿಜವಾದ ಸಾಧನೆ ಎಂದು ಬಿಜೆಪಿ ಗದಗ ಜಿಲ್ಲಾ ಅಧ್ಯಕ್ಷ ತೋಟಪ್ಪ (ರಾಜು) ಕುರುಡಗಿ ದೂರಿದರು.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande