
ದೊಡ್ಡಬಳ್ಳಾಪುರ, 22 ಮೇ (ಹಿ.ಸ.) :
ಆ್ಯಂಕರ್ : ದೊಡ್ಡಬಳ್ಳಾಪುರ ತಾಲ್ಲೂಕಿನ ಶಿರವಾರ ಗ್ರಾಮದಲ್ಲಿ ₹1 ಕೋಟಿ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗಿರುವ ಸಿಸಿ ರಸ್ತೆ ಹಾಗೂ ಚರಂಡಿ ನಿರ್ಮಾಣ ಕಾಮಗಾರಿಗೆ ಕೆ.ಎಚ್. ಮುನಿಯಪ್ಪ ಶಂಕುಸ್ಥಾಪನೆ ನೆರವೇರಿಸಿದರು.
ಈ ವೇಳೆ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಅವರು, ಜಿಲ್ಲೆಯ ಉಸ್ತುವಾರಿ ಸಚಿವನಾಗಿ ಹಾಗೂ ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಜಿಲ್ಲೆಯ ಎಲ್ಲಾ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡುವುದು ತನ್ನ ಬದ್ಧತೆಯಾಗಿದೆ ಎಂದು ಹೇಳಿದರು. ಅಭಿವೃದ್ಧಿ ಕಾಮಗಾರಿಗಳ ಜೊತೆಗೆ ಜನಸಾಮಾನ್ಯರ ಮೂಲಭೂತ ಸೌಕರ್ಯಗಳಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ ಎಂದು ತಿಳಿಸಿದರು.
ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ದೊಡ್ಡಬಳ್ಳಾಪುರ ವ್ಯಾಪ್ತಿಯಲ್ಲಿ ನಿವೇಶನ ರಹಿತ ಬಡ ಕುಟುಂಬಗಳಿಗೆ 500 ನಿವೇಶನಗಳನ್ನು ಹಂಚಿಕೆ ಮಾಡುವ ಕಾರ್ಯ ಪ್ರಗತಿಯಲ್ಲಿದ್ದು, ಇದೇ ತಿಂಗಳ ಅಂತ್ಯ ಅಥವಾ ಜೂನ್ ತಿಂಗಳಲ್ಲಿ ವಿತರಣೆ ಮಾಡುವ ಉದ್ದೇಶ ಹೊಂದಿದ್ದೇವೆ ಎಂದು ಹೇಳಿದರು.
ರಾಜ್ಯ ಸರ್ಕಾರ ಜಾರಿಗೊಳಿಸಿರುವ ಪಂಚ ಗ್ಯಾರಂಟಿ ಯೋಜನೆಗಳು ಜನಜೀವನದಲ್ಲಿ ಮಹತ್ವದ ಬದಲಾವಣೆ ತರುತ್ತಿವೆ ಎಂದು ತಿಳಿಸಿದ ಅವರು, ಅನ್ನಭಾಗ್ಯ ಯೋಜನೆಯಡಿ ಹಸಿವಿನಿಂದ ಯಾರೂ ಮಲಗಬಾರದು ಎಂಬ ಉದ್ದೇಶದಿಂದ ಪಡಿತರ ಅಕ್ಕಿ ವಿತರಣೆಯನ್ನು ಸಮರ್ಪಕವಾಗಿ ನಡೆಸಲಾಗುತ್ತಿದೆ ಎಂದು ಹೇಳಿದರು.
ಮುಂಬರುವ 2028ರ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಜನತೆ ಮತ್ತೆ ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವಾದ ನೀಡಿ ಅಧಿಕಾರಕ್ಕೆ ತರಲಿದ್ದಾರೆ ಎಂಬ ವಿಶ್ವಾಸವನ್ನೂ ವ್ಯಕ್ತಪಡಿಸಿದರು.
ಶಿರವಾರ ಗ್ರಾಮದಲ್ಲಿನ ರಸ್ತೆ, ಚರಂಡಿ, ನಿವೇಶನ ಹಕ್ಕುಪತ್ರ, ಕನಕ ಭವನ ನಿರ್ಮಾಣ ಸೇರಿದಂತೆ ವಿವಿಧ ಸಾರ್ವಜನಿಕ ಸಮಸ್ಯೆಗಳನ್ನು ಹಂತ ಹಂತವಾಗಿ ಪರಿಹರಿಸಲಾಗುವುದು. ಗ್ರಾಮಸ್ಥರಿಗೆ ಸ್ಥಳೀಯ ಮಟ್ಟದಲ್ಲೇ ಪಡಿತರ ಅಕ್ಕಿ ವಿತರಣೆ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಭರವಸೆ ನೀಡಿದರು.
ಜಿಲ್ಲಾ ಪ್ರವಾಸದ ವೇಳೆ ಎಲ್ಲಾ ಇಲಾಖೆಗಳ ಅಧಿಕಾರಿಗಳು ಕಡ್ಡಾಯವಾಗಿ ಹಾಜರಿರಬೇಕು. ಸಾರ್ವಜನಿಕರ ಸಮಸ್ಯೆಗಳಿಗೆ ಸ್ಥಳದಲ್ಲೇ ಸ್ಪಂದಿಸಿ ಪರಿಹಾರ ನೀಡಬೇಕು ಎಂದು ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು.
ಕಾರ್ಯಕ್ರಮದಲ್ಲಿ ಬಯಪ್ ಸದಸ್ಯ ಪ್ರಸನ್ನಕುಮಾರ್, ಕೆಪಿಸಿಸಿ ಸದಸ್ಯ ಮುನಿರಾಜು, ತೂಬಗೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರವಿಸಿದ್ಧಪ್ಪ, ವಿವಿಧ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಘಾಟಿ ಸುಬ್ರಮಣ್ಯ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರು, ದೊಡ್ಡಬಳ್ಳಾಪುರ ತಹಶೀಲ್ದಾರ್ ಮಲ್ಲಪ್ಪ, ಹಣಬೆ ಗ್ರಾಮ ಪಂಚಾಯಿತಿ ಪಿಡಿಒ ಸೌಮ್ಯ ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh.M.B.