
ಬೆಂಗಳೂರು, 22 ಮೇ (ಹಿ.ಸ.) :
ಆ್ಯಂಕರ್ : ಲೋಕ ಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ದೇಶ ದ್ರೋಹಿ ಎಂದು ಕರೆಯುವ ಮೂಲಕ ಇಡೀ ದೇಶಕ್ಕೆ ಅವಮಾನ ಮಾಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಈ ಕುರಿತು ಎಕ್ಸನಲ್ಲಿ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಂವಿಧಾನ ಬದ್ದವಾಗಿ ಮೂರು ಬಾರಿ ಜನರಿಂದ ಆಯ್ಕೆಯಾಗಿ ದೇಶದ ಪ್ರಧಾನಿಯಾಗಿ ಸೇವೆ ಸಲ್ಲಿಸುತ್ತಿರುವ ನರೇಂದ್ರ ಮೋದಿಯವರನ್ನು ಇಡೀ ವಿಶ್ವವೇ ಕೊಂಡಾಡುತ್ತಿದೆ. ಅವರ ನಾಯಕತ್ವ ಪಡೆದಿರುವ ಭಾರತದ ಪ್ರಜೆಗಳು ಧನ್ಯರು ಎಂದು ವಿಶ್ವ ನಾಯಕರು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ಪ್ರಧಾನಿ ಮೋದಿಯವರು ಭಯೋತ್ಪಾದನೆ ನಿಗ್ರಹಕ್ಕೆ ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನ ಮಾನ ಕಲ್ಪಿಸಿದ್ದ ಅರ್ಟಿಕಲ್ 370 ರದ್ದು ಮಾಡಿ, ಭಯೋತ್ಪಾದಕರ ಬೇರುಗಳನ್ನು ಕಿತ್ತು ಹಾಕಿದ್ದಾರೆ. ಆಪರೇಷನ್ ಸಿಂದೂರದ ಮೂಲಕ ಭಯೋತ್ಪಾದಕರಿಗೆ ಬೆಂಬಲ ನೀಡುತ್ತಿದ್ದ ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸಿದ್ದಾರೆ. ದೇಶವನ್ನು ನಕ್ಸಲ್ ಮುಕ್ತ ಮಾಡಿದ್ದಾರೆ ಎಂದು ಹೇಳಿದ್ದಾರೆ.
ರಾಹುಲ್ ಗಾಂಧಿ ಪ್ರತಿಪಕ್ಷದ ನಾಯಕನಂತ ಜವಾಬ್ದಾರಿ ಹುದ್ದೆಯಲ್ಲಿದ್ದುಕೊಂಡು ದೇಶದ ಪ್ರಧಾನಿ ಮತ್ತು ಗೃಹ ಸಚಿವರ ಬಗ್ಗೆ ಕೀಳುಮಟ್ಟದಲ್ಲಿ ಮಾತನಾಡಿರುವುದು ಸಂವಿಧಾನಿಕ ಹುದ್ದೆಗಳಿಗೆ ಮಾಡಿರುವ ಅವಮಾನ, ಈಗಾಗಲೇ ಪಂಚ ರಾಜ್ಯಗಳ ಚುನಾವಣೆಯಲ್ಲಿ ನಾಲ್ಕು ರಾಜ್ಯಗಳಲ್ಲಿ ಅಸ್ತಿತ್ವವೇ ಇಲ್ಲದಂತೆ ನಿರ್ಣಾಮವಾಗಿರುವ ಕಾಂಗ್ರೆಸ್, ರಾಹುಲ್ ಗಾಂಧಿಯ ಈ ರೀತಿಯ ಹೇಳಿಕೆಗಳಿಂದ ಭವಿಷ್ಯದಲ್ಲಿ ಅಸ್ತಿತ್ವವೇ ಇಲ್ಲದಂತಾಗುತ್ತದೆ. ರಾಹುಲ್ ಗಾಂಧಿ ತಮ್ಮ ಹೇಳಿಕೆಗೆ ದೇಶದ ಜನರ ಕ್ಷಮೆ ಕೇಳಬೇಕು. ಇಲ್ಲದಿದ್ದರೆ ಜನರೇ ಅವರಿಗೆ ತಕ್ಕ ಪಾಠ ಕಲಿಸುತ್ತಾರೆ ಎಂದು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh.M.B.