
ಗದಗ, 23 ಮೇ (ಹಿ.ಸ.) :
ಆ್ಯಂಕರ್ : 2026-27ನೇ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವವನ್ನು ಹಬ್ಬದ ವಾತಾವರಣದಲ್ಲಿ ಅರ್ಥಪೂರ್ಣವಾಗಿ ಆಚರಿಸುವುದು ಹಾಗೂ ಸರಕಾರಿ ಶಾಲೆಗಳ ದಾಖಲಾತಿ ಪ್ರಮಾಣವನ್ನು ಹೆಚ್ಚಿಸುವ ಉದ್ದೇಶದಿಂದ ಗದಗ ಕ್ಷೇತ್ರಶಿಕ್ಷಣಾಧಿಕಾರಿಗಳ ಕಾರ್ಯಾಲಯದ ವತಿಯಿಂದ ಗದಗ ಶಹರದ ಎಲ್ಲಾ ಮುಖ್ಯೋಪಾಧ್ಯಾಯರ ಪೂರ್ವಭಾವಿ ಸಭೆ ನಡೆಯಿತು.
ಸಭೆಯಲ್ಲಿ ಶಾಲಾ ಪ್ರಾರಂಭೋತ್ಸವದ ಸಿದ್ಧತೆಗಳ ಕುರಿತು ಸಮಗ್ರ ಚರ್ಚೆ ನಡೆಸಲಾಗಿದ್ದು, ಶಾಲೆ ಆರಂಭಕ್ಕೂ ಮುನ್ನ ಶಾಲಾ ಕೊಠಡಿಗಳು, ಶಾಲಾ ಮೈದಾನ, ಶೌಚಾಲಯ ಸೇರಿದಂತೆ ಶಾಲಾ ಆವರಣವನ್ನು ಸಂಪೂರ್ಣ ಸ್ವಚ್ಛಗೊಳಿಸಿ ವಿದ್ಯಾರ್ಥಿಗಳಿಗೆ ಸ್ವಚ್ಛ ಮತ್ತು ಸುಂದರ ವಾತಾವರಣ ನಿರ್ಮಿಸಲು ಅಧಿಕಾರಿಗಳು ಸೂಚಿಸಿದರು.
ಸಭೆಯನ್ನು ಉದ್ದೇಶಿಸಿ ಮಾತನಾಡಿದ ಉಪನಿರ್ದೇಶಕರಾದ ಶ್ರೀ ಆರ್.ಎಸ್. ಬುರಡಿ, ಜೂನ್ 1 ರಂದು ನಡೆಯಲಿರುವ ಶಾಲಾ ಪ್ರಾರಂಭೋತ್ಸವವನ್ನು ಕೇವಲ ಔಪಚಾರಿಕ ಕಾರ್ಯಕ್ರಮವಾಗಿ ಅಲ್ಲದೆ, ಮಕ್ಕಳಿಗೆ ಸಂತಸದ ಹಬ್ಬವನ್ನಾಗಿಸಬೇಕು ಎಂದು ಕರೆ ನೀಡಿದರು. ಶಾಲೆಗಳನ್ನು ತಳಿರು ತೋರಣಗಳು, ಬಣ್ಣ ಬಣ್ಣದ ಅಲಂಕಾರಗಳಿಂದ ಶೃಂಗರಿಸಿ ವಿದ್ಯಾರ್ಥಿಗಳಿಗೆ ಆತ್ಮೀಯ ಸ್ವಾಗತ ಕೋರಬೇಕು ಎಂದು ತಿಳಿಸಿದರು.
ಅಲ್ಲದೆ, ಎಸ್.ಡಿ.ಎಂ.ಸಿ ಸದಸ್ಯರು, ಪಾಲಕರು, ಪೋಷಕರು, ಶಾಲಾ ಸಿಬ್ಬಂದಿ, ಹಳೆಯ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರ ಸಹಭಾಗಿತ್ವದಲ್ಲಿ ಶಾಲಾ ಪ್ರಾರಂಭೋತ್ಸವವನ್ನು ವಿಜೃಂಭಣೆಯಿಂದ ಆಚರಿಸುವಂತೆ ಸೂಚನೆ ನೀಡಿದರು. ಶಾಲೆಗೆ ಆಗಮಿಸುವ ಮಕ್ಕಳನ್ನು ಹೂಗುಚ್ಛ, ಪುಷ್ಪಮಳೆ, ಬಲೂನ್ ಹಾರಿಸುವ ಮೂಲಕ ಅಥವಾ ಸ್ಥಳೀಯ ಸಂಪ್ರದಾಯಗಳಿಗೆ ಅನುಗುಣವಾಗಿ ವಿಶೇಷ ರೀತಿಯಲ್ಲಿ ಸ್ವಾಗತಿಸಿ ಮಕ್ಕಳಲ್ಲಿ ಶಾಲೆಯ ಬಗ್ಗೆ ಆಸಕ್ತಿ ಮತ್ತು ಸಂತೋಷ ಹೆಚ್ಚಿಸುವಂತೆ ಸಲಹೆ ನೀಡಿದರು.
ನಂತರ ಮಾತನಾಡಿದ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಪ್ರಾಚಾರ್ಯರಾದ ಶ್ರೀ ಕೆ.ಡಿ. ಬಡಿಗೇರ, ಸರಕಾರಿ ಶಾಲೆಗಳ ಉಳಿವು ಮತ್ತು ಅಭಿವೃದ್ಧಿ ಪ್ರತಿಯೊಬ್ಬ ಶಿಕ್ಷಕರ ಜವಾಬ್ದಾರಿಯಾಗಿದೆ ಎಂದು ಹೇಳಿದರು. ಗುಣಮಟ್ಟದ ಶಿಕ್ಷಣ, ಉತ್ತಮ ಶಾಲಾ ವಾತಾವರಣ ಮತ್ತು ಸಮರ್ಪಕ ಶೈಕ್ಷಣಿಕ ಚಟುವಟಿಕೆಗಳ ಮೂಲಕ ಸಮಾಜದ ವಿಶ್ವಾಸವನ್ನು ಗಳಿಸಬೇಕಾಗಿದೆ ಎಂದು ಅಭಿಪ್ರಾಯಪಟ್ಟರು.
ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ಸರಕಾರಿ ಶಾಲೆಗಳ ದಾಖಲಾತಿ ಪ್ರಮಾಣವನ್ನು ಕನಿಷ್ಠ 15 ಶೇಕಡಾ ಹೆಚ್ಚಿಸುವ ಗುರಿಯನ್ನು ಹೊಂದಿ ಕಾರ್ಯನಿರ್ವಹಿಸುವಂತೆ ಅವರು ಮುಖ್ಯೋಪಾಧ್ಯಾಯರಿಗೆ ಕರೆ ನೀಡಿದರು.
ವಿದ್ಯಾರ್ಥಿಗಳ ದಾಖಲಾತಿ ಹೆಚ್ಚಳಕ್ಕಾಗಿ ಮನೆ-ಮನೆಗೆ ಭೇಟಿ, ಪಾಲಕರ ಜಾಗೃತಿ ಸಭೆ, ಸಮುದಾಯದ ಸಹಭಾಗಿತ್ವ ಮತ್ತು ಶಿಕ್ಷಣದ ಮಹತ್ವದ ಕುರಿತು ಅರಿವು ಮೂಡಿಸುವ ಕಾರ್ಯಗಳಿಗೆ ಹೆಚ್ಚಿನ ಒತ್ತು ನೀಡಬೇಕೆಂದು ಸಲಹೆ ನೀಡಿದರು.
ಸಭೆಯಲ್ಲಿ ವೇದಿಕೆಯ ಮೇಲಿದ್ದ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಮತ್ತು ಗಣ್ಯರು ಸಹ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿ, ಸರಕಾರಿ ಶಾಲೆಗಳ ಬಲವರ್ಧನೆಗೆ ಶಿಕ್ಷಕರು, ಪಾಲಕರು ಮತ್ತು ಸಮಾಜ ಒಗ್ಗಟ್ಟಿನಿಂದ ಕೆಲಸ ಮಾಡುವ ಅಗತ್ಯವಿದೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರನ್ನು ಸನ್ಮಾನಿಸಿ ಗೌರವಿಸಲಾಯಿತು. ಪ್ರಾಥಮಿಕ ಶಾಲಾ ಸಂಘಕ್ಕೆ ಆಯ್ಕೆಯಾದ ಪದಾಧಿಕಾರಿಗಳು, ಪ್ರೌಢಶಾಲಾ ಮುಖ್ಯೋಪಾಧ್ಯಾಯರು, ಗದಗ ಶಹರದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಬರಲು ಕಾರಣಕರ್ತರಾದ ಶಿಕ್ಷಣ ಕ್ಷೇತ್ರದ ವ್ಯಕ್ತಿಗಳು ಸೇರಿದಂತೆ ಹಲವರನ್ನು ಕ್ಷೇತ್ರಶಿಕ್ಷಣಾಧಿಕಾರಿಗಳ ಕಚೇರಿ ವತಿಯಿಂದ ಸನ್ಮಾನಿಸಿ ಅಭಿನಂದಿಸಲಾಯಿತು.
ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅಧಿಕಾರಿಗಳು, ಈ ಸಾಲಿನ ಸಾಧನೆಯನ್ನು ಮುಂದಿನ ಶೈಕ್ಷಣಿಕ ವರ್ಷದಲ್ಲಿ ಇನ್ನಷ್ಟು ಉತ್ತಮ ಮಟ್ಟಕ್ಕೆ ಕೊಂಡೊಯ್ಯುವಂತೆ ಶಿಕ್ಷಕರನ್ನು ಪ್ರೇರೇಪಿಸಿದರು.
ಕಾರ್ಯಕ್ರಮವನ್ನು ಶ್ರೀ ಯರಗುಡಿ ಬಿ.ಆರ್.ಪಿ. ನಿರೂಪಿಸಿದರು. ಶ್ರೀ ಶ್ಯಾಮ ಲಾಂಡೆ ಬಿ.ಆರ್.ಪಿ. ವಂದನಾರ್ಪಣೆ ಸಲ್ಲಿಸಿದರು.
ಶಾಲಾ ಪ್ರಾರಂಭೋತ್ಸವವನ್ನು ಮಕ್ಕಳಿಗೆ ಮರೆಯಲಾಗದ ಅನುಭವವನ್ನಾಗಿಸುವುದು, ಸರಕಾರಿ ಶಾಲೆಗಳ ದಾಖಲಾತಿ ಹೆಚ್ಚಿಸುವುದು ಮತ್ತು ಶಿಕ್ಷಣ ವ್ಯವಸ್ಥೆಯನ್ನು ಇನ್ನಷ್ಟು ಬಲಪಡಿಸುವ ನಿಟ್ಟಿನಲ್ಲಿ ನಡೆದ ಈ ಪೂರ್ವಭಾವಿ ಸಭೆ ಮಹತ್ವ ಪಡೆದುಕೊಂಡಿತು.
ಹಿಂದೂಸ್ತಾನ್ ಸಮಾಚಾರ್ / lalita MP