
ಮಂಡ್ಯ, 23 ಮೇ (ಹಿ.ಸ.) :
ಆ್ಯಂಕರ್ : ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ಉಪವಿಭಾಗ ವ್ಯಾಪ್ತಿಯ ಗಂಜಾಂ, ಪಾಲಹಳ್ಳಿ, ಮಂಟಿ, ಬಲಮುರಿ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಸಾರ್ವಜನಿಕರಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಭದ್ರತೆ ಭಾವನೆ ಮೂಡಿಸುವ ಉದ್ದೇಶದಿಂದ ಪ್ರದೇಶ ಪ್ರಾಬಲ್ಯ ಕಾರ್ಯಾಚರಣೆ ನಡೆಸಲಾಯಿತು.
ಶ್ರೀರಂಗಪಟ್ಟಣ ಉಪವಿಭಾಗದ ಡಿವೈಎಸ್ಪಿ ನೇತೃತ್ವದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಭಾಗವಹಿಸಿ, ಸಾರ್ವಜನಿಕರೊಂದಿಗೆ ಸಂವಾದ ನಡೆಸಿದರು.
ಕಾರ್ಯಾಚರಣೆ ವೇಳೆ “ನಶಾ ಮುಕ್ತ ಕರ್ನಾಟಕ” ಅಭಿಯಾನದಡಿ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸಲಾಯಿತು.
ಯುವಜನತೆ ಮಾದಕ ವ್ಯಸನಗಳಿಂದ ದೂರವಿದ್ದು ಆರೋಗ್ಯಕರ ಜೀವನಶೈಲಿ ಅಳವಡಿಸಿಕೊಳ್ಳಬೇಕು ಎಂದು ಪೊಲೀಸರು ಮನವಿ ಮಾಡಿದರು.
ಇದೇ ವೇಳೆ ಸಂಚಾರ ನಿಯಮಗಳ ಪಾಲನೆಯ ಮಹತ್ವದ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸಲಾಯಿತು. ವಾಹನ ಸವಾರರು ಹೆಲ್ಮೆಟ್ ಧರಿಸುವುದು, ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದು ಹಾಗೂ ಸುರಕ್ಷಿತ ವಾಹನ ಚಾಲನೆ ಮಾಡುವಂತೆ ಸಲಹೆ ನೀಡಲಾಯಿತು.
ಪ್ರದೇಶದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು ಸಾರ್ವಜನಿಕರ ಸಹಕಾರ ಅತ್ಯಗತ್ಯವಾಗಿದ್ದು, ಯಾವುದೇ ಅನುಮಾನಾಸ್ಪದ ಚಟುವಟಿಕೆ ಕಂಡುಬಂದರೆ ತಕ್ಷಣ ಪೊಲೀಸರಿಗೆ ಮಾಹಿತಿ ನೀಡುವಂತೆ ಅಧಿಕಾರಿಗಳು ಮನವಿ ಮಾಡಿದರು.
ಕಾರ್ಯಾಚರಣೆಯಲ್ಲಿ ಉಪವಿಭಾಗ ವ್ಯಾಪ್ತಿಯ ವಿವಿಧ ಪೊಲೀಸ್ ಠಾಣೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh.M.B.