
ಮೈಸೂರು, 23 ಮೇ (ಹಿ.ಸ.) :
ಆ್ಯಂಕರ್ : ಮುಂಬರುವ ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಮೈಸೂರು ದಕ್ಷಿಣ ಪೊಲೀಸ್ ಠಾಣಾ ವ್ಯಾಪ್ತಿಯ ರಮ್ಮನಹಳ್ಳಿಯಲ್ಲಿ ಶಾಂತಿ ಸಭೆ ನಡೆಯಿತು.
ಜಿಲ್ಲಾ ಪೊಲೀಸ್ ಅಧೀಕ್ಷಕ ಮಲ್ಲಿಕಾರ್ಜುನ ಬಾಲದಂಡಿ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ವಿವಿಧ ಕೋಮಿನ ಮುಖಂಡರು ಭಾಗವಹಿಸಿ ಹಬ್ಬವನ್ನು ಶಾಂತಿಯುತ ಹಾಗೂ ಸೌಹಾರ್ದಯುತವಾಗಿ ಆಚರಿಸುವ ಕುರಿತು ಚರ್ಚಿಸಿದರು.
ಈ ಸಂದರ್ಭದಲ್ಲಿ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಅವರು ಹಬ್ಬದ ಆಚರಣೆ ವೇಳೆ ಕಾನೂನು ಸುವ್ಯವಸ್ಥೆ ಕಾಪಾಡುವ ಮಹತ್ವವನ್ನು ವಿವರಿಸಿ, ಸಾರ್ವಜನಿಕರು ಪರಸ್ಪರ ಸಹಕಾರ ಮತ್ತು ಸಹಿಷ್ಣುತೆಯಿಂದ ನಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.
ಹಬ್ಬದ ಸಂದರ್ಭದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸುವುದು, ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಸಂದೇಶಗಳನ್ನು ಹರಡದಿರುವುದು ಹಾಗೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮುಖಂಡರಿಗೆ ಸಲಹೆ ನೀಡಿದರು.
ಸೌಹಾರ್ದತೆ ಮತ್ತು ಪರಸ್ಪರ ವಿಶ್ವಾಸದ ಮೂಲಕ ಹಬ್ಬವನ್ನು ಯಶಸ್ವಿಯಾಗಿ ಆಚರಿಸೋಣ ಎಂದು ಕರೆ ನೀಡಿದ ಅವರು, ಶಾಂತಿ ಕಾಪಾಡುವಲ್ಲಿ ಸಾರ್ವಜನಿಕರ ಪಾತ್ರ ಮಹತ್ವದ್ದಾಗಿದೆ ಎಂದು ತಿಳಿಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh.M.B.