
ಹುಬ್ಬಳ್ಳಿ, 23 ಮೇ (ಹಿ.ಸ.) :
ಆ್ಯಂಕರ್ : ಹುಬ್ಬಳ್ಳಿ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಆವರಣದಲ್ಲಿ ಆಯೋಜಿಸಲಾದ ಧಾರವಾಡ ಜಿಲ್ಲಾ ಮಟ್ಟದ ಮಾವು ಮೇಳವನ್ನು ಶಾಸಕ ಮಹೇಶ ಟೆಂಗಿನಕಾಯಿ ಉದ್ಘಾಟಿಸಿದರು.
ಮೇಳದಲ್ಲಿ ಅಲ್ಫಾನ್ಸೋ, ತೋತಾಪುರಿ ಸೇರಿದಂತೆ 70ಕ್ಕೂ ಹೆಚ್ಚು ಮಾವಿನ ತಳಿಗಳು ಒಂದೇ ಸೂರಿನಡಿ ಲಭ್ಯವಿದ್ದು, ರೈತರು ನೇರವಾಗಿ ಗ್ರಾಹಕರಿಗೆ ಹಣ್ಣುಗಳನ್ನು ಮಾರಾಟ ಮಾಡುವ ವ್ಯವಸ್ಥೆ ಕಲ್ಪಿಸಲಾಗಿದೆ.
ಈ ಮೂಲಕ ರೈತರಿಗೆ ಮಧ್ಯವರ್ತಿಗಳ ಹಂಗಿಲ್ಲದೆ ನೇರ ಮಾರುಕಟ್ಟೆ ದೊರೆಯುವುದರ ಜೊತೆಗೆ, ಗ್ರಾಹಕರಿಗೂ ರಾಸಾಯನಿಕ ಮುಕ್ತ ಹಾಗೂ ತಾಜಾ ಹಣ್ಣುಗಳು ಸಿಗಲಿವೆ ಎಂದು ಕಾರ್ಯಕ್ರಮದಲ್ಲಿ ತಿಳಿಸಲಾಯಿತು.
ಮಾವು ಮೇಳವು ರೈತರು ಮತ್ತು ಗ್ರಾಹಕರ ನಡುವೆ ಉತ್ತಮ ಬಾಂಧವ್ಯ ಬೆಳೆಸುವ ವೇದಿಕೆಯಾಗಲಿ ಹಾಗೂ ಜಿಲ್ಲೆಯ ಮಾವು ಬೆಳೆಗಾರರಿಗೆ ಹೆಚ್ಚಿನ ಉತ್ತೇಜನ ನೀಡಲಿ ಎಂದು ಶಾಸಕ ಮಹೇಶ ಟೆಂಗಿನಕಾಯಿ ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಪಾಲಿಕೆ ಸದಸ್ಯ ಮಲ್ಲಿಕಾರ್ಜುನ ಗುಂಡೂರ, ಕೃಷಿ ಉತ್ಪನ್ನ ಮಾರುಕಟ್ಟೆ ಕಾರ್ಯದರ್ಶಿ ಕೆ. ಗುರುಪ್ರಸಾದ, ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯ ಅಧ್ಯಕ್ಷ ಜಿ.ಕೆ. ಆದಪ್ಪಗೌಡರ, ಸಹ ಕಾರ್ಯದರ್ಶಿ ಪ್ರಕಾಶ ಶೃಂಗೇರಿ, ವ್ಯಾಪಾರಿ ಚನ್ನು ಹೊಸಮನಿ, ಬಾಬಾಗೌಡ ಪಾಟೀಲ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh.M.B.