
ಕಲಬುರಗಿ, 23 ಮೇ (ಹಿ.ಸ.) :
ಆ್ಯಂಕರ್ : ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಲಾಡ್ಲಾಪೂರ ಗ್ರಾಮದ ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಐವರು ಮೃತಪಟ್ಟಿರುವ ದುರ್ಘಟನೆ ಶುಕ್ರವಾರ ತಡ ರಾತ್ರಿ ನಡೆದಿದೆ. ಕ್ರೂಸರ್ ವಾಹನ ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಡಿಕ್ಕಿಯಿಂದ ಈ ದುರಂತ ಸಂಭವಿಸಿದೆ.
ಮೃತರು ಚಿತ್ತಾಪುರ ತಾಲೂಕಿನ ಇಂಗಳಗಿ ಗ್ರಾಮದ ನಿವಾಸಿಗಳಾಗಿದ್ದು, ಒಂದೇ ಕುಟುಂಬಕ್ಕೆ ಸೇರಿದವರಾಗಿದ್ದಾರೆ ಎಂದು ತಿಳಿದುಬಂದಿದೆ. ಮೃತಪಟ್ಟವರನ್ನು ಟೋಲು ಪಾಶಾ (27), ಮಹಿಬೂಬ್ (45), ಹುಸೇನಿ ಬುಡಾನ್ ಶಾಹಾ (48), ರಸೂಲ್ ಬಿ (42) ಹಾಗೂ ಫಾತಿಮಾ (38) ಎಂದು ಗುರುತಿಸಲಾಗಿದೆ.
ಮೃತಪಟ್ಟ ಕುಟುಂಬಸ್ಥರ ಮಾಹಿತಿಯ ಪ್ರಕಾರ, ಇಂಗಳಗಿ ಗ್ರಾಮದ ಅನಾರೋಗ್ಯ ಪೀಡಿತ ವ್ಯಕ್ತಿಯೊಬ್ಬರನ್ನು ಚಿಕಿತ್ಸೆಗಾಗಿ ಯಾದಗಿರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರನ್ನು ಆಸ್ಪತ್ರೆಗೆ ದಾಖಲಿಸಿದ ಬಳಿಕ ಕುಟುಂಬದ ಸದಸ್ಯರು ಕ್ರೂಸರ್ ವಾಹನದಲ್ಲಿ ತಮ್ಮ ಗ್ರಾಮಕ್ಕೆ ಮರಳುತ್ತಿದ್ದರು. ಈ ವೇಳೆ ರಾತ್ರಿ ಸಮಯದಲ್ಲಿ ಲಾಡ್ಲಾಪೂರ ಗ್ರಾಮದ ಸಮೀಪ ಎದುರುಗಡೆಯಿಂದ ವೇಗವಾಗಿ ಬಂದ ಲಾರಿಯೊಂದಿಗೆ ಕ್ರೂಸರ್ ವಾಹನ ಡಿಕ್ಕಿಯಾಗಿದೆ. ಡಿಕ್ಕಿಯ ತೀವ್ರತೆಗೆ ಕ್ರೂಸರ್ ವಾಹನ ಸಂಪೂರ್ಣ ಜಖಂಗೊಂಡಿದ್ದು, ವಾಹನದಲ್ಲಿದ್ದ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಈ ಸಂಬಂಧ ವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತದ ನಿಖರ ಕಾರಣ ಪತ್ತೆಹಚ್ಚಲು ತನಿಖೆ ಮುಂದುವರಿದಿದೆ.
ಹಿಂದೂಸ್ತಾನ್ ಸಮಾಚಾರ್ / Rakesh.M.B.