ಮುಂಡರಗಿ ತಾಲೂಕಾಡಳಿತ ಸೌಧದಲ್ಲೇ ಕುಡಿಯುವ ನೀರಿನ ಸಮಸ್ಯೆ!
ಗದಗ, 24 ಮೇ (ಹಿ.ಸ.) : ಆ್ಯಂಕರ್ : ಸಾರ್ವಜನಿಕರ ಕೆಲಸಗಳಿಗೆ ಕೇಂದ್ರಬಿಂದುವಾಗಿರುವ ತಾಲೂಕಾಡಳಿತ ಸೌಧದಲ್ಲೇ ಕುಡಿಯುವ ನೀರು ಹಾಗೂ ಸಾರ್ವಜನಿಕ ಶೌಚಾಲಯದಂತಹ ಮೂಲಭೂತ ಸೌಲಭ್ಯಗಳ ಕೊರತೆ ಕಂಡುಬಂದಿದ್ದು, ಇದರಿಂದ ಸಾರ್ವಜನಿಕರು ಹಾಗೂ ಸಿಬ್ಬಂದಿ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಗದಗ ಜಿಲ್ಲೆಯ ಮುಂ
ಫೋಟೋ


ಗದಗ, 24 ಮೇ (ಹಿ.ಸ.) :

ಆ್ಯಂಕರ್ : ಸಾರ್ವಜನಿಕರ ಕೆಲಸಗಳಿಗೆ ಕೇಂದ್ರಬಿಂದುವಾಗಿರುವ ತಾಲೂಕಾಡಳಿತ ಸೌಧದಲ್ಲೇ ಕುಡಿಯುವ ನೀರು ಹಾಗೂ ಸಾರ್ವಜನಿಕ ಶೌಚಾಲಯದಂತಹ ಮೂಲಭೂತ ಸೌಲಭ್ಯಗಳ ಕೊರತೆ ಕಂಡುಬಂದಿದ್ದು, ಇದರಿಂದ ಸಾರ್ವಜನಿಕರು ಹಾಗೂ ಸಿಬ್ಬಂದಿ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಗದಗ ಜಿಲ್ಲೆಯ ಮುಂಡರಗಿ ಪಟ್ಟಣದ ತಾಲೂಕಾಡಳಿತ ಭವನದಲ್ಲಿ ಈ ಸಮಸ್ಯೆಗಳು ದೀರ್ಘಕಾಲದಿಂದ ಮುಂದುವರಿದಿದ್ದು, ಸಂಬಂಧಪಟ್ಟ ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮುಂಡರಗಿ ತಾಲೂಕಿನ ಪ್ರಮುಖ ಆಡಳಿತ ಕೇಂದ್ರವಾಗಿರುವ ಈ ತಾಲೂಕಾಡಳಿತ ಸೌಧದಲ್ಲಿ ತಹಶೀಲ್ದಾರ ಕಚೇರಿ, ನೊಂದಣಿ ಕಚೇರಿ ಸೇರಿದಂತೆ ಹಲವು ಸರ್ಕಾರಿ ಇಲಾಖೆಗಳು ಕಾರ್ಯನಿರ್ವಹಿಸುತ್ತಿವೆ. ಪ್ರತಿದಿನ ತಾಲೂಕಿನ ವಿವಿಧ ಗ್ರಾಮಗಳಿಂದ ನೂರಾರು ಜನರು ಜಾತಿ, ಆದಾಯ, ನಿವಾಸ ಪ್ರಮಾಣಪತ್ರ, ಭೂಮಿ ದಾಖಲೆ, ಪಿಂಚಣಿ, ನೋಂದಣಿ ಸೇರಿದಂತೆ ವಿವಿಧ ಆಡಳಿತಾತ್ಮಕ ಕೆಲಸಗಳಿಗಾಗಿ ಇಲ್ಲಿಗೆ ಆಗಮಿಸುತ್ತಾರೆ. ಆದರೆ, ಜನರ ಸೇವೆಗೆ ನಿರ್ಮಿಸಲಾದ ಈ ಭವನದಲ್ಲೇ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದಿರುವುದು ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಗಿದೆ.

ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ಬಿಸಿಲಿನ ತಾಪಮಾನದಿಂದ ಜನರು ತತ್ತರಿಸಿ ಹೋಗುತ್ತಿರುವ ಸಂದರ್ಭದಲ್ಲೂ ತಾಲೂಕಾಡಳಿತ ಸೌಧದಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದಿರುವುದು ಇನ್ನಷ್ಟು ಸಂಕಷ್ಟ ತಂದೊಡ್ಡಿದೆ. ಕಚೇರಿ ಆವರಣದಲ್ಲಿ ಅಳವಡಿಸಲಾಗಿದ್ದ ಶುದ್ಧ ಕುಡಿಯುವ ನೀರಿನ ಯಂತ್ರ ದೀರ್ಘಕಾಲದಿಂದ ಕೆಟ್ಟು ಬಿದ್ದಿದ್ದು, ಅದರ ಮೇಲೆ ಧೂಳು ಆವರಿಸಿಕೊಂಡಿದೆ. ಯಂತ್ರ ದುರಸ್ತಿಗೊಳಿಸುವ ಪ್ರಯತ್ನವನ್ನೂ ಅಧಿಕಾರಿಗಳು ಮಾಡಿಲ್ಲ ಎಂಬ ಆರೋಪ ಕೇಳಿ ಬಂದಿದೆ.

ಇದರಿಂದಾಗಿ ಕಚೇರಿಗೆ ಬರುವ ಮಹಿಳೆಯರು, ಮಕ್ಕಳು, ವೃದ್ಧರು, ರೈತರು ಹಾಗೂ ಸಿಬ್ಬಂದಿ ಕುಡಿಯುವ ನೀರಿಗಾಗಿ ಪರದಾಡುವಂತಾಗಿದೆ.

ನೀರಿನ ದಾಹ ನೀಗಿಸಿಕೊಳ್ಳಲು ಸಾರ್ವಜನಿಕರು ಕಚೇರಿ ಎದುರಿನ ಅಂಗಡಿಗಳಿಗೆ ತೆರಳಿ ಹಣ ನೀಡಿ ನೀರು ಖರೀದಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಹಲವು ಬಾರಿ ಅಧಿಕಾರಿಗಳ ಗಮನಕ್ಕೆ ತಂದರೂ ಸಮಸ್ಯೆಗೆ ಶಾಶ್ವತ ಪರಿಹಾರ ದೊರಕಿಲ್ಲ ಎಂದು ಸಾರ್ವಜನಿಕರು ದೂರಿದ್ದಾರೆ.

ಸ್ಥಳೀಯ ಮಹಿಳೆ ಅಶ್ವಿನಿ ಮಾತನಾಡಿ, “ಬೇಸಿಗೆಯ ಬಿಸಿಲಿನಲ್ಲಿ ಕಚೇರಿಗೆ ಬರುವ ಜನರಿಗೆ ಕುಡಿಯುವ ನೀರಿನ ವ್ಯವಸ್ಥೆಯೇ ಇಲ್ಲ. ಮಹಿಳೆಯರು, ವೃದ್ಧರು ತುಂಬಾ ತೊಂದರೆ ಅನುಭವಿಸುತ್ತಿದ್ದಾರೆ. ಶುದ್ಧ ನೀರಿನ ಯಂತ್ರ ಇದ್ದರೂ ಅದು ಕೆಟ್ಟು ಹೋಗಿದ್ದು, ಅದನ್ನು ಸರಿಪಡಿಸುವ ಕೆಲಸ ಆಗಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇನ್ನೊಂದೆಡೆ ತಾಲೂಕಾಡಳಿತ ಭವನದಲ್ಲಿ ಸಾರ್ವಜನಿಕರಿಗಾಗಿ ಪ್ರತ್ಯೇಕ ಶೌಚಾಲಯ ವ್ಯವಸ್ಥೆಯೂ ಇಲ್ಲದಿರುವುದು ಮತ್ತೊಂದು ದೊಡ್ಡ ಸಮಸ್ಯೆಯಾಗಿದೆ. ಕಚೇರಿ ಸಿಬ್ಬಂದಿಗೆ ಮಾತ್ರ ಶೌಚಾಲಯ ಇದ್ದು, ಸಾರ್ವಜನಿಕರ ಬಳಕೆಗೆ ಯಾವುದೇ ವ್ಯವಸ್ಥೆ ಕಲ್ಪಿಸಲಾಗಿಲ್ಲ ಎನ್ನಲಾಗಿದೆ. ವಿಶೇಷವಾಗಿ ಮಹಿಳೆಯರು ಈ ಸಮಸ್ಯೆಯಿಂದ ಹೆಚ್ಚಿನ ಸಂಕಷ್ಟ ಅನುಭವಿಸುತ್ತಿದ್ದಾರೆ.

ತಾಲೂಕಾಡಳಿತ ಸೌಧಕ್ಕೆ ಬರುವ ಮಹಿಳೆಯರು, ಹಿರಿಯ ನಾಗರಿಕರು ಹಾಗೂ ದೂರದ ಗ್ರಾಮಗಳಿಂದ ಆಗಮಿಸುವ ಸಾರ್ವಜನಿಕರು ಶೌಚಾಲಯದ ವ್ಯವಸ್ಥೆ ಇಲ್ಲದ ಕಾರಣ ತೀವ್ರ ಮುಜುಗರ ಮತ್ತು ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದಾರೆ. ಕೆಲವು ಸಂದರ್ಭಗಳಲ್ಲಿ ಬಯಲು ಪ್ರದೇಶವನ್ನೇ ಶೌಚಾಲಯವನ್ನಾಗಿ ಬಳಸುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಇದು ಆಡಳಿತಾತ್ಮಕ ವೈಫಲ್ಯಕ್ಕೆ ಸಾಕ್ಷಿಯಾಗಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

ಸ್ಥಳೀಯ ಸಾರ್ವಜನಿಕ ಚಂದ್ರಪ್ಪ ಮಾತನಾಡಿ, “ಮುಂಡರಗಿ ಪಟ್ಟಣದಲ್ಲಿ ಸಾರ್ವಜನಿಕ ಶೌಚಾಲಯಗಳ ಕೊರತೆ ಇದೆ. ಬಸ್ ನಿಲ್ದಾಣವನ್ನು ಹೊರತುಪಡಿಸಿದರೆ ಬೇರೆಡೆ ಸಾರ್ವಜನಿಕ ಶೌಚಾಲಯ ಸೌಲಭ್ಯವೇ ಇಲ್ಲ. ಸರ್ಕಾರಿ ಕಚೇರಿಗಳಲ್ಲಿ ಕನಿಷ್ಠ ಸೌಲಭ್ಯಗಳಾದ ನೀರು, ಶೌಚಾಲಯ ವ್ಯವಸ್ಥೆ ಇರಬೇಕು. ಆದರೆ ತಾಲೂಕಾಡಳಿತ ಭವನದಲ್ಲೇ ಈ ಸಮಸ್ಯೆ ಇರುವುದರಿಂದ ಜನರು ಸಂಕಷ್ಟ ಅನುಭವಿಸುತ್ತಿದ್ದಾರೆ” ಎಂದು ಹೇಳಿದರು.

ಒಟ್ಟಾರೆ, ಸಾರ್ವಜನಿಕರ ಸಮಸ್ಯೆಗಳಿಗೆ ಪರಿಹಾರ ಒದಗಿಸಬೇಕಾದ ತಾಲೂಕಾಡಳಿತ ಭವನದಲ್ಲೇ ಕುಡಿಯುವ ನೀರು ಹಾಗೂ ಶೌಚಾಲಯದಂತಹ ಮೂಲಭೂತ ಸೌಲಭ್ಯಗಳ ಕೊರತೆ ಕಾಣಿಸಿಕೊಂಡಿರುವುದು ಸಾರ್ವಜನಿಕ ವಲಯದಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ಇನ್ನಾದರೂ ಜಿಲ್ಲಾಡಳಿತ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಎಚ್ಚೆತ್ತುಕೊಂಡು ಮುಂಡರಗಿ ತಾಲೂಕಾಡಳಿತ ಸೌಧದಲ್ಲಿ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಒದಗಿಸಿ ಸಾರ್ವಜನಿಕರ ಸಮಸ್ಯೆಗೆ ಶೀಘ್ರ ಪರಿಹಾರ ಕಲ್ಪಿಸಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande