
ಗದಗ, 24 ಮೇ (ಹಿ.ಸ.) :
ಆ್ಯಂಕರ್ : ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಕೆ. ಪಾಟೀಲರು ಮೇ 25ರಂದು ಗದಗ ಜಿಲ್ಲೆಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದು, ಸಂತ್ರಸ್ತರ ಭೇಟಿ, ಸಭೆಗಳು ಹಾಗೂ ಕಾರ್ಯಕ್ರಮಗಳಿಗೆ ಚಾಲನೆ ನೀಡಲಿದ್ದಾರೆ.
ಬೆಳಿಗ್ಗೆ 10 ಗಂಟೆಗೆ ಸಚಿವರು ಗದಗ ನಗರದ ಗಂಗಿಮಡಿ ಪ್ರದೇಶಕ್ಕೆ ಭೇಟಿ ನೀಡಿ, ಇತ್ತೀಚಿನ ಮಳೆ ಹಾಗೂ ಗಾಳಿಯಿಂದ ಸಂಕಷ್ಟಕ್ಕೆ ಒಳಗಾದ ಸಂತ್ರಸ್ತರನ್ನು ಭೇಟಿ ಮಾಡಿ ಪರಿಸ್ಥಿತಿಯ ಪರಿಶೀಲನೆ ನಡೆಸಲಿದ್ದಾರೆ. ಸಂತ್ರಸ್ತರ ಸಮಸ್ಯೆಗಳು ಹಾಗೂ ಅಗತ್ಯ ಸೌಲಭ್ಯಗಳ ಕುರಿತು ಮಾಹಿತಿ ಪಡೆಯಲಿದ್ದಾರೆ.
ಇದಾದ ಬಳಿಕ ಬೆಳಿಗ್ಗೆ 11:30 ಗಂಟೆಗೆ ಜಿಲ್ಲಾಡಳಿತ ಭವನದಲ್ಲಿ ಪ್ರವಾಸೋದ್ಯಮ ಇಲಾಖೆಯ ವತಿಯಿಂದ ಮೊಬೈಲ್ ಕ್ಯಾಂಟೀನ್ ವಾಹನ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಯೋಜನೆಯಡಿ ಫಲಾನುಭವಿಗಳಿಗೆ ವಾಹನಗಳನ್ನು ವಿತರಿಸುವ ಕಾರ್ಯಕ್ರಮ ನಡೆಯಲಿದೆ.
ಅದೇ ವೇಳೆ ಜಿಲ್ಲಾಡಳಿತ ಭವನದಲ್ಲಿಯೇ ಜಿಲ್ಲಾ ಯೋಜನಾ ಸಮಿತಿ ಸಭೆ ನಡೆಸಲಿರುವ ಸಚಿವರು, ಜಿಲ್ಲೆಯ ಅಭಿವೃದ್ಧಿ ಕಾಮಗಾರಿಗಳು, ವಿವಿಧ ಇಲಾಖೆಗಳ ಪ್ರಗತಿ ಹಾಗೂ ಯೋಜನೆಗಳ ಅನುಷ್ಠಾನದ ಕುರಿತು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಿದ್ದಾರೆ.
ಮಧ್ಯಾಹ್ನ 12:30 ಗಂಟೆಗೆ ಜಿಲ್ಲಾಡಳಿತ ಭವನದಲ್ಲಿ “ಜನರ ಯೋಜನೆ ರೂಪಿಸುವ” ಕುರಿತಂತೆ ಗ್ರಾಮ ಪಂಚಾಯತ್ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಸ್ಥಳೀಯ ಮಟ್ಟದ ಅಭಿವೃದ್ಧಿ ಯೋಜನೆಗಳ ರೂಪುರೇಷೆ, ಜನಪಾಲ್ಗೊಳ್ಳುವಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ ಸಂಬಂಧಿಸಿದಂತೆ ಅಧಿಕಾರಿಗಳಿಗೆ ಅಗತ್ಯ ಮಾರ್ಗದರ್ಶನ ನೀಡುವ ಸಾಧ್ಯತೆ ಇದೆ.
ಜಿಲ್ಲಾ ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಅಗತ್ಯ ಸಿದ್ಧತೆಗಳನ್ನು ಕೈಗೊಂಡಿದೆ.
ಹಿಂದೂಸ್ತಾನ್ ಸಮಾಚಾರ್ / lalita MP