
ಬೆಂಗಳೂರು, 25 ಮೇ (ಹಿ.ಸ.) :
ಆ್ಯಂಕರ್ : ರಾಜ್ಯದ ಸರ್ಕಾರಿ ಶಾಲೆಗಳ ಗುಣಮಟ್ಟ ಹೆಚ್ಚಿಸುವುದು ಹಾಗೂ ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಶಾಲಾ ಶಿಕ್ಷಣ ಇಲಾಖೆಯು ಮಹತ್ವದ ಕ್ರಮಗಳನ್ನು ಕೈಗೊಂಡಿದೆ. ಮುಂಬರುವ ಶೈಕ್ಷಣಿಕ ವರ್ಷದ ಸಿದ್ಧತೆಗಳು ಹಾಗೂ ಹೊಸ ಯೋಜನೆಗಳ ಅನುಷ್ಠಾನ ಕುರಿತು ಇಂದು ‘ಸಮಗ್ರ ಶಿಕ್ಷಣ ಕರ್ನಾಟಕ’ ಕಚೇರಿಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಉನ್ನತ ಮಟ್ಟದ ಸಭೆ ನಡೆಯಿತು.
ಸಭೆಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅಧಿಕಾರಿಗಳು, ಶಿಕ್ಷಕರು, ಪ್ರಾಂಶುಪಾಲರು ಹಾಗೂ ಎಸ್ಡಿಎಂಸಿ ಸದಸ್ಯರೊಂದಿಗೆ ಸಮಗ್ರವಾಗಿ ಚರ್ಚೆ ನಡೆಸಿದರು. ಸರ್ಕಾರಿ ಶಾಲೆಗಳ ದಾಖಲಾತಿ ಹೆಚ್ಚಿಸುವುದು, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಗುಣಮಟ್ಟದ ಶಿಕ್ಷಣ ನೀಡುವ ಕುರಿತು ಹಲವು ಮಹತ್ವದ ನಿರ್ಧಾರಗಳನ್ನು ಸಭೆಯಲ್ಲಿ ವಿವರಿಸಲಾಯಿತು.
ಸರ್ಕಾರದ ಪ್ರಮುಖ ಯೋಜನೆಯಡಿ ರಾಜ್ಯಾದ್ಯಂತ 1,000 ‘ಕರ್ನಾಟಕ ಪಬ್ಲಿಕ್ ಶಾಲೆಗಳನ್ನು’ ಆರಂಭಿಸುವ ಗುರಿ ಹೊಂದಲಾಗಿದೆ. ಈ ಯೋಜನೆಗೆ ಜೂನ್ 1ರಂದು ಅಧಿಕೃತ ಚಾಲನೆ ದೊರೆಯಲಿದ್ದು, ಶಿವಮೊಗ್ಗದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ನೂತನ ಶಾಲೆಗಳ ಶಂಕುಸ್ಥಾಪನೆ ನೆರವೇರಲಿದೆ ಎಂದು ಸಚಿವರು ತಿಳಿಸಿದ್ದಾರೆ.
ಮೇ 29 ರಿಂದ 31ರವರೆಗೆ ಶಾಲಾ ಆವರಣಗಳನ್ನು ಸ್ವಚ್ಛಗೊಳಿಸಿ, ಜೂನ್ 1ರಂದು ತಳಿರು ತೋರಣಗಳಿಂದ ಅಲಂಕರಿಸಿ, ಸಮುದಾಯದ ಸಹಭಾಗಿತ್ವದಲ್ಲಿ ವಿಶೇಷ ಊಟದ ವ್ಯವಸ್ಥೆಯೊಂದಿಗೆ ವಿದ್ಯಾರ್ಥಿಗಳನ್ನು ಸಂಭ್ರಮದಿಂದ ಶಾಲೆಗೆ ಬರಮಾಡಿಕೊಳ್ಳಲು ಸೂಚಿಸಲಾಗಿದೆ.
ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಹಳೆಯ ವಿದ್ಯಾರ್ಥಿಗಳು, ದಾನಿಗಳು ಹಾಗೂ ಉದ್ಯಮಿಗಳು ಕೈಜೋಡಿಸುವಂತೆ ಮನವಿ ಮಾಡಲಾಗಿದೆ. ಸ್ಮಾರ್ಟ್ ಟಿವಿ, ಕುಡಿಯುವ ನೀರು, ಶೌಚಾಲಯ ಸೇರಿದಂತೆ ಮೂಲಸೌಲಭ್ಯಗಳ ಸುಧಾರಣೆಗೆ ಸಮುದಾಯದ ಸಹಕಾರ ಅಗತ್ಯವಿದೆ ಎಂದು ಸಚಿವರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh.M.B.