ಡೀಮ್ಡ್ ಅರಣ್ಯ ಸಮಸ್ಯೆ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ : ಸಚಿವ ಈಶ್ವರ ಖಂಡ್ರೆ
ಉಡುಪಿ, 25 ಮೇ (ಹಿ.ಸ.) : ಆ್ಯಂಕರ್ : ಬಿಜೆಪಿ ಸರ್ಕಾರದ ಅವಧಿಯಲ್ಲಿ ಪರಿಭಾವಿತ (ಡೀಮ್ಡ್) ಅರಣ್ಯ ಗುರುತಿಸುವಲ್ಲಿ ನಡೆದ ಲೋಪಗಳಿಂದ ಸಾರ್ವಜನಿಕರು ಹಲವು ಸಂಕಷ್ಟಗಳನ್ನು ಎದುರಿಸುತ್ತಿದ್ದು, ಸಮಸ್ಯೆ ಪರಿಹಾರಕ್ಕೆ ರಾಜ್ಯ ಸರ್ಕಾರ ಪ್ರಾಮಾಣಿಕ ಪ್ರಯತ್ನ ನಡೆಸುತ್ತಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ
ಖಂಡ್ರೆ


ಉಡುಪಿ, 25 ಮೇ (ಹಿ.ಸ.) :

ಆ್ಯಂಕರ್ : ಬಿಜೆಪಿ ಸರ್ಕಾರದ ಅವಧಿಯಲ್ಲಿ ಪರಿಭಾವಿತ (ಡೀಮ್ಡ್) ಅರಣ್ಯ ಗುರುತಿಸುವಲ್ಲಿ ನಡೆದ ಲೋಪಗಳಿಂದ ಸಾರ್ವಜನಿಕರು ಹಲವು ಸಂಕಷ್ಟಗಳನ್ನು ಎದುರಿಸುತ್ತಿದ್ದು, ಸಮಸ್ಯೆ ಪರಿಹಾರಕ್ಕೆ ರಾಜ್ಯ ಸರ್ಕಾರ ಪ್ರಾಮಾಣಿಕ ಪ್ರಯತ್ನ ನಡೆಸುತ್ತಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದರು.

ಕಾರ್ಕಳದಲ್ಲಿ ನೂತನವಾಗಿ ನಿರ್ಮಾಣಗೊಂಡ ವಲಯ ಅರಣ್ಯಾಧಿಕಾರಿಗಳು ಹಾಗೂ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿ ಕಟ್ಟಡವನ್ನು ಉದ್ಘಾಟಿಸಿ, ಅರಣ್ಯ ಹುತಾತ್ಮರಿಗೆ ಪುಷ್ಪನಮನ ಸಲ್ಲಿಸಿದ ಬಳಿಕ ಅವರು ಮಾತನಾಡಿದರು.

ಸರ್ಕಾರಿ ಕಟ್ಟಡಗಳು, ಶಾಲೆಗಳು, ಆಸ್ಪತ್ರೆಗಳು, ಅಂಗನವಾಡಿಗಳು ಹಾಗೂ ಪಟ್ಟಾ ಭೂಮಿಗಳು ಡೀಮ್ಡ್ ಅರಣ್ಯ ವ್ಯಾಪ್ತಿಗೆ ಸೇರಿರುವ ಹಿನ್ನೆಲೆಯಲ್ಲಿ ಜನರು ತೊಂದರೆ ಅನುಭವಿಸುತ್ತಿದ್ದಾರೆ. ಈ ಸಮಸ್ಯೆ ಪರಿಹರಿಸಲು ಸರ್ವೋಚ್ಚ ನ್ಯಾಯಾಲಯಕ್ಕೆ ಮರು ಮನವಿ ಸಲ್ಲಿಸುವ ಉದ್ದೇಶದಿಂದ ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ಸಮಿತಿಗಳನ್ನು ರಚಿಸಲಾಗಿದೆ ಎಂದು ಸಚಿವರು ತಿಳಿಸಿದರು.

ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಯಾವುದೇ ಅನ್ಯಾಯವಾಗದಂತೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು ಭರವಸೆ ನೀಡಿದ ಅವರು, ಅರಣ್ಯ ಸಂರಕ್ಷಣೆಯಲ್ಲಿ ಮುಂಚೂಣಿಯಲ್ಲಿರುವ ಸಿಬ್ಬಂದಿಯ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದರು.

ಅರಣ್ಯ ಸಿಬ್ಬಂದಿಯ ಸುರಕ್ಷತೆಗೆ ಅಗತ್ಯವಾದ ಆಧುನಿಕ ಸಾಧನಗಳು, ಮಳೆಯಿಂದ ರಕ್ಷಿಸುವ ಜಾಕೆಟ್, ಶೂ ಸೇರಿದಂತೆ ಸುರಕ್ಷತಾ ಉಪಕರಣಗಳನ್ನು ಒದಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಹೇಳಿದರು. ಜೊತೆಗೆ ಸಿಬ್ಬಂದಿಗೆ ಅಪಾಯ ಭತ್ಯೆ ಹಾಗೂ ವಸತಿ ಸೌಲಭ್ಯಗಳ ಕುರಿತು ಪರಿಶೀಲನೆ ನಡೆಸುವಂತೆಯೂ ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದ ಅಂಗವಾಗಿ ಸಚಿವರು ಕಚೇರಿ ಆವರಣದಲ್ಲಿ ಸಸಿ ನೆಟ್ಟು ಪರಿಸರ ಸಂರಕ್ಷಣೆಯ ಸಂದೇಶ ಸಾರಿದರು. ಬಳಿಕ ಕಟೀಲು ದುರ್ಗಾ ಪರಮೇಶ್ವರಿ ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಅವರು, ರಾಜ್ಯದಲ್ಲಿ ಉತ್ತಮ ಮಳೆ, ಬೆಳೆ ಹಾಗೂ ಸಮೃದ್ಧಿ ನೆಲೆಸಲೆಂದು ಪ್ರಾರ್ಥಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande