
ಬೆಂಗಳೂರು, 25 ಮೇ (ಹಿ.ಸ.) :
ಆ್ಯಂಕರ್ : ರಾಜ್ಯದ ಅಬಕಾರಿ ಹಾಗೂ ಮದ್ಯೋದ್ಯಮ ವಲಯದ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ ಎಂದು ಅಬಕಾರಿ ಸಚಿವ ಆರ್.ಬಿ. ತಿಮ್ಮಾಪೂರ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಖಾಸಗಿ ಹೋಟೆಲ್ನಲ್ಲಿ ಇಂಡಿಯನ್ ಚೇಂಬರ್ ಆಫ್ ಕಾಮರ್ಸ್ (ಐಸಿಸಿ) ನೇತೃತ್ವದಲ್ಲಿ ಆಯೋಜಿಸಲಾದ “ಐಸಿಸಿ ಬ್ರುವೇರಿ ಮತ್ತು ಡಿಸ್ಟಲರಿ ಸಮಾವೇಶ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ”ದಲ್ಲಿ ಭಾಗವಹಿಸಿ ಮಾತನಾಡಿದ ಅವರು, ರಾಜ್ಯದ ಆರ್ಥಿಕ ಪ್ರಗತಿಯಲ್ಲಿ ಅಬಕಾರಿ ಇಲಾಖೆಯ ಜೊತೆಗೆ ಬ್ರುವೇರಿ ಮತ್ತು ಡಿಸ್ಟಲರಿ ಉದ್ಯಮದ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಹೇಳಿದರು.
ಉದ್ಯಮದ ಸಮಗ್ರ ಅಭಿವೃದ್ಧಿ, ಹೊಸ ತಂತ್ರಜ್ಞಾನಗಳ ಅಳವಡಿಕೆ, ಪಾರದರ್ಶಕತೆ ಹೆಚ್ಚಿಸುವುದು ಹಾಗೂ ಭವಿಷ್ಯದಲ್ಲಿ ಎದುರಾಗಬಹುದಾದ ಸವಾಲುಗಳ ಕುರಿತು ಉದ್ಯಮ ವಲಯದ ಪ್ರಮುಖರೊಂದಿಗೆ ಸಮಗ್ರ ಚರ್ಚೆ ನಡೆಸಲಾಗಿದೆ ಎಂದು ಸಚಿವರು ತಿಳಿಸಿದರು.
ರಾಜ್ಯ ಸರ್ಕಾರವು ಕಾನೂನುಬದ್ಧ ಹಾಗೂ ಸುಸ್ಥಿರ ಬೆಳವಣಿಗೆಗೆ ಆದ್ಯತೆ ನೀಡುತ್ತಿದ್ದು, ಉದ್ಯಮದ ಅಭಿವೃದ್ಧಿಗೆ ಅಗತ್ಯ ಸಹಕಾರ ಮತ್ತು ಬೆಂಬಲವನ್ನು ಮುಂದುವರಿಸಲಾಗುವುದು ಎಂದು ಅವರು ಭರವಸೆ ನೀಡಿದರು.
ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಉತ್ತಮ ಸಾಧನೆಗೈದು ಪ್ರಶಸ್ತಿ ಪಡೆದ ಸಾಧಕರು ಹಾಗೂ ಸಂಸ್ಥೆಗಳನ್ನು ಅಭಿನಂದಿಸಿದ ಸಚಿವರು, ಅವರ ಮುಂದಿನ ಕಾರ್ಯಚಟುವಟಿಕೆಗಳಿಗೆ ಶುಭ ಹಾರೈಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh.M.B.