ಬೆಂಗಳೂರಿನಲ್ಲಿ ಮುಂಗಾರು ಪೂರ್ವ ಅಬ್ಬರ ; ಭಾರಿ ಮಳೆಗೆ ಮೆಟ್ರೋ ಸಂಚಾರ ಸ್ಥಗಿತ
ವೈಟ್ಫೀಲ್ಡ್
Rain


ಬೆಂಗಳೂರು, 26 ಮೇ (ಹಿ.ಸ.) :

ಆ್ಯಂಕರ್ : ರಾಜ್ಯದಲ್ಲಿ ಪೂರ್ವ ಮುಂಗಾರು ಮಳೆ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ರಾಜಧಾನಿ ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಗುಡುಗು, ಸಿಡಿಲು ಹಾಗೂ ಬಿರುಗಾಳಿ ಸಹಿತ ಭಾರಿ ಮಳೆಯಾಗಿದೆ.

ಕಳೆದ ಕೆಲವು ದಿನಗಳಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸುರಿಯುತ್ತಿರುವ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಹಲವೆಡೆ ಅವಾಂತರಗಳ ಸರಮಾಲೆ ಸೃಷ್ಟಿಯಾಗಿದೆ.

ಮುಂಗಾರು ಅಧಿಕೃತವಾಗಿ ಆರಂಭವಾಗಲು ಇನ್ನೂ ಕೆಲವೇ ದಿನಗಳು ಬಾಕಿ ಇರುವಾಗಲೇ ಮಳೆಯ ಅಬ್ಬರ ಹೆಚ್ಚಾಗಿರುವುದು ಜನರಲ್ಲಿ ಆತಂಕ ಮೂಡಿಸಿದೆ.

ಬೆಂಗಳೂರಿನ ಹಲವು ಭಾಗಗಳಲ್ಲಿ ಸಂಜೆ ವೇಳೆಗೆ ಏಕಾಏಕಿ ಕತ್ತಲೆ ಆವರಿಸಿಕೊಂಡು ಭಾರಿ ಮಳೆಯಾಗಿದ್ದು, ವಾಹನ ಸವಾರರು ಮತ್ತು ಸಾರ್ವಜನಿಕರು ಪರದಾಡುವಂತಾಯಿತು.

ನಮ್ಮ ಮೆಟ್ರೋ ಹಳಿಯ ಮೇಲೆ ಮರದ ಕೊಂಬೆ ಬಿದ್ದ ಪರಿಣಾಮ ವೈಟ್‌ ಫೀಲ್ಡ್ ಮಾರ್ಗದಲ್ಲಿ ಮೆಟ್ರೋ ಸಂಚಾರ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಯಿತು.

ಐಟಿಪಿಎಲ್ ಮತ್ತು ಸತ್ಯಸಾಯಿ ಪ್ರಶಾಂತ್ ನಿಲಯಂ ನಿಲ್ದಾಣಗಳ ಮಧ್ಯೆ ಹಳಿಯ ಮೇಲೆ ಮರದ ಕೊಂಬೆ ಬಿದ್ದ ಹಿನ್ನೆಲೆ ಸಂಜೆ 6 ಗಂಟೆಯಿಂದ ವೈಟ್‌ ಫೀಲ್ಡ್ ಮತ್ತು ಗರುಡಾಚಾರ್ ಪಾಳ್ಯ ನಡುವಿನ ಮೆಟ್ರೋ ರೈಲು ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.

ಇನ್ನೊಂದೆಡೆ, ಗರುಡಾಚಾರ್ ಪಾಳ್ಯದಿಂದ ಚಲ್ಘಟ್ಟ ನಡುವಿನ ಮಾರ್ಗದಲ್ಲಿ ಮಾತ್ರ ಮೆಟ್ರೋ ರೈಲು ಸಂಚಾರ ಮುಂದುವರಿದಿದೆ. ಮಳೆಯಿಂದಾಗಿ ತಾಂತ್ರಿಕ ಮತ್ತು ಸುರಕ್ಷತಾ ಸಮಸ್ಯೆಗಳು ಎದುರಾಗದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹವಾಮಾನ ಇಲಾಖೆ ಬೆಂಗಳೂರು ನಗರಕ್ಕೆ ಯೆಲ್ಲೋ ಅಲರ್ಟ್ ಘೋಷಿಸಿದ್ದ ಹಿನ್ನೆಲೆ, ನಗರದ ಹಲವೆಡೆ ಮಳೆಯ ಆರ್ಭಟ ಕಂಡು ಬಂದಿದೆ. ರಾಜಾಜಿನಗರ, ಮಹಾಲಕ್ಷ್ಮಿ ಲೇಔಟ್, ಮಲ್ಲೇಶ್ವರಂ, ಶೇಷಾದ್ರಿಪುರಂ, ಮೆಜೆಸ್ಟಿಕ್, ಯಶವಂತಪುರ ಹಾಗೂ ವಿಧಾನ ಸೌಧ ಸುತ್ತಮುತ್ತ ಭಾರಿ ಮಳೆ ಸುರಿದಿದೆ. ಮಿಂಚು ಮತ್ತು ಬಿರುಗಾಳಿ ಸಹಿತ ಮಳೆ ಸುರಿದ ಪರಿಣಾಮ ರಸ್ತೆಗಳ ಮೇಲೆ ನೀರು ನಿಂತು ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande