
ಗದಗ, 27 ಮೇ (ಹಿ.ಸ.) :
ಆ್ಯಂಕರ್ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ–2026 ಕಾರ್ಯವನ್ನು ಪರಿಣಾಮಕಾರಿಯಾಗಿ ಹಾಗೂ ಪಾರದರ್ಶಕವಾಗಿ ಜಾರಿಗೊಳಿಸುವ ನಿಟ್ಟಿನಲ್ಲಿ ಗದಗ ಜಿಲ್ಲಾ ಆಡಳಿತ ಮಹತ್ವದ ಹೆಜ್ಜೆ ಇಟ್ಟಿದ್ದು, ಈ ಕುರಿತು ಜಿಲ್ಲೆಯ ನೋಂದಾಯಿತ ಮಾನ್ಯತೆ ಪಡೆದ ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ಮಹತ್ವದ ಸಭೆ ನಡೆಸಲಾಯಿತು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಗೆ ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಅಧ್ಯಕ್ಷತೆ ವಹಿಸಿದ್ದರು. ಸಭೆಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ–2026 ಸಂಬಂಧ ಭಾರತ ಚುನಾವಣಾ ಆಯೋಗ ಹೊರಡಿಸಿರುವ ಮಾರ್ಗಸೂಚಿಗಳು, ವೇಳಾಪಟ್ಟಿ, ಪೂರ್ವ ತಯಾರಿ ಕ್ರಮಗಳು ಹಾಗೂ ಜಿಲ್ಲೆಯಲ್ಲಿನ ಚುನಾವಣಾ ವ್ಯವಸ್ಥೆಯ ಕುರಿತು ಸಮಗ್ರ ಮಾಹಿತಿ ನೀಡಲಾಯಿತು.
ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್, ಭಾರತ ಚುನಾವಣಾ ಆಯೋಗವು 2026ರ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯ ಕೈಗೊಳ್ಳುವ ಸಂಬಂಧ 2026ರ ಮೇ 14ರಂದು ಮಾರ್ಗಸೂಚಿ ಪ್ರಕಟಿಸಿರುವ ಹಿನ್ನೆಲೆಯಲ್ಲಿ, ಜಿಲ್ಲೆಯಲ್ಲಿನ ರಾಜಕೀಯ ಪಕ್ಷಗಳ ಮುಖಂಡರಿಗೆ ಪರಿಷ್ಕರಣೆ ಕಾರ್ಯದ ಸಂಪೂರ್ಣ ವಿವರಗಳನ್ನು ತಿಳಿಸುವ ಉದ್ದೇಶದಿಂದ ಸಭೆ ಆಯೋಜಿಸಲಾಗಿದೆ ಎಂದು ಹೇಳಿದರು.
ಮತದಾರರ ಪಟ್ಟಿ ಪರಿಷ್ಕರಣೆ ಚುನಾವಣಾ ವ್ಯವಸ್ಥೆಯ ಅತ್ಯಂತ ಪ್ರಮುಖ ಪ್ರಕ್ರಿಯೆಯಾಗಿದ್ದು, ಅರ್ಹ ಪ್ರತಿಯೊಬ್ಬ ನಾಗರಿಕನ ಹೆಸರು ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗುವುದು ಹಾಗೂ ಅನರ್ಹ ಹೆಸರುಗಳ ವಿಲೇವಾರಿ ಆಗುವುದು ಪ್ರಜಾಪ್ರಭುತ್ವದ ದೃಷ್ಟಿಯಿಂದ ಅತ್ಯಗತ್ಯವಾಗಿದೆ. ಈ ಕಾರ್ಯ ಯಶಸ್ವಿಯಾಗಲು ಆಡಳಿತದೊಂದಿಗೆ ರಾಜಕೀಯ ಪಕ್ಷಗಳು ಸಹಕರಿಸುವುದು ಅವಶ್ಯಕ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಜಿಲ್ಲೆಯ ಚುನಾವಣಾ ವ್ಯವಸ್ಥೆಯ ಕುರಿತು ಮಾಹಿತಿ ನೀಡಿದ ಅವರು, ಗದಗ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 967 ಮತಗಟ್ಟೆಗಳು ಕಾರ್ಯನಿರ್ವಹಿಸುತ್ತಿದ್ದು, ಜಿಲ್ಲೆಯ ಒಟ್ಟು ಮತದಾರರ ಸಂಖ್ಯೆ 9,05,206 ಆಗಿದೆ ಎಂದು ತಿಳಿಸಿದರು.
ಈ ಪೈಕಿ 4,48,794 ಪುರುಷ ಮತದಾರರು, 4,56,352 ಮಹಿಳಾ ಮತದಾರರು ಹಾಗೂ 60 ತೃತೀಯಲಿಂಗಿ ಮತದಾರರು ಜಿಲ್ಲೆಯ ಮತದಾರರ ಪಟ್ಟಿಯಲ್ಲಿ ದಾಖಲಾಗಿದ್ದಾರೆ. ಮಹಿಳಾ ಮತದಾರರ ಸಂಖ್ಯೆ ಪುರುಷರಿಗಿಂತ ಹೆಚ್ಚಿರುವುದು ಜಿಲ್ಲೆಯ ಚುನಾವಣಾ ಅಂಕಿಅಂಶಗಳಲ್ಲಿ ಗಮನಾರ್ಹ ಬೆಳವಣಿಗೆಯಾಗಿದೆ ಎಂದು ಸಭೆಯಲ್ಲಿ ವಿವರಿಸಲಾಯಿತು.
ಮತದಾರರ ಪಟ್ಟಿಯ ನಿರ್ವಹಣೆ ಹಾಗೂ ಪರಿಷ್ಕರಣೆ ಕಾರ್ಯಕ್ಕಾಗಿ ಜಿಲ್ಲೆಯಲ್ಲಿ ವ್ಯಾಪಕ ಆಡಳಿತಾತ್ಮಕ ವ್ಯವಸ್ಥೆ ರೂಪಿಸಲಾಗಿದೆ. ಪ್ರತಿ ಮತಗಟ್ಟೆಗೆ ಒಬ್ಬರಂತೆ ಒಟ್ಟು 967 ಮತಗಟ್ಟೆ ಮಟ್ಟದ ಅಧಿಕಾರಿಗಳು (BLO) ಕಾರ್ಯನಿರ್ವಹಿಸುತ್ತಿದ್ದು, ಪ್ರತಿ 10 ಬಿ.ಎಲ್.ಓಗಳಿಗೆ ಒಬ್ಬರಂತೆ 97 ಬಿ.ಎಲ್.ಓ ಮೇಲ್ವಿಚಾರಕರನ್ನು ನೇಮಕ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಇದೇ ವೇಳೆ, ಹಳೆಯ ಮತದಾರರ ಪಟ್ಟಿಯ ಮಾಹಿತಿಯನ್ನು ನವೀಕರಿಸುವ ಕಾರ್ಯವೂ ಪ್ರಗತಿಯಲ್ಲಿದ್ದು, 2002ರ ಮತದಾರರ ಪಟ್ಟಿಗೆ 2025ರ ಮತದಾರರನ್ನು ಮ್ಯಾಪಿಂಗ್ ಮಾಡುವ ಪ್ರಕ್ರಿಯೆಯಲ್ಲಿ ಜಿಲ್ಲೆ ಗಮನಾರ್ಹ ಸಾಧನೆ ಮಾಡಿದೆ ಎಂದು ಹೇಳಿದರು. ಜಿಲ್ಲೆಯ ಒಟ್ಟು 9,05,206 ಮತದಾರರ ಪೈಕಿ 8,26,953 ಮತದಾರರ ಮಾಹಿತಿಯನ್ನು ಯಶಸ್ವಿಯಾಗಿ ಮ್ಯಾಪಿಂಗ್ ಮಾಡಲಾಗಿದ್ದು, ಶೇಕಡಾ 91.36ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದು ಮಾಹಿತಿ ನೀಡಿದರು.
ಮತದಾರರ ಸಂಖ್ಯೆ ಆಧಾರಿತ ಮತಗಟ್ಟೆಗಳ ವಿವರಗಳು ಹಾಗೂ ಮತಗಟ್ಟೆ ಸಂಖ್ಯೆವಾರು ಸ್ಥಳಗಳ ಮಾಹಿತಿ ಸಭೆಯಲ್ಲಿ ಹಂಚಿಕೊಳ್ಳಲಾಯಿತು.
ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯವನ್ನು ಮತ್ತಷ್ಟು ಪರಿಣಾಮಕಾರಿಯಾಗಿಸಲು ಜಿಲ್ಲೆಯ ಎಲ್ಲಾ 967 ಮತಗಟ್ಟೆಗಳಿಗೆ ಮತಗಟ್ಟೆ ಮಟ್ಟದ ಏಜೆಂಟ್ಗಳನ್ನು (BLA) ನೇಮಕ ಮಾಡಿ ಅದರ ಪಟ್ಟಿಯನ್ನು ಚುನಾವಣಾ ಅಧಿಕಾರಿಗಳಿಗೆ ಸಲ್ಲಿಸುವಂತೆ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಜಿಲ್ಲಾಧಿಕಾರಿಗಳು ಸೂಚಿಸಿದರು.
ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯವನ್ನು ಯಶಸ್ವಿಯಾಗಿ ಪೂರ್ಣಗೊಳಿಸಲು ಬಿ.ಎಲ್.ಓಗಳು, ಸಹಾಯಕ ಮತದಾರ ನೋಂದಣಾಧಿಕಾರಿಗಳು, ಮತದಾರ ನೋಂದಣಾಧಿಕಾರಿಗಳು ಹಾಗೂ ಚುನಾವಣಾ ಸಿಬ್ಬಂದಿಯೊಂದಿಗೆ ರಾಜಕೀಯ ಪಕ್ಷಗಳು ಸಮನ್ವಯ ಸಾಧಿಸಿ ಸಹಕಾರ ನೀಡಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಮನವಿ ಮಾಡಿದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್, ಅಪರ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್., ಜಿಲ್ಲೆಯ ಮತದಾರರ ನೋಂದಣಾಧಿಕಾರಿಗಳು, ಚುನಾವಣಾ ತಹಶೀಲ್ದಾರರು, ಎಲ್ಲ ಸಹಾಯಕ ಮತದಾರ ನೋಂದಣಾಧಿಕಾರಿಗಳು, ತಹಶೀಲ್ದಾರರು ಹಾಗೂ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.
ಸಭೆಯಲ್ಲಿ ರಾಜಕೀಯ ಪಕ್ಷಗಳ ಮುಖಂಡರು ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ತಮ್ಮ ಅಭಿಪ್ರಾಯಗಳು ಹಾಗೂ ಸಲಹೆಗಳನ್ನು ಹಂಚಿಕೊಂಡರು. ಚುನಾವಣಾ ಆಯೋಗದ ನಿರ್ದೇಶನದಂತೆ ಪಾರದರ್ಶಕ, ನಿಖರ ಹಾಗೂ ಸಮಗ್ರ ಮತದಾರರ ಪಟ್ಟಿ ಸಿದ್ಧಪಡಿಸಲು ಜಿಲ್ಲಾಡಳಿತ ಬದ್ಧವಾಗಿದೆ ಎಂಬ ಸಂದೇಶ ಸಭೆಯಿಂದ ಹೊರಬಂದಿತು.
ಹಿಂದೂಸ್ತಾನ್ ಸಮಾಚಾರ್ / lalita MP