
ಗದಗ, 27 ಮೇ (ಹಿ.ಸ.) :
ಆ್ಯಂಕರ್ : ಮೇ 27: 2026-27ನೇ ಸಾಲಿನ ತೋಟಗಾರಿಕೆ ಅಭಿವೃದ್ಧಿಗೆ ಉತ್ತೇಜನ ನೀಡುವ ಉದ್ದೇಶದಿಂದ ತೋಟಗಾರಿಕೆ ಇಲಾಖೆ ವತಿಯಿಂದ ವಿವಿಧ ಯೋಜನೆಗಳಡಿ ಸಹಾಯಧನ ಸೌಲಭ್ಯ ಪಡೆಯಲು ಗದಗ ತಾಲ್ಲೂಕಿನ ತೋಟಗಾರಿಕೆ ಬೆಳೆಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ.
ರೈತರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಇಲಾಖೆ ಮನವಿ ಮಾಡಿದ್ದು, ಅರ್ಜಿ ಸಲ್ಲಿಸಲು ಜೂನ್ 15 ಕೊನೆಯ ದಿನಾಂಕ ಎಂದು ತಿಳಿಸಲಾಗಿದೆ.
ಕೇಂದ್ರ ಪುರಸ್ಕೃತ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆ ಅಡಿಯಲ್ಲಿ ಹೊಸ ಪ್ರದೇಶ ವಿಸ್ತರಣೆ ಕಾರ್ಯಕ್ರಮದ ಮೂಲಕ ಹಲವು ಬೆಳೆಗಳು ಹಾಗೂ ಕೃಷಿ ಚಟುವಟಿಕೆಗಳಿಗೆ ಸಹಾಯಧನ ನೀಡಲಾಗುತ್ತಿದೆ. ತೋಟಗಾರಿಕೆ ಕ್ಷೇತ್ರದಲ್ಲಿ ಹೊಸ ಬೆಳೆಗಳ ಅಳವಡಿಕೆ, ಉತ್ಪಾದಕತೆ ಹೆಚ್ಚಳ, ಆಧುನಿಕ ತಂತ್ರಜ್ಞಾನ ಬಳಕೆ ಮತ್ತು ರೈತರ ಆದಾಯ ವೃದ್ಧಿಗೆ ನೆರವಾಗುವ ಉದ್ದೇಶದಿಂದ ಈ ಯೋಜನೆ ಜಾರಿಗೊಳಿಸಲಾಗಿದೆ.
ಯೋಜನೆಯಡಿ ಪ್ರಮುಖವಾಗಿ ಬಾಳೆ (ಕಂದು/ಟಿ.ಸಿ), ಡ್ರ್ಯಾಗನ್ ಫ್ರೂಟ್, ಚಿಕ್ಕು, ಮಾವು, ಪಪಾಯ, ದಾಳಿಂಬೆ, ಲಿಂಬೆ, ಪೇರಲ, ಹುಣಸೆ, ನೇರಳೆ ಸೇರಿದಂತೆ ವಿವಿಧ ತೋಟಗಾರಿಕೆ ಬೆಳೆಗಳ ಹೊಸ ಪ್ರದೇಶ ವಿಸ್ತರಣೆಗೆ ಸಹಾಯಧನ ನೀಡಲಾಗುತ್ತಿದೆ. ಇದಲ್ಲದೆ, ಹೈಬ್ರೀಡ್ ತರಕಾರಿ ಬೆಳೆಗಳು, ಗುಲಾಬಿ, ಸುಗಂಧರಾಜ, ಸೇವಂತಿಗೆ, ಆಯಸ್ಟರ್, ಚಂಡುಹೂ ಸೇರಿದಂತೆ ವಿವಿಧ ಹೂಬೆಳೆಗಳ ಬೆಳವಣಿಗೆಗೂ ಪ್ರೋತ್ಸಾಹ ನೀಡಲಾಗುತ್ತಿದೆ.
ತೋಟಗಾರಿಕೆ ಇಲಾಖೆ ಪ್ರಕಟಿಸಿರುವ ಯೋಜನೆಗಳಲ್ಲಿ ಔಷಧ ಹಾಗೂ ಸುಗಂಧ ದ್ರವ್ಯ ಬೆಳೆಗಳ ಪ್ರದೇಶ ವಿಸ್ತರಣೆ, ಮಾವು ಪುನಶ್ಚೇತನ ಕಾರ್ಯಕ್ರಮ, ಪ್ಲಾಸ್ಟಿಕ್ ಮಲ್ಚಿಂಗ್, ವೈಯಕ್ತಿಕ ನೀರು ಸಂಗ್ರಹಣಾ ಘಟಕ ನಿರ್ಮಾಣ, ಕಡಿಮೆ ವೆಚ್ಚದ ಉಳ್ಳಾಗಡ್ಡಿ ಶೇಖರಣಾ ಘಟಕ ನಿರ್ಮಾಣ ಸೇರಿದಂತೆ ಅನೇಕ ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳಿಗೆ ಸಹ ಅನುದಾನ ದೊರೆಯಲಿದೆ.
ಆಧುನಿಕ ಕೃಷಿ ಪದ್ಧತಿಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಪಾಲಿಹೌಸ್ ನಿರ್ಮಾಣ, ವೀಡ್ಮ್ಯಾಟ್, ಆಂಟಿ ಬರ್ಡ್ ನೆಟ್ ಅಳವಡಿಕೆ, ಸಮಗ್ರ ಕೀಟ ಮತ್ತು ಪೋಷಕಾಂಶ ನಿರ್ವಹಣೆ, ಎರೆಹುಳು ಗೊಬ್ಬರ ಘಟಕ ಸ್ಥಾಪನೆ ಸೇರಿದಂತೆ ಪರಿಸರ ಸ್ನೇಹಿ ಮತ್ತು ವೈಜ್ಞಾನಿಕ ಕೃಷಿ ಚಟುವಟಿಕೆಗಳಿಗೆ ಸಹಾಯಧನ ನೀಡಲಾಗುತ್ತಿದೆ.
ಇದರ ಜೊತೆಗೆ ಕೃಷಿಯಲ್ಲಿ ಯಾಂತ್ರೀಕರಣಕ್ಕೆ ಹೆಚ್ಚಿನ ಒತ್ತು ನೀಡಿರುವ ಇಲಾಖೆ, 20 ಹೆಚ್.ಪಿ.ವರೆಗಿನ ಮಿನಿ ಟ್ರ್ಯಾಕ್ಟರ್, ಟ್ರ್ಯಾಕ್ಟರ್ ಚಾಲಿತ ಸ್ಪ್ರೇಯರ್, ಮೊಬೈಲ್ ವೆಂಡಿಂಗ್ ಕಾರ್ಟ್ ಸೇರಿದಂತೆ ವಿವಿಧ ಕೃಷಿ ಉಪಕರಣಗಳನ್ನು ಖರೀದಿಸಲು ಸಹ ರೈತರಿಗೆ ನೆರವು ಒದಗಿಸುತ್ತಿದೆ.
ಈ ಯೋಜನೆಗಳ ಸೌಲಭ್ಯ ಪಡೆಯಲು ಆಸಕ್ತ ಸಾಮಾನ್ಯ ವರ್ಗದ ರೈತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಮಹಿಳಾ ರೈತರು ಅರ್ಜಿ ಸಲ್ಲಿಸಬಹುದಾಗಿದೆ. ಸರ್ಕಾರದ ವಿವಿಧ ಯೋಜನೆಗಳ ಪ್ರಯೋಜನವನ್ನು ಪಡೆಯಲು ಅರ್ಹ ರೈತರು ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸುವಂತೆ ಇಲಾಖೆ ಮನವಿ ಮಾಡಿದೆ.
ಹೆಚ್ಚಿನ ಮಾಹಿತಿಗಾಗಿ ರೈತರು ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿಗಳನ್ನು ಸಂಪರ್ಕಿಸಬಹುದು. ಅಲ್ಲದೆ, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿ.ಪಂ) ಗದಗ ಅವರ ಕಚೇರಿಯಿಂದ ಯೋಜನೆಗಳ ಕುರಿತು ಸಂಪೂರ್ಣ ಮಾಹಿತಿ ಹಾಗೂ ಅರ್ಜಿ ಸಲ್ಲಿಕೆ ಸಂಬಂಧಿಸಿದ ಮಾರ್ಗದರ್ಶನ ಪಡೆಯಬಹುದಾಗಿದೆ ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / lalita MP