
ಧಾರವಾಡ, 27 ಮೇ (ಹಿ.ಸ.) :
ಆ್ಯಂಕರ್ : ಬ್ಯಾಂಕ್ ಆಫ್ ಬರೋಡಾ ಹಾಗೂ ಲೀಡ್ ಬ್ಯಾಂಕ್ ಕಚೇರಿ ಧಾರವಾಡ ಇವರ ವತಿಯಿಂದ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಮಿತಿ ಸಭೆ ಮತ್ತು ಜಿಲ್ಲಾ ಸಲಹಾ ಸಮಿತಿ ಸಭೆಯು ಮಾರ್ಚ್ 2026ರ ತ್ರೈಮಾಸಿಕ ಅವಧಿಗೆ ಸಂಬಂಧಿಸಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.
ಸಭೆಗೆ ಧಾರವಾಡ ಜಿಲ್ಲೆಯ ಜಿಲ್ಲಾಧಿಕಾರಿಗಳು ಅಧ್ಯಕ್ಷತೆ ವಹಿಸಿ, ಜಿಲ್ಲೆಯ ಬ್ಯಾಂಕಿಂಗ್ ಕ್ಷೇತ್ರದ ಪ್ರಗತಿ, ವಿವಿಧ ಸರ್ಕಾರಿ ಯೋಜನೆಗಳ ಅನುಷ್ಠಾನ, ಕೃಷಿ ಹಾಗೂ ಕೈಗಾರಿಕಾ ಸಾಲ ವಿತರಣೆ ಸೇರಿದಂತೆ ಹಲವು ಪ್ರಮುಖ ವಿಷಯಗಳ ಕುರಿತು ಚರ್ಚಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಯೋಜನಾ ನಿರ್ದೇಶಕರು, ಕೆನರಾ ಬ್ಯಾಂಕ್, ಹುಬ್ಬಳ್ಳಿ ಸಹಾಯಕ ಪ್ರಾದೇಶಿಕ ಪ್ರಬಂಧಕರು, ಕರ್ನಾಟಕ ಗ್ರಾಮೀಣ ಬ್ಯಾಂಕ್, ಧಾರವಾಡ ಪ್ರಾದೇಶಿಕ ಪ್ರಬಂಧಕರು, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು, ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ ಜಿಲ್ಲಾ ಅಭಿವೃದ್ಧಿ ವ್ಯವಸ್ಥಾಪಕರು, ಕೆನರಾ ಬ್ಯಾಂಕ್ ವಿದ್ಯಾಗಿರಿ ಶಾಖೆಯ ಹಿರಿಯ ಪ್ರಬಂಧಕರು ಸೇರಿದಂತೆ ವಿವಿಧ ಬ್ಯಾಂಕುಗಳ ಅಧಿಕಾರಿಗಳು ಹಾಗೂ ಜಿಲ್ಲಾ ಸಲಹಾ ಸಮಿತಿ ಸದಸ್ಯರು ಉಪಸ್ಥಿತರಿದ್ದರು.
ಜಿಲ್ಲೆಯಲ್ಲಿ ಕೃಷಿ, ಸಣ್ಣ ಕೈಗಾರಿಕೆ, ಸ್ವಯಂ ಉದ್ಯೋಗ, ಮಹಿಳಾ ಸ್ವಸಹಾಯ ಸಂಘಗಳು ಹಾಗೂ ಗ್ರಾಮೀಣಾಭಿವೃದ್ಧಿ ಯೋಜನೆಗಳಿಗೆ ನೀಡಲಾಗುತ್ತಿರುವ ಸಾಲ ಸೌಲಭ್ಯಗಳ ಪ್ರಗತಿಯನ್ನು ಸಭೆಯಲ್ಲಿ ಪರಿಶೀಲಿಸಲಾಯಿತು. ಸರ್ಕಾರದ ವಿವಿಧ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಬ್ಯಾಂಕುಗಳು ಮತ್ತು ಸಂಬಂಧಿತ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು.
ಸಾರ್ವಜನಿಕರಿಗೆ ತ್ವರಿತ ಹಾಗೂ ಸುಲಭ ಬ್ಯಾಂಕಿಂಗ್ ಸೇವೆ ಒದಗಿಸುವುದು ಬ್ಯಾಂಕುಗಳ ಜವಾಬ್ದಾರಿಯಾಗಿದ್ದು, ಗ್ರಾಮೀಣ ಪ್ರದೇಶಗಳಲ್ಲಿಯೂ ಬ್ಯಾಂಕಿಂಗ್ ಸೇವೆಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ವಿಸ್ತರಿಸಬೇಕೆಂದು ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಯಿತು.
ಸಭೆಯಲ್ಲಿ ಭಾಗವಹಿಸಿದ್ದ ಅಧಿಕಾರಿಗಳು ಜಿಲ್ಲೆಯ ಆರ್ಥಿಕಾಭಿವೃದ್ಧಿಗೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ಸಲಹೆ ಹಾಗೂ ಅಭಿಪ್ರಾಯಗಳನ್ನು ಹಂಚಿಕೊಂಡರು.
ಹಿಂದೂಸ್ತಾನ್ ಸಮಾಚಾರ್ / Rakesh.M.B.