ಶಿವಮೊಗ್ಗ ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಸಚಿವರ ಸಭೆ
ಶಿವಮೊಗ್ಗ, 27 ಮೇ (ಹಿ.ಸ.) : ಆ್ಯಂಕರ್ : ಶಿವಮೊಗ್ಗ ಜಿಲ್ಲೆಯ ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಮಹತ್ವದ ಹೆಜ್ಜೆಯಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಇಂದು ಶಿವಮೊಗ್ಗ ನಗರದ ಖಾಸಗಿ ಹೋಟೆಲ್ನಲ್ಲಿ ಜಿಲ್ಲೆಯ ಖಾಸಗಿ ಹಾಗೂ ಅನುದಾನಿತ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರೊಂದಿಗೆ ಮಹತ್ವದ ಸಭೆ ನಡೆಸಿದರು.
Meeting


ಶಿವಮೊಗ್ಗ, 27 ಮೇ (ಹಿ.ಸ.) :

ಆ್ಯಂಕರ್ : ಶಿವಮೊಗ್ಗ ಜಿಲ್ಲೆಯ ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಮಹತ್ವದ ಹೆಜ್ಜೆಯಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಇಂದು ಶಿವಮೊಗ್ಗ ನಗರದ ಖಾಸಗಿ ಹೋಟೆಲ್ನಲ್ಲಿ ಜಿಲ್ಲೆಯ ಖಾಸಗಿ ಹಾಗೂ ಅನುದಾನಿತ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರೊಂದಿಗೆ ಮಹತ್ವದ ಸಭೆ ನಡೆಸಿದರು.

ಸಭೆಯಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಹಲವು ಪ್ರಮುಖ ವಿಚಾರಗಳ ಕುರಿತು ಸುದೀರ್ಘ ಚರ್ಚೆ ನಡೆಯಿತು. ಸಭೆಯಲ್ಲಿ ಪ್ರಸಕ್ತ ಸಾಲಿನ ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿ ಜಿಲ್ಲೆಯ ಕೀರ್ತಿ ಹೆಚ್ಚಿಸಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿರುವ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಸಿದ್ಧತೆಗಳನ್ನು ಪರಿಶೀಲಿಸಲಾಯಿತು.

ಇದೇ ವೇಳೆ ಜೂನ್ 1ರಂದು ಶಿವಮೊಗ್ಗದಲ್ಲಿ ನಡೆಯಲಿರುವ ಮಹತ್ವಾಕಾಂಕ್ಷಿ ಕರ್ನಾಟಕ ಪಬ್ಲಿಕ್ ಶಾಲೆ (KPS) ಶಂಕುಸ್ಥಾಪನೆ ಕಾರ್ಯಕ್ರಮದ ಯಶಸ್ವಿ ಆಯೋಜನೆಗೆ ಸಂಬಂಧಿಸಿದ ಪೂರ್ವಭಾವಿ ಸಿದ್ಧತೆಗಳ ಕುರಿತೂ ಚರ್ಚೆ ನಡೆಯಿತು.

ಸಭೆಯಲ್ಲಿ ಭಾಗವಹಿಸಿದ್ದ ಖಾಸಗಿ ಹಾಗೂ ಅನುದಾನಿತ ಶಾಲೆಗಳ ಮುಖ್ಯಸ್ಥರು ತಮ್ಮ ಶಿಕ್ಷಣ ಸಂಸ್ಥೆಗಳು ಎದುರಿಸುತ್ತಿರುವ ವಿವಿಧ ಸಮಸ್ಯೆಗಳು, ಆಡಳಿತಾತ್ಮಕ ಸವಾಲುಗಳು ಹಾಗೂ ಬೇಡಿಕೆಗಳನ್ನು ಸಚಿವರ ಮುಂದಿಟ್ಟರು. ಶಾಲೆಗಳ ನಿರ್ವಹಣೆ, ಶಿಕ್ಷಕರ ಕೊರತೆ, ಮೂಲಸೌಕರ್ಯ ಅಭಿವೃದ್ಧಿ ಸೇರಿದಂತೆ ಹಲವು ವಿಚಾರಗಳ ಕುರಿತು ಅಭಿಪ್ರಾಯ ವಿನಿಮಯ ನಡೆಯಿತು.

ಎಲ್ಲಾ ಸಮಸ್ಯೆಗಳು ಹಾಗೂ ಸಲಹೆಗಳನ್ನು ಆಲಿಸಿದ ಸಚಿವ ಮಧು ಬಂಗಾರಪ್ಪ, ಶಾಲೆಗಳ ಮತ್ತು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ನಿಯಮಾನುಸಾರ ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಬದ್ಧವಾಗಿದೆ ಎಂದು ಭರವಸೆ ನೀಡಿದರು.

“ಶಿವಮೊಗ್ಗ ಜಿಲ್ಲೆಯನ್ನು ಶಿಕ್ಷಣ ಕ್ಷೇತ್ರದಲ್ಲಿ ರಾಜ್ಯದ ಮಾದರಿ ಜಿಲ್ಲೆಯಾಗಿ ರೂಪಿಸುವುದು ನಮ್ಮೆಲ್ಲರ ಜವಾಬ್ದಾರಿ. ಸರ್ಕಾರ, ಶಿಕ್ಷಕರು, ಶಾಲಾ ಆಡಳಿತ ಮಂಡಳಿಗಳು ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಿದಾಗ ಮಾತ್ರ ಉತ್ತಮ ಫಲಿತಾಂಶ ಸಾಧ್ಯ. ಮಕ್ಕಳ ಭವಿಷ್ಯ ನಿರ್ಮಾಣದ ಕಾರ್ಯದಲ್ಲಿ ಸರ್ಕಾರ ಸದಾ ನಿಮ್ಮೊಂದಿಗಿರಲಿದೆ” ಎಂದು ಸಚಿವರು ಹೇಳಿದರು.

ಸಭೆಯಲ್ಲಿ ಜಿಲ್ಲೆಯ ಖಾಸಗಿ ಹಾಗೂ ಅನುದಾನಿತ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು, ವಿವಿಧ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande