
ಬೆಳಗಾವಿ, 27 ಮೇ (ಹಿ.ಸ.) :
ಆ್ಯಂಕರ್ : ಸವದತ್ತಿ ಶ್ರೀ ರೇಣುಕಾ ಯಲ್ಲಮ್ಮ ದೇವಿ ಕ್ಷೇತ್ರಕ್ಕೆ ಆಗಮಿಸುವ ಲಕ್ಷಾಂತರ ಭಕ್ತಾದಿಗಳಿಗೆ ಉತ್ತಮ ಮೂಲಸೌಕರ್ಯ ಮತ್ತು ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವ ಉದ್ದೇಶದಿಂದ ಶ್ರೀ ರೇಣುಕಾ ಯಲ್ಲಮ್ಮ ದೇವಿ ಅಭಿವೃದ್ಧಿ ಪ್ರಾಧಿಕಾರದ ಮಹತ್ವದ ಸಭೆ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯಿತು.
ಸಭೆಯಲ್ಲಿ ಮಾತನಾಡಿದ ಶಾಸಕ ವಿಶ್ವಾಸ ವೈದ್ಯ, “ಸವದತ್ತಿ ಯಲ್ಲಮ್ಮ ಕ್ಷೇತ್ರಕ್ಕೆ ಆಗಮಿಸುವ ಅಪಾರ ಸಂಖ್ಯೆಯ ಭಕ್ತರಿಗೆ ಸುಸಜ್ಜಿತ ಮೂಲಸೌಕರ್ಯ ಕಲ್ಪಿಸುವುದು ಹಾಗೂ ಕ್ಷೇತ್ರದ ಸಮಗ್ರ ಅಭಿವೃದ್ಧಿ ನಮ್ಮ ಮೊದಲ ಆದ್ಯತೆಯಾಗಿದೆ” ಎಂದು ಹೇಳಿದರು.
ಸಭೆಯು ಬೆಳಗಾವಿ ಜಿಲ್ಲಾಧಿಕಾರಿಗಳಾದ ಮೊಹಮ್ಮದ್ ರೋಶನ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
ಸಭೆಯಲ್ಲಿ ಯಲ್ಲಮ್ಮ ಕ್ಷೇತ್ರಕ್ಕೆ ಆಗಮಿಸುವ ಭಕ್ತರ ಅನುಕೂಲಕ್ಕಾಗಿ ಕುಡಿಯುವ ನೀರಿನ ವ್ಯವಸ್ಥೆ, ಶೌಚಾಲಯಗಳ ನಿರ್ಮಾಣ, ರಸ್ತೆ ಅಭಿವೃದ್ಧಿ, ಭದ್ರತಾ ಕ್ರಮಗಳು ಹಾಗೂ ಸುಗಮ ಸಂಚಾರ ವ್ಯವಸ್ಥೆ ಸೇರಿದಂತೆ ಹಲವು ಪ್ರಮುಖ ವಿಷಯಗಳ ಕುರಿತು ಸುದೀರ್ಘ ಚರ್ಚೆ ನಡೆಯಿತು.
ಕ್ಷೇತ್ರಕ್ಕೆ ಆಗಮಿಸುವ ಭಕ್ತರಿಗೆ ಯಾವುದೇ ತೊಂದರೆ ಉಂಟಾಗದಂತೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ಸಂಬಂಧಿತ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.
ಸಭೆಯಲ್ಲಿ ಪ್ರಾಧಿಕಾರದ ಪ್ರಮುಖರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದು, ಕ್ಷೇತ್ರದ ಅಭಿವೃದ್ಧಿಗೆ ಕೈಗೊಳ್ಳಬೇಕಾದ ಮುಂದಿನ ಕ್ರಮಗಳ ಕುರಿತು ಅಭಿಪ್ರಾಯ ವಿನಿಮಯ ನಡೆಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh.M.B.