
ಬೆಂಗಳೂರು, 27 ಮೇ (ಹಿ.ಸ.) :
ಆ್ಯಂಕರ್ : ರಾಜ್ಯ ರಾಜಕೀಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿರುವ ಮುಖ್ಯಮಂತ್ರಿ ಬದಲಾವಣೆ ವಿಚಾರ ಇದೀಗ ನಿರ್ಣಾಯಕ ಹಂತ ತಲುಪಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದು ಬಹುತೇಕ ಖಚಿತವಾಗಿದೆ.
ಸಿದ್ದರಾಮಯ್ಯ ರಾಜೀನಾಮೆ ಅಧಿಕೃತವಾಗಿದ್ದರೂ, ಯಾವ ಸಮಯದಲ್ಲಿ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಲಿದ್ದಾರೆ ಎಂಬ ಕುತೂಹಲ ರಾಜಕೀಯ ವಲಯದಲ್ಲಿ ಮೂಡಿತ್ತು. ಇದೀಗ ಅದಕ್ಕೂ ಸ್ಪಷ್ಟತೆ ಸಿಕ್ಕಿದ್ದು, ನಾಳೆ ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸಂಪುಟದ ಸಚಿವರು ಹಾಗೂ ಆಪ್ತ ಶಾಸಕರು ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೂ ಉಪಹಾರ ಸಭೆಗೆ ಆಹ್ವಾನ ನೀಡಿದ್ದಾರೆ. ಈ ಮಹತ್ವದ ಸಭೆಯಲ್ಲಿ ಮುಂದಿನ ರಾಜಕೀಯ ಬೆಳವಣಿಗೆಗಳು ಹಾಗೂ ನಾಯಕತ್ವ ಹಸ್ತಾಂತರದ ಕುರಿತು ಸಿದ್ದರಾಮಯ್ಯ ಸ್ಪಷ್ಟ ಸಂದೇಶ ನೀಡಲಿದ್ದಾರೆ ಎಂದು ಮುಖ್ಯಮಂತ್ರಿ ಆಪ್ತ ವಲಯ ಮಾಹಿತಿ ನೀಡಿದೆ.
ಇದಕ್ಕೆ ಪುಷ್ಟಿ ನೀಡುವಂತೆ, ಇಂದು ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಅವರ 62ನೇ ಪುಣ್ಯತಿಥಿ ಅಂಗವಾಗಿ ವಿಧಾನ ಸೌಧ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ್ದರು.
ಈ ವೇಳೆ ಮಾಧ್ಯಮಗಳು ರಾಜ್ಯ ರಾಜಕೀಯದ ಇತ್ತೀಚಿನ ವಿದ್ಯಮಾನಗಳು, ದೆಹಲಿ ಪ್ರವಾಸ ಹಾಗೂ ಮುಖ್ಯಮಂತ್ರಿ ಬದಲಾವಣೆ ಕುರಿತು ಪ್ರಶ್ನೆ ಕೇಳಿದಾಗ ಅವರು ಯಾವುದೇ ಸ್ಪಷ್ಟ ಪ್ರತಿಕ್ರಿಯೆ ನೀಡದೇ ನಾಳೆ ಮಾತನಾಡುತ್ತೇನೆ, ಏನೇ ಇದ್ದರೂ ನಾಳೆಯೇ ಮಾತನಾಡುತ್ತೇನೆ ಎಂದು ಕೇವಲ ಒಂದೇ ಸಾಲಿನಲ್ಲಿ ಉತ್ತರಿಸಿ ಅಲ್ಲಿಂದ ತೆರಳಿದರು.
ಈ ಎಲ್ಲ ವಿದ್ಯಮಾನಗಳ ನಡುವೆ ಇಂದು ಇಡೀ ದಿನ ಮುಖ್ಯಮಂತ್ರಿ ಅಧಿಕೃತ ನಿವಾಸ ಕಾವೇರಿಯಲ್ಲಿ ಬಿರುಸಿನ ಚಟುವಟಿಕೆ ನಡೆದವು ಸಿದ್ದರಾಮಯ್ಯ ಆಪ್ತ ವಲಯದ ಸಚಿವರು,ಶಾಸಕರು ಭೇಟಿ ಮಾಡಿ ತಮ್ಮ ಅಭಿಪ್ರಾಯ ಮಂಡಿಸಿದ್ದಾರೆ.
ಈ ಎಲ್ಲ ವಿದ್ಯಮಾನಗಳ ನಡುವೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣಧೀಪ ಸಿಂಗ್ ಸುರ್ಜೇವಾಲ ಬೆಂಗಳೂರಿಗೆ ಆಗಮಿಸಿದ್ದು, ಶುಕ್ರವಾರ ಶಾಸಕಾಂಗ ಸಭೆ ನಡೆಸಿ ಸಿದ್ದರಾಮಯ್ಯ ಅವರಿಂದ ಮುಂದಿನ ಮುಖ್ಯಮಂತ್ರಿ ಹೆಸರು ಘೋಷಣೆ ಮಾಡಿಸಲು ಸಿದ್ದತೆ ನಡೆಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh.M.B.