
ಗದಗ, 29 ಮೇ (ಹಿ.ಸ.) :
ಆ್ಯಂಕರ್ : ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ವತಿಯಿಂದ “ಉನ್ನತ ಬೌದ್ಧಿಕ ಆಸ್ತಿ ಹಕ್ಕುಗಳು ವಿಷಯದ ಕುರಿತು ಐದು ದಿನಗಳ ವಿಶೇಷ ತರಬೇತಿ ಕಾರ್ಯಾಗಾರವನ್ನು ಜೂನ್ 16ರಿಂದ 20ರವರೆಗೆ ಆಯೋಜಿಸಲಾಗಿದೆ.
ಅಕಾಡೆಮಿಯ ಕಚೇರಿಯಲ್ಲಿ ನಡೆಯಲಿರುವ ಈ ಕಾರ್ಯಾಗಾರದಲ್ಲಿ ಬೌದ್ಧಿಕ ಆಸ್ತಿ ಹಕ್ಕುಗಳ ಮಹತ್ವ, ಸಂಶೋಧನಾ ಕ್ಷೇತ್ರದಲ್ಲಿ ಅದರ ಉಪಯೋಗ, ಪೇಟೆಂಟ್, ಕಾಪಿರೈಟ್, ಟ್ರೇಡ್ಮಾರ್ಕ್ ಸೇರಿದಂತೆ ವಿವಿಧ ವಿಷಯಗಳ ಕುರಿತು ತಜ್ಞರಿಂದ ಸಮಗ್ರ ಮಾಹಿತಿ ನೀಡಲಾಗುತ್ತದೆ.
ಕಾರ್ಯಾಗಾರದಲ್ಲಿ ದೇಶದ ವಿವಿಧ ಪ್ರತಿಷ್ಠಿತ ಸಂಸ್ಥೆಗಳ ಹೆಸರಾಂತ ವಿಜ್ಞಾನಿಗಳು ಹಾಗೂ ತಂತ್ರಜ್ಞಾನಿಗಳು ಭಾಗವಹಿಸಿ ವಿಶೇಷ ಉಪನ್ಯಾಸಗಳನ್ನು ನೀಡಲಿದ್ದಾರೆ. ಬೌದ್ಧಿಕ ಆಸ್ತಿ ಹಕ್ಕುಗಳ ಕುರಿತಾದ ಇತ್ತೀಚಿನ ಬೆಳವಣಿಗೆಗಳು, ವೈಜ್ಞಾನಿಕ ಸಂಶೋಧನೆ ಹಾಗೂ ಕೈಗಾರಿಕಾ ವಲಯದಲ್ಲಿ ಅದರ ಪಾತ್ರದ ಬಗ್ಗೆ ಭಾಗವಹಿಸುವವರಿಗೆ ಪ್ರಾಯೋಗಿಕ ಹಾಗೂ ತಾಂತ್ರಿಕ ಜ್ಞಾನವನ್ನು ಹಂಚಿಕೊಳ್ಳಲಾಗುವುದು.
ವಿಜ್ಞಾನ ಪದವಿ, ಸ್ನಾತಕೋತ್ತರ ಪದವಿ ಹಾಗೂ ಸಂಶೋಧನಾ ವಿದ್ಯಾರ್ಥಿಗಳು, ಉಪನ್ಯಾಸಕರು, ಪ್ರಾಧ್ಯಾಪಕರು, ವಿಜ್ಞಾನಾಸಕ್ತರು ಹಾಗೂ ಕೈಗಾರಿಕಾ ಕ್ಷೇತ್ರದ ಪ್ರತಿನಿಧಿಗಳು ಈ ಕಾರ್ಯಾಗಾರದಲ್ಲಿ ಭಾಗವಹಿಸಲು ಅವಕಾಶವಿದೆ.
ಆಸಕ್ತ ಅಭ್ಯರ್ಥಿಗಳು ಜೂನ್ 12ರೊಳಗಾಗಿ ಆನ್ಲೈನ್ ಮೂಲಕ ನೋಂದಾಯಿಸಿಕೊಳ್ಳಬೇಕಿದ್ದು, ನೀಡಲಾಗಿರುವ ನೋಂದಣಿ ಲಿಂಕ್ ಮೂಲಕ ತಮ್ಮ ಹೆಸರುಗಳನ್ನು ದಾಖಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಕಾರ್ಯಾಗಾರದ ಸಂಯೋಜಕರಾದ ವೈಜ್ಞಾನಿಕ ಅಧಿಕಾರಿ ವಿ.ಜಿ. ಉಮೇಶ ಅವರನ್ನು ಮೊಬೈಲ್ ಸಂಖ್ಯೆ 9743084194 ಮೂಲಕ ಸಂಪರ್ಕಿಸಬಹುದಾಗಿದೆ.
ಅಲ್ಲದೇ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ವೆಬ್ಸೈಟ್ ಮೂಲಕವೂ ಹೆಚ್ಚಿನ ಮಾಹಿತಿ ಪಡೆಯಬಹುದು ಎಂದು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಆನಂದ ಆರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / lalita MP