
ಗದಗ, 30 ಮೇ (ಹಿ.ಸ.) :
ಆ್ಯಂಕರ್ : ಗದಗ ನಗರದಲ್ಲಿ ಬೈಕ್ ಕಳ್ಳರ ಹಾವಳಿ ಮುಂದುವರಿದಿದ್ದು, ಮತ್ತೊಮ್ಮೆ ದುಷ್ಕರ್ಮಿಗಳು ದ್ವಿಚಕ್ರ ವಾಹನ ಎಗರಿಸಿರುವ ಘಟನೆ ಬೆಳಕಿಗೆ ಬಂದಿದೆ. ಗದಗ ನಗರದ ಕೆ.ಸಿ. ರಾಣಿ ರಸ್ತೆಯಲ್ಲಿ ಬೆಳ್ಳಂಬೆಳಿಗ್ಗೆ ನಡೆದ ಕಳ್ಳತನದ ಘಟನೆಯು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಜೈ ಭೀಮ್ ಸಂಘರ್ಷ ಸಮಿತಿಯ ಜಿಲ್ಲಾಧ್ಯಕ್ಷರಾದ ಗಣೇಶ್ ಹುಬ್ಬಳ್ಳಿ ಅವರಿಗೆ ಸೇರಿದ ಕೆಎ:26 ಇಬಿ-9527 ನೋಂದಣಿ ಸಂಖ್ಯೆಯ ಬೈಕ್ ಅನ್ನು ಕಳ್ಳರು ಕದ್ದೊಯ್ದಿದ್ದಾರೆ.
ಬೈಕ್ ಕಳ್ಳತನದ ಸಂಪೂರ್ಣ ದೃಶ್ಯ ಸಮೀಪದ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆ ಆಗಿದ್ದು, ಪೊಲೀಸರು ದೃಶ್ಯಾವಳಿಗಳನ್ನು ಆಧರಿಸಿ ತನಿಖೆ ಆರಂಭಿಸಿದ್ದಾರೆ. ಕಳ್ಳರು ಬೈಕ್ ಅನ್ನು ಕೊಪ್ಪಳ ಮಾರ್ಗವಾಗಿ ಕೊಂಡೊಯ್ದಿರಬಹುದೆಂಬ ಅನುಮಾನ ವ್ಯಕ್ತವಾಗಿದ್ದು, ಈ ಹಿನ್ನೆಲೆಯಲ್ಲಿ ಬೈಕ್ ಮಾಲೀಕರು ಕೊಪ್ಪಳ ಠಾಣೆಯಲ್ಲಿಯೂ ದೂರು ದಾಖಲಿಸಿದ್ದಾರೆ.
ಇದೇ ವೇಳೆ, ಘಟನೆ ಸಂಬಂಧ ಗದಗ ಶಹರ ಪೊಲೀಸ್ ಠಾಣೆಯಲ್ಲಿ ಅಧಿಕೃತ ದೂರು ದಾಖಲಾಗಿದ್ದು, ಪೊಲೀಸರು ಆರೋಪಿಗಳ ಪತ್ತೆಗೆ ಮುಂದಾಗಿದ್ದಾರೆ.
ನಗರದಲ್ಲಿ ನಿರಂತರವಾಗಿ ನಡೆಯುತ್ತಿರುವ ಬೈಕ್ ಕಳ್ಳತನ ಪ್ರಕರಣಗಳು ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದ್ದು, ಪೊಲೀಸ್ ಇಲಾಖೆ ಕಳ್ಳರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂಬ ಆಗ್ರಹ ಕೇಳಿಬರುತ್ತಿದೆ.
ಗದಗ ಶಹರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಹಿಂದೂಸ್ತಾನ್ ಸಮಾಚಾರ್ / lalita MP