
ಬೆಂಗಳೂರು, 30 ಮೇ (ಹಿ.ಸ.) :
ಆ್ಯಂಕರ್ : ಇಂದು ಕಾಂಗ್ರೆಸ್ ಶಾಸಕಾಂಗ ಪಕ್ಷ ಸಭೆ ನಡೆಯಲಿದ್ದು, ಕರ್ನಾಟಕದ ಮುಂದಿನ ಮುಖ್ಯಮಂತ್ರಿಯ ಆಯ್ಕೆ ಪ್ರಕ್ರಿಯೆಗೆ ಅಧಿಕೃತ ಚಾಲನೆ ಸಿಗಲಿದೆ.
ವಿಧಾನ ಸೌಧದ ಮೂರನೇ ಮಹಡಿಯ ಸಮ್ಮೇಳನ ಸಭಾಂಗಣದಲ್ಲಿ ಇಂದು ಸಂಜೆ 4 ಗಂಟೆಗೆ ಸಭೆ ನಡೆಯಲಿದ್ದು, ಈ ಕುರಿತು ಶಾಸಕಾಂಗ ಪಕ್ಷದ ಕಾರ್ಯದರ್ಶಿ ಅಲ್ಲಮಪ್ರಭು ಪಾಟೀಲ್ ಅವರು ಎಲ್ಲಾ ಕಾಂಗ್ರೆಸ್ ಶಾಸಕರಿಗೆ ಸೂಚನೆ ನೀಡಿದ್ದಾರೆ.
ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದ ಸಿದ್ದರಾಮಯ್ಯ ಅವರ ರಾಜೀನಾಮೆಯನ್ನು ಶುಕ್ರವಾರ ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಗೀಕರಿಸಿದ್ದು, ಸಚಿವ ಸಂಪುಟವನ್ನು ಸಹ ವಿಸರ್ಜಿಸಲಾಗಿದೆ.
ಇದರ ಬೆನ್ನಲ್ಲೇ ಶಾಸಕಾಂಗ ಪಕ್ಷದ ಸಭೆಯನ್ನು ಕರೆಯಲಾಗಿದೆ.
ಸಭೆಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ನಡೆಯಲಿದ್ದು, ಪ್ರಸ್ತುತ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದ ಡಿ. ಕೆ. ಶಿವಕುಮಾರ್ ಅವರನ್ನು ಶಾಸಕಾಂಗ ಪಕ್ಷದ ನೂತನ ನಾಯಕರಾಗಿ ಆಯ್ಕೆ ಮಾಡುವ ಸಾಧ್ಯತೆಗಳು ಹೆಚ್ಚಾಗಿವೆ.
ಇಂದಿನ ಸಭೆಯ ಅಧ್ಯಕ್ಷತೆಯನ್ನು ಸಿದ್ದರಾಮಯ್ಯ ವಹಿಸಲಿದ್ದು, ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ, ವಿಧಾನ ಪರಿಷತ್ ಸಭಾ ನಾಯಕ ಎನ್.ಎಸ್.ಭೋಸರಾಜು ಸೇರಿದಂತೆ ಪಕ್ಷದ ಹಿರಿಯ ನಾಯಕರು ಹಾಗೂ ಎಲ್ಲಾ ಕಾಂಗ್ರೆಸ್ ಶಾಸಕರು ಭಾಗವಹಿಸಲಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh.M.B.