
ವಿಜಯಪುರ, 06 ಮೇ (ಹಿ.ಸ.) :
ಆಂಕರ್ : ಇಂದು ದಿನಾಂಕ 06.05.2026 ರಂದು ಮಾನ್ಯ ಮುಖ್ಯ ಯೋಜನಾಧಿಕಾರಿಗಳಾದ ಸಿ.ಬಿ. ಕುಂಬಾರ ಅವರ ಅಧ್ಯಕ್ಷತೆಯಲ್ಲಿ ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ಸಂಸ್ಥೆ (EMPRI) ಹಾಗೂ ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ (KSCST) ಇವರ ಸಂಯುಕ್ತ ಸಹಯೋಗದೊಂದಿಗೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಹವಾಮಾನ ಬದಲಾವಣೆ ಕುರಿತಾಗಿ ಕ್ರಿಯಾ ಯೋಜನೆ ತಯಾರಿಸುವ ಕುರಿತು ಒಂದು ದಿನದ ತರಬೇತಿ ಕಾರ್ಯಾಗಾರ ಯಶಸ್ವಿಯಾಗಿ ಜರುಗಿತು.
ಕಾರ್ಯಾಗಾರದ ಮುಖ್ಯ ಉದ್ದೇಶ ರಾಜ್ಯದಲ್ಲಿ ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಸಮರ್ಥವಾಗಿ ಎದುರಿಸಲು ಹಾಗೂ ವಿವಿಧ ಇಲಾಖೆಗಳ ಸಮನ್ವಯದೊಂದಿಗೆ ಪರಿಣಾಮಕಾರಿ ಕ್ರಿಯಾ ಯೋಜನೆಗಳನ್ನು ರೂಪಿಸುವುದು ಆಗಿತ್ತು. ಕಾರ್ಯಕ್ರಮದಲ್ಲಿ ತಜ್ಞರು ಹವಾಮಾನ ಬದಲಾವಣೆಯ ಪ್ರಸ್ತುತ ಸ್ಥಿತಿ, ಅದರ ಪರಿಣಾಮಗಳು, ಮತ್ತು ಸ್ಥಳೀಯ ಮಟ್ಟದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸವಿಸ್ತಾರವಾಗಿ ವಿವರಿಸಿದರು.
ಸಭೆಯಲ್ಲಿ ಮಾತನಾಡಿದ ಮುಖ್ಯ ಯೋಜನಾಧಿಕಾರಿ ಸಿ.ಬಿ. ಕುಂಬಾರ ಅವರು, ಹವಾಮಾನ ಬದಲಾವಣೆಯ ಸವಾಲುಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಅದನ್ನು ಎದುರಿಸಲು ವೈಜ್ಞಾನಿಕ ಹಾಗೂ ಸಮಗ್ರ ಯೋಜನೆ ಅಗತ್ಯವಿದೆ ಎಂದು ತಿಳಿಸಿದರು. ಜಿಲ್ಲೆಯ ಮಟ್ಟದಲ್ಲಿ ಪ್ರತಿ ಇಲಾಖೆ ತನ್ನ ತನ್ನ ಕ್ಷೇತ್ರದಲ್ಲಿ ಜವಾಬ್ದಾರಿಯನ್ನು ಹೊತ್ತುಕೊಂಡು ಕಾರ್ಯನಿರ್ವಹಿಸಿದರೆ ಮಾತ್ರ ಪರಿಣಾಮಕಾರಿ ಫಲಿತಾಂಶ ದೊರೆಯಲಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಸಾಮಾಜಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಶ್ರೀ ಶಿವರುದ್ರಪ್ಪ ಕಬಾಡಗಿ, ಪ್ರಾದೇಶಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಶ್ರೀ ಮಲ್ಲಿನಾಥ ಕುಸುನಾಳ, ಜಲ ಸಂಪನ್ಮೂಲ ತಜ್ಞರಾದ ಶಶಿಕುಮಾರ್ ಎನ್ ಹಾಗೂ ಸಂಶೋಧನಾ ವಿಜ್ಞಾನಿ ಡಾ. ಪವಿತ್ರಾ ಪಿ. ನಾಯಕ ಅವರು ಭಾಗವಹಿಸಿ ತಮ್ಮ ತಮ್ಮ ಕ್ಷೇತ್ರಗಳ ಅನುಭವ ಹಾಗೂ ತಾಂತ್ರಿಕ ಮಾಹಿತಿಯನ್ನು ಹಂಚಿಕೊಂಡರು.
ತಜ್ಞರು ಹವಾಮಾನ ಬದಲಾವಣೆಯ ಪರಿಣಾಮವಾಗಿ ಉಂಟಾಗುವ ಅರಣ್ಯ ನಾಶ, ನೀರಿನ ಕೊರತೆ, ಕೃಷಿ ಉತ್ಪಾದನೆ ಕುಂಠಿತಗೊಳ್ಳುವಿಕೆ ಮುಂತಾದ ಸಮಸ್ಯೆಗಳ ಕುರಿತು ಚರ್ಚಿಸಿ, ಅವುಗಳನ್ನು ನಿಯಂತ್ರಿಸಲು ಅನುಸರಿಸಬೇಕಾದ ಕ್ರಮಗಳನ್ನು ವಿವರಿಸಿದರು. ವಿಶೇಷವಾಗಿ ಸ್ಥಳೀಯ ಮಟ್ಟದಲ್ಲಿ ಜಲ ಸಂರಕ್ಷಣೆ, ಹಸಿರು ಆವರಣ ಹೆಚ್ಚಿಸುವುದು, ಮತ್ತು ಪರಿಸರ ಸ್ನೇಹಿ ತಂತ್ರಜ್ಞಾನಗಳ ಬಳಕೆ ಕುರಿತು ಮಾರ್ಗದರ್ಶನ ನೀಡಿದರು.
ಕಾರ್ಯಾಗಾರದಲ್ಲಿ ಜಿಲ್ಲೆಯ ವಿವಿಧ ಇಲಾಖೆಗಳ ಅಧಿಕಾರಿಗಳು ಸಕ್ರಿಯವಾಗಿ ಪಾಲ್ಗೊಂಡು ತಮ್ಮ ಅನುಮಾನಗಳನ್ನು ತಜ್ಞರೊಂದಿಗೆ ಚರ್ಚಿಸಿದರು. ಕಾರ್ಯಕ್ರಮವು ಪರಿಸರ ಸಂರಕ್ಷಣೆ ಹಾಗೂ ಹವಾಮಾನ ಬದಲಾವಣೆಯ ಕುರಿತು ಜಾಗೃತಿ ಮೂಡಿಸುವಲ್ಲಿ ಪ್ರಮುಖ ಪಾತ್ರವಹಿಸಿತು.
ಕೊನೆಗೆ, ಇಂತಹ ತರಬೇತಿ ಕಾರ್ಯಾಗಾರಗಳು ಅಧಿಕಾರಿಗಳ ಸಾಮರ್ಥ್ಯವನ್ನು ಹೆಚ್ಚಿಸುವುದರೊಂದಿಗೆ, ಭವಿಷ್ಯದಲ್ಲಿ ಪರಿಣಾಮಕಾರಿ ಕ್ರಿಯಾ ಯೋಜನೆಗಳನ್ನು ರೂಪಿಸಲು ಸಹಕಾರಿಯಾಗಲಿದೆ ಎಂದು ಅಭಿಪ್ರಾಯ ವ್ಯಕ್ತವಾಯಿತು.
ಹಿಂದೂಸ್ತಾನ್ ಸಮಾಚಾರ್ / jyothi deshpande