ಜಲ ಭದ್ರತೆಗೆ ಮುನ್ನೆಚ್ಚರಿಕಾ ಕ್ರಮಗಳಿಗೆ ಸಚಿವ ಬೋಸರಾಜು ಸೂಚನೆ
ಬೆಂಗಳೂರು, 06 ಮೇ (ಹಿ.ಸ.) : ಆ್ಯಂಕರ್ : 2026ರ ಎಲ್ ನಿನೋ ಪರಿಣಾಮದಿಂದ ಉಂಟಾಗಬಹುದಾದ ಜಲ ಸಂಕಷ್ಟವನ್ನು ಎದುರಿಸಲು ರಾಜ್ಯ ಸರ್ಕಾರ ಮುನ್ನೆಚ್ಚರಿಕಾ ಕ್ರಮಗಳಿಗೆ ಒತ್ತು ನೀಡಿದ್ದು, ಸಣ್ಣ ನೀರಾವರಿ ವ್ಯಾಪ್ತಿಯ ಕೆರೆಗಳು ಮತ್ತು ಅಣೆಕಟ್ಟುಗಳಲ್ಲಿ ಜಲ ಭದ್ರತೆ ಕಾಪಾಡಲು ಕಟ್ಟುನಿಟ್ಟಿನ ಸೂಚನೆ ನೀಡಲಾಗಿ
Meeting


ಬೆಂಗಳೂರು, 06 ಮೇ (ಹಿ.ಸ.) :

ಆ್ಯಂಕರ್ : 2026ರ ಎಲ್ ನಿನೋ ಪರಿಣಾಮದಿಂದ ಉಂಟಾಗಬಹುದಾದ ಜಲ ಸಂಕಷ್ಟವನ್ನು ಎದುರಿಸಲು ರಾಜ್ಯ ಸರ್ಕಾರ ಮುನ್ನೆಚ್ಚರಿಕಾ ಕ್ರಮಗಳಿಗೆ ಒತ್ತು ನೀಡಿದ್ದು, ಸಣ್ಣ ನೀರಾವರಿ ವ್ಯಾಪ್ತಿಯ ಕೆರೆಗಳು ಮತ್ತು ಅಣೆಕಟ್ಟುಗಳಲ್ಲಿ ಜಲ ಭದ್ರತೆ ಕಾಪಾಡಲು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.

ಸಣ್ಣ ನೀರಾವರಿ ಹಾಗೂ ವಿಜ್ಞಾನ-ತಂತ್ರಜ್ಞಾನ ಸಚಿವ ಎನ್. ಎಸ್. ಬೋಸರಾಜು ಅವರ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ತಾಂತ್ರಿಕ ಸಮಾಲೋಚನಾ ಸಭೆಯಲ್ಲಿ, ನೀರಿನ ಸಂರಕ್ಷಣೆ ಮತ್ತು ಬರ ನಿರ್ವಹಣೆ ಕುರಿತು ಮಹತ್ವದ ಚರ್ಚೆಗಳು ನಡೆದವು.

ಸಭೆಯಲ್ಲಿ ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್ಸಿ) ವಿಜ್ಞಾನಿಗಳು, ಕರ್ನಾಟಕ ರಾಜ್ಯ ದೂರ ಸಂವೇದಿ ಅನ್ವಯಿಕೆ ಕೇಂದ್ರ, ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ಮೇಲ್ವಿಚಾರಣೆ ಕೇಂದ್ರ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಹಾಗೂ ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ ಅಧಿಕಾರಿಗಳು ಮತ್ತು ತಜ್ಞರು ಭಾಗವಹಿಸಿ ಸಲಹೆ ನೀಡಿದರು.

ತಜ್ಞರು ರಾಜ್ಯದಲ್ಲಿ ಲಭ್ಯವಿರುವ ನೀರನ್ನು ಸಮರ್ಥವಾಗಿ ಸಂರಕ್ಷಿಸಲು ಅಂತರ್ಜಲ ಅಭಿವೃದ್ಧಿಗೆ ಆದ್ಯತೆ ನೀಡಬೇಕು ಎಂದು ಸೂಚಿಸಿದರು. ಜೊತೆಗೆ ಮಳೆ ನೀರು ಕೊಯ್ಲು ಪದ್ಧತಿಯನ್ನು ಕಡ್ಡಾಯಗೊಳಿಸಿ, ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು.

ಸಭೆಯನ್ನುದ್ದೇಶಿಸಿ ಮಾತನಾಡಿದ ಸಚಿವ ಬೋಸರಾಜು, “ಮುಂದಿನ ದಿನಗಳಲ್ಲಿ ಎದುರಾಗಬಹುದಾದ ಎಲ್ ನಿನೋ ಪರಿಣಾಮವನ್ನು ಸಮರ್ಥವಾಗಿ ಎದುರಿಸಲು ಇಂದಿನಿಂದಲೇ ಸಿದ್ಧರಾಗಬೇಕು. ಕೆರೆಗಳು, ಪಿಕ್ಅಪ್ ಡ್ಯಾಂಗಳು ಹಾಗೂ ಕಿಂಡಿ ಅಣೆಕಟ್ಟುಗಳಲ್ಲಿ ಸಂಗ್ರಹಿತ ನೀರಿನಲ್ಲಿ ಸೋರಿಕೆಯಾಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು” ಎಂದು ಸೂಚಿಸಿದರು.

ಇದಕ್ಕೆ ಅನುಗುಣವಾಗಿ, ಇಲಾಖೆಯ 18 ವಲಯಗಳ ಕಾರ್ಯಪಾಲಕ ಇಂಜಿನಿಯರ್ಗಳಿಗೆ ಸ್ಪಷ್ಟ ನಿರ್ದೇಶನ ನೀಡಲಾಗಿದ್ದು, ತಮ್ಮ ವ್ಯಾಪ್ತಿಯಲ್ಲಿರುವ ಎಲ್ಲಾ ಜಲಾಶಯಗಳ ನಿರ್ವಹಣೆಯನ್ನು ಸಮಗ್ರವಾಗಿ ನೋಡಿಕೊಳ್ಳಬೇಕು ಎಂದು ತಿಳಿಸಿದ್ದಾರೆ. ಸಣ್ಣ ಪ್ರಮಾಣದ ನೀರಿನ ಸೋರಿಕೆಯನ್ನೂ ತಡೆಯಲು ತಕ್ಷಣ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.

ಇದಲ್ಲದೆ, ‘ನೀರಿದ್ದರೆ ನಾಳೆ’ ಯೋಜನೆಯನ್ನು ಜನರಿಗೆ ತಲುಪಿಸುವ ಮೂಲಕ ಜಲ ಸಂರಕ್ಷಣೆ ಕುರಿತು ವ್ಯಾಪಕ ಜಾಗೃತಿ ಮೂಡಿಸಲು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande