ಬಾಗಲಕೋಟೆ ಜಿಲ್ಲಾಸ್ಪತ್ರೆಯಲ್ಲಿ ಮಹಿಳೆಯ ಮೇಲೆ ದೌರ್ಜನ್ಯ ಆರೋಪ : ಹೊರಗುತ್ತಿಗೆ ನೌಕರನ ವಿರುದ್ಧ ಪ್ರಕರಣ
ಬಾಗಲಕೋಟೆ, 07 ಮೇ (ಹಿ.ಸ.) : ಆಂಕರ್ : ಜಿಲ್ಲೆಯ ಪ್ರಮುಖ ಸರ್ಕಾರಿ ಆರೋಗ್ಯ ಕೇಂದ್ರವಾಗಿರುವ ಬಾಗಲಕೋಟೆ ಜಿಲ್ಲಾಸ್ಪತ್ರೆಯಲ್ಲಿ ಮಹಿಳೆಯೊಬ್ಬರ ಮೇಲೆ ದೌರ್ಜನ್ಯ ಎಸಗಿದ ಆರೋಪ ತಡವಾಗಿ ಬೆಳಕಿಗೆ ಬಂದಿದ್ದು, ಘಟನೆ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಆಸ್ಪತ್ರೆಯಲ್ಲೇ ಇಂತಹ ಗಂಭೀರ ಆರೋಪ
Dorjanya


ಬಾಗಲಕೋಟೆ, 07 ಮೇ (ಹಿ.ಸ.) :

ಆಂಕರ್ : ಜಿಲ್ಲೆಯ ಪ್ರಮುಖ ಸರ್ಕಾರಿ ಆರೋಗ್ಯ ಕೇಂದ್ರವಾಗಿರುವ ಬಾಗಲಕೋಟೆ ಜಿಲ್ಲಾಸ್ಪತ್ರೆಯಲ್ಲಿ ಮಹಿಳೆಯೊಬ್ಬರ ಮೇಲೆ ದೌರ್ಜನ್ಯ ಎಸಗಿದ ಆರೋಪ ತಡವಾಗಿ ಬೆಳಕಿಗೆ ಬಂದಿದ್ದು, ಘಟನೆ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಆಸ್ಪತ್ರೆಯಲ್ಲೇ ಇಂತಹ ಗಂಭೀರ ಆರೋಪ ಕೇಳಿಬಂದಿರುವುದು ಜನರಲ್ಲಿ ಆತಂಕ ಮತ್ತು ಅಸಮಾಧಾನ ಮೂಡಿಸಿದೆ.

ಮಾಹಿತಿಯ ಪ್ರಕಾರ, ಮೇ 4ರ ಮಧ್ಯರಾತ್ರಿ 12 ಗಂಟೆಯಿಂದ 2 ಗಂಟೆಯ ಅವಧಿಯಲ್ಲಿ ಜಿಲ್ಲಾಸ್ಪತ್ರೆಯ ಬಾತ್ ರೂಮ್ನಲ್ಲಿ ಈ ಘಟನೆ ನಡೆದಿರುವುದಾಗಿ ತಿಳಿದುಬಂದಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ಬಂದಿದ್ದ ಮಹಿಳೆಯ ಮೇಲೆ ದೌರ್ಜನ್ಯ ಎಸಗಲು ಯತ್ನಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಆಸ್ಪತ್ರೆಯ ಹೊರಗುತ್ತಿಗೆ ನೌಕರ ಫರೀದ್ ಸಾಬ್ ವಿರುದ್ಧ ಆರೋಪಗಳು ವ್ಯಕ್ತವಾಗಿವೆ.

ಘಟನೆ ಬೆಳಕಿಗೆ ಬರುತ್ತಿದ್ದಂತೆ ಆಸ್ಪತ್ರೆ ಆಡಳಿತ ಮತ್ತು ಪೊಲೀಸ್ ಇಲಾಖೆ ಎಚ್ಚೆತ್ತುಕೊಂಡಿದ್ದು, ಪ್ರಕರಣದ ಕುರಿತು ಪ್ರಾಥಮಿಕ ತನಿಖೆ ಆರಂಭಿಸಲಾಗಿದೆ. ಮಹಿಳೆಯ ಹೇಳಿಕೆ, ಆಸ್ಪತ್ರೆಯ ಸಿಸಿಟಿವಿ ದೃಶ್ಯಗಳು ಹಾಗೂ ಅಲ್ಲಿನ ಸಿಬ್ಬಂದಿಯಿಂದ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ಜಿಲ್ಲಾಸ್ಪತ್ರೆ ಜನಸಾಮಾನ್ಯರ ಆರೋಗ್ಯ ಸೇವೆಗೆ ಕೇಂದ್ರವಾಗಿದ್ದು, ಅಲ್ಲಿ ಮಹಿಳೆಯರ ಸುರಕ್ಷತೆ ಪ್ರಶ್ನಾರ್ಥಕವಾಗಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ವಿಶೇಷವಾಗಿ ರಾತ್ರಿ ವೇಳೆಯಲ್ಲಿ ಆಸ್ಪತ್ರೆಯ ಭದ್ರತಾ ವ್ಯವಸ್ಥೆ ಸಮರ್ಪಕವಾಗಿದೆಯೇ ಎಂಬ ಪ್ರಶ್ನೆಗಳು ಉದ್ಭವಿಸಿವೆ.

ಸಾರ್ವಜನಿಕರು ಹಾಗೂ ವಿವಿಧ ಸಂಘಟನೆಗಳ ಮುಖಂಡರು ಘಟನೆಗೆ ತೀವ್ರ ಖಂಡನೆ ವ್ಯಕ್ತಪಡಿಸಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಮಹಿಳೆಯರು ಆಸ್ಪತ್ರೆ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಸುರಕ್ಷಿತವಾಗಿರಬೇಕಾದ ಅಗತ್ಯವನ್ನು ಅವರು ಒತ್ತಿ ಹೇಳಿದ್ದಾರೆ.

ಇದೇ ವೇಳೆ ಜಿಲ್ಲಾಸ್ಪತ್ರೆಯ ಆಡಳಿತ ಮಂಡಳಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ತನಿಖೆ ಪೂರ್ಣಗೊಂಡ ಬಳಿಕ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದೆ. ಪೊಲೀಸರು ಸಹ ಎಲ್ಲಾ ಆಯಾಮಗಳಲ್ಲಿ ತನಿಖೆ ಮುಂದುವರಿಸಿದ್ದು, ಸತ್ಯಾಸತ್ಯತೆ ಪರಿಶೀಲನೆ ನಡೆಸುತ್ತಿದ್ದಾರೆ.

ಈ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದ್ದು, ಸರ್ಕಾರಿ ಆಸ್ಪತ್ರೆಗಳ ಭದ್ರತಾ ವ್ಯವಸ್ಥೆ ಕುರಿತ ಪ್ರಶ್ನೆಗಳನ್ನು ಮತ್ತೆ ಮುಂದಿಟ್ಟಿದೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande