ಉಜನಿ ಜಲಾಶಯದಿಂದ 16 ಸಾವಿರ ಕ್ಯೂಸೆಕ್ ನೀರು ಬಿಡುಗಡೆ
ವಿಜಯಪುರ, 08 ಮೇ (ಹಿ.ಸ.) : ಆಂಕರ್ : ಮಹಾರಾಷ್ಟ್ರದ ಉಜನಿ ಜಲಾಶಯದಿಂದ ಭೀಮಾ ನದಿಗೆ 16 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಿರುವ ಹಿನ್ನೆಲೆಯಲ್ಲಿ ಇಂಡಿ ಕ್ಷೇತ್ರದ ವಿವಿಧ ಭಾಗಗಳಲ್ಲಿ ಭೀಮಾ ನದಿಯ ಹರಿವಿನ ಸ್ಥಿತಿಯನ್ನು ಸ್ಥಳೀಯ ನೀರಾವರಿ ಇಲಾಖೆ ಅಧಿಕಾರಿಗಳೊಂದಿಗೆ ವಿಜಯಪುರ ಜಿಲ್ಲೆಯ ಇಂಡಿ ಶಾಸಕ ಯ
ನೀರು


ವಿಜಯಪುರ, 08 ಮೇ (ಹಿ.ಸ.) :

ಆಂಕರ್ : ಮಹಾರಾಷ್ಟ್ರದ ಉಜನಿ ಜಲಾಶಯದಿಂದ ಭೀಮಾ ನದಿಗೆ 16 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಿರುವ ಹಿನ್ನೆಲೆಯಲ್ಲಿ ಇಂಡಿ ಕ್ಷೇತ್ರದ ವಿವಿಧ ಭಾಗಗಳಲ್ಲಿ ಭೀಮಾ ನದಿಯ ಹರಿವಿನ ಸ್ಥಿತಿಯನ್ನು ಸ್ಥಳೀಯ ನೀರಾವರಿ ಇಲಾಖೆ ಅಧಿಕಾರಿಗಳೊಂದಿಗೆ ವಿಜಯಪುರ ಜಿಲ್ಲೆಯ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ ಪರಿಶೀಲಿಸಿದರು.

ಕಳೆದ ಹಲವು ತಿಂಗಳುಗಳಿಂದ ಭೀಮಾ ನದಿ ನೀರಿನ ಕೊರತೆಯಿಂದ ಬತ್ತಿ ಹೋಗಿದ್ದ ಪರಿಣಾಮ ನದಿ ತೀರದ ಗ್ರಾಮಗಳ ಜನತೆ ಹಾಗೂ ಜಾನುವಾರುಗಳು ತೀವ್ರ ನೀರಿನ ಸಮಸ್ಯೆಯನ್ನು ಎದುರಿಸುತ್ತಿದ್ದರು. ಇದೀಗ ಉಜನಿ ಜಲಾಶಯದಿಂದ ನೀರು ಹರಿದು ಬಂದ ಹಿನ್ನೆಲೆಯಲ್ಲಿ ಭೀಮಾ ನದಿ ಒಡಲು ತುಂಬಿ ಹರಿಯುತ್ತಿರುವ ದೃಶ್ಯ ಜನರಲ್ಲಿ ಹೊಸ ಆಶಾಭಾವನೆ ಮೂಡಿಸಿದೆ.

ಪರಿಶೀಲನೆ ವೇಳೆ ಮಾತನಾಡಿದ ಶಾಸಕ ಯಶವಂತರಾಯಗೌಡ ಪಾಟೀಲ, “ಭೀಮಾ ನದಿಯಲ್ಲಿ ನೀರು ಹರಿಯುತ್ತಿರುವುದು ಈ ಭಾಗದ ಜನತೆಗೆ ದೊಡ್ಡ ನೆಮ್ಮದಿ ನೀಡಿದೆ. ಕುಡಿಯುವ ನೀರು ಹಾಗೂ ಜಾನುವಾರುಗಳ ನೀರಿನ ಸಮಸ್ಯೆ ಬಹುತೇಕ ನಿವಾರಣೆಯಾಗಿದ್ದು, ರೈತರಲ್ಲಿಯೂ ಸಂತಸ ಮೂಡಿದೆ. ನೀರಿನ ಸಮರ್ಪಕ ಬಳಕೆ ಹಾಗೂ ನಿರ್ವಹಣೆಗೆ ಅಧಿಕಾರಿಗಳು ಹೆಚ್ಚಿನ ಗಮನ ಹರಿಸಬೇಕು” ಎಂದು ಸೂಚಿಸಿದರು.

ಇದೇ ವೇಳೆ ಅಧಿಕಾರಿಗಳೊಂದಿಗೆ ನದಿಯ ನೀರಿನ ಮಟ್ಟ, ಹರಿವಿನ ವೇಗ ಹಾಗೂ ತೀರ ಪ್ರದೇಶಗಳ ಪರಿಸ್ಥಿತಿಯನ್ನು ಪರಿಶೀಲಿಸಿ, ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದರು. ಕೆಲವು ಕಡೆಗಳಲ್ಲಿ ನದಿ ತೀರದ ಗ್ರಾಮಸ್ಥರು ನದಿಗೆ ಪೂಜೆ ಸಲ್ಲಿಸಿ ಸಂತಸ ವ್ಯಕ್ತಪಡಿಸಿದರು.

ಭೀಮಾ ನದಿಯಲ್ಲಿ ನೀರು ಹರಿದ ಹಿನ್ನೆಲೆ ಸುತ್ತಮುತ್ತಲಿನ ಬಾವಿಗಳು ಮತ್ತು ಕೊಳವೆಬಾವಿಗಳಲ್ಲಿಯೂ ನೀರಿನ ಮಟ್ಟ ಏರಿಕೆಯಾಗುವ ನಿರೀಕ್ಷೆ ವ್ಯಕ್ತವಾಗಿದ್ದು, ರೈತರು ಕೃಷಿ ಚಟುವಟಿಕೆಗಳಿಗೆ ಸಹಾಯಕವಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಈ ಸಂದರ್ಭದಲ್ಲಿ ನೀರಾವರಿ ಇಲಾಖೆ ಅಧಿಕಾರಿಗಳು, ಸ್ಥಳೀಯ ಮುಖಂಡರು, ಗ್ರಾಮಸ್ಥರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande