11 ಜಿಲ್ಲೆಗಳಲ್ಲಿ ಸೂರ್ಯಕಾಂತಿ ಬೆಂಬಲ ಬೆಲೆ ಖರೀದಿ ; ಕ್ವಿಂಟಲ್ಗೆ ₹7,721 ದರ ನಿಗದಿ
ವಿಜಯಪುರ, 08 ಮೇ (ಹಿ.ಸ.) : ಆಂಕರ್ : ರಾಜ್ಯದ ಸೂರ್ಯಕಾಂತಿ ಬೆಳೆಗಾರ ರೈತರಿಗೆ ರಾಜ್ಯ ಸರ್ಕಾರ ಮಹತ್ವದ ಸಿಹಿಸುದ್ದಿ ನೀಡಿದ್ದು, 2025-26ನೇ ಸಾಲಿನ ಹಿಂಗಾರು ಹಂಗಾಮಿನ ಸೂರ್ಯಕಾಂತಿಯನ್ನು ಬೆಂಬಲ ಬೆಲೆ ಯೋಜನೆಯಡಿ ಪ್ರತಿ ಕ್ವಿಂಟಲ್ಗೆ ₹7,721 ದರದಲ್ಲಿ ಖರೀದಿಸಲು ಸರ್ಕಾರ ಆದೇಶ ಹೊರಡಿಸಿದೆ. ಕಬ್ಬು ಅ
11 ಜಿಲ್ಲೆಗಳಲ್ಲಿ ಸೂರ್ಯಕಾಂತಿ ಬೆಂಬಲ ಬೆಲೆ ಖರೀದಿ ; ಕ್ವಿಂಟಲ್ಗೆ ₹7,721 ದರ ನಿಗದಿ


ವಿಜಯಪುರ, 08 ಮೇ (ಹಿ.ಸ.) :

ಆಂಕರ್ : ರಾಜ್ಯದ ಸೂರ್ಯಕಾಂತಿ ಬೆಳೆಗಾರ ರೈತರಿಗೆ ರಾಜ್ಯ ಸರ್ಕಾರ ಮಹತ್ವದ ಸಿಹಿಸುದ್ದಿ ನೀಡಿದ್ದು, 2025-26ನೇ ಸಾಲಿನ ಹಿಂಗಾರು ಹಂಗಾಮಿನ ಸೂರ್ಯಕಾಂತಿಯನ್ನು ಬೆಂಬಲ ಬೆಲೆ ಯೋಜನೆಯಡಿ ಪ್ರತಿ ಕ್ವಿಂಟಲ್ಗೆ ₹7,721 ದರದಲ್ಲಿ ಖರೀದಿಸಲು ಸರ್ಕಾರ ಆದೇಶ ಹೊರಡಿಸಿದೆ. ಕಬ್ಬು ಅಭಿವೃದ್ಧಿ, ಸಕ್ಕರೆ, ಜವಳಿ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ್ ಪಾಟೀಲ್ ಈ ಕುರಿತು ಅಧಿಕೃತ ಆದೇಶ ಹೊರಡಿಸಿದ್ದು, ರೈತರಿಗೆ ನ್ಯಾಯಯುತ ಬೆಲೆ ದೊರಕಿಸುವ ಉದ್ದೇಶದಿಂದ ರಾಜ್ಯದ 11 ಜಿಲ್ಲೆಗಳಲ್ಲಿ ಖರೀದಿ ಕೇಂದ್ರಗಳನ್ನು ತೆರೆಯಲು ಸೂಚನೆ ನೀಡಿದ್ದಾರೆ.

ಕೇಂದ್ರ ಸರ್ಕಾರದ ಬೆಂಬಲ ಬೆಲೆ ಮಾರ್ಗಸೂಚಿಗಳ ಅನ್ವಯ ಬಾಗಲಕೋಟೆ, ಬೆಳಗಾವಿ, ಬಳ್ಳಾರಿ, ವಿಜಯಪುರ, ಚಾಮರಾಜನಗರ, ಚಿತ್ರದುರ್ಗ, ಗದಗ, ಕಲಬುರಗಿ, ವಿಜಯನಗರ, ರಾಯಚೂರು ಹಾಗೂ ಧಾರವಾಡ ಜಿಲ್ಲೆಗಳಲ್ಲಿ ಅಗತ್ಯಕ್ಕೆ ಅನುಗುಣವಾಗಿ ಸೂರ್ಯಕಾಂತಿ ಖರೀದಿ ಕೇಂದ್ರಗಳನ್ನು ಆರಂಭಿಸಲು ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ.

ಸೂರ್ಯಕಾಂತಿ ಖರೀದಿ ಪ್ರಕ್ರಿಯೆಗೆ ಕೇಂದ್ರ ಸರ್ಕಾರವು ನಾಫೆಡ್ ಹಾಗೂ ಎನ್ಸಿಸಿಎಫ್ ಸಂಸ್ಥೆಗಳನ್ನು ಖರೀದಿ ಏಜೆನ್ಸಿಗಳಾಗಿ ನೇಮಕ ಮಾಡಿದ್ದು, ರಾಜ್ಯ ಸರ್ಕಾರದ ಪರವಾಗಿ ಕರ್ನಾಟಕ ಸಹಕಾರಿ ಎಣ್ಣೆಬೀಜ ಬೆಳೆಗಾರರ ಮಹಾಮಂಡಳ ಕಾರ್ಯನಿರ್ವಹಿಸಲಿದೆ.

ಸರ್ಕಾರ ರೈತರಿಗೆ ಸುಗಮ ನೋಂದಣಿ ಹಾಗೂ ಖರೀದಿ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ನೋಂದಣಿ ಅವಧಿಯನ್ನು 50 ದಿನಗಳವರೆಗೆ ಹಾಗೂ ಖರೀದಿ ಅವಧಿಯನ್ನು 60 ದಿನಗಳವರೆಗೆ ನಿಗದಿಪಡಿಸಿದೆ. ನೋಂದಣಿ ಪ್ರಕ್ರಿಯೆ ಆರಂಭವಾಗುವ ಜೊತೆಯಲ್ಲೇ ಖರೀದಿ ಪ್ರಕ್ರಿಯೆಯನ್ನೂ ಪ್ರಾರಂಭಿಸಬೇಕು ಎಂದು ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿ ಅಧ್ಯಕ್ಷರಾಗಿರುವ ಜಿಲ್ಲಾಧಿಕಾರಿಗಳಿಗೆ ಸಚಿವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಗ್ರಾಮೀಣ ಭಾಗದ ರೈತರಿಗೆ ಹೆಚ್ಚಿನ ಅನುಕೂಲವಾಗುವಂತೆ ತಾಂತ್ರಿಕ ಹಾಗೂ ವೈಜ್ಞಾನಿಕ ಸೌಲಭ್ಯಗಳನ್ನು ಹೊಂದಿರುವ ಗೋದಾಮುಗಳಿರುವ ಸಂಸ್ಥೆಗಳೊಂದಿಗೆ ಒಪ್ಪಂದ ಮಾಡಿಕೊಂಡು ಖರೀದಿ ಕೇಂದ್ರಗಳನ್ನು ಸ್ಥಾಪಿಸಬೇಕು ಎಂದು ತಿಳಿಸಲಾಗಿದೆ. ರೈತರು ನೋಂದಣಿ ಹಾಗೂ ಖರೀದಿ ಪ್ರಕ್ರಿಯೆಯಲ್ಲಿ ಯಾವುದೇ ತೊಂದರೆ ಅನುಭವಿಸದಂತೆ ಪೂರ್ವಸಿದ್ಧತೆ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಇದೇ ವೇಳೆ ರೈತರ ಹೆಸರಿನಲ್ಲಿ ಮಧ್ಯವರ್ತಿಗಳು ಅಥವಾ ವ್ಯಾಪಾರಸ್ಥರು ಬೆಂಬಲ ಬೆಲೆ ಯೋಜನೆಯನ್ನು ದುರ್ಬಳಕೆ ಮಾಡಿಕೊಳ್ಳದಂತೆ ಕಟ್ಟುನಿಟ್ಟಿನ ನಿಗಾ ವಹಿಸಬೇಕು ಎಂದು ಸರ್ಕಾರ ಎಚ್ಚರಿಕೆ ನೀಡಿದೆ. ಖರೀದಿ ಪ್ರಗತಿಯ ವಿವರವನ್ನು ಪ್ರತಿದಿನ ರಾಜ್ಯ ಸರ್ಕಾರ ಹಾಗೂ ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿಗೆ ಸಲ್ಲಿಸುವಂತೆ ಖರೀದಿ ಸಂಸ್ಥೆಗಳಿಗೆ ನಿರ್ದೇಶಿಸಲಾಗಿದೆ.

ಸರ್ಕಾರದ ಈ ಕ್ರಮದಿಂದ ಸೂರ್ಯಕಾಂತಿ ಬೆಳೆಗಾರರಿಗೆ ಮಾರುಕಟ್ಟೆ ಅನಿಶ್ಚಿತತೆಯಿಂದ ರಕ್ಷಣೆ ಸಿಗಲಿದ್ದು, ನ್ಯಾಯಸಮ್ಮತ ಬೆಲೆಯಲ್ಲಿ ಬೆಳೆ ಮಾರಾಟ ಮಾಡಲು ಅವಕಾಶ ದೊರೆಯಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande