
ವಿಜಯಪುರ, 08 ಮೇ (ಹಿ.ಸ.)
ಆಂಕರ್ : ವಿದ್ಯುತ್ ಸಮಸ್ಯೆ ಸರಿಪಡಿಸುವ ವೇಳೆ ಯುವ ಲೈನ್‌ಮನ್ ಒಬ್ಬರು ವಿದ್ಯುತ್ ಸ್ಪರ್ಶದಿಂದ ಮೃತಪಟ್ಟ ಘಟನೆ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲ್ಲೂಕಿನ ಹೆಗ್ಗಿಹಾಳ ತಾಂಡಾದಲ್ಲಿ ಸಂಭವಿಸಿದ್ದು, ಘಟನೆಗೆ ಸಂಬಂಧಿಸಿದಂತೆ ಮೃತ ಯುವಕನ ಕುಟುಂಬಸ್ಥರು ಹಾಗೂ ಸ್ಥಳೀಯರು ಗಂಭೀರ ಅನುಮಾನ ವ್ಯಕ್ತಪಡಿಸಿದ್ದಾರೆ.
ಮೃತರನ್ನು ಹೆಗ್ಗಿಹಾಳ ತಾಂಡಾದ ನಿವಾಸಿ ಶ್ರೀಧರ್ ಲಮಾಣಿ ಎಂದು ಗುರುತಿಸಲಾಗಿದ್ದು, ಅವರು ವಿದ್ಯುತ್ ದುರಸ್ತಿ ಕಾರ್ಯ ನಿರ್ವಹಿಸುವ ವೇಳೆ ಈ ದುರ್ಘಟನೆ ಸಂಭವಿಸಿದೆ. ಘಟನೆಯ ನಂತರ ಗ್ರಾಮದಲ್ಲಿ ಕೆಲಕಾಲ ಆತಂಕ ಮತ್ತು ಆಕ್ರೋಶದ ವಾತಾವರಣ ಉಂಟಾಗಿತ್ತು.
ಲಭ್ಯವಾದ ಮಾಹಿತಿಯ ಪ್ರಕಾರ, ಹೆಗ್ಗಿಹಾಳ ತಾಂಡಾದಲ್ಲಿ ಕಳೆದ ಕೆಲವು ದಿನಗಳಿಂದ ವಿದ್ಯುತ್ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆ ದುರಸ್ತಿ ಕಾರ್ಯಕ್ಕಾಗಿ ಶ್ರೀಧರ್ ಲಮಾಣಿ ಸ್ಥಳಕ್ಕೆ ತೆರಳಿದ್ದರು. ಟ್ರಾನ್ಸ್ಫಾರ್ಮರ್ ಹಾಗೂ ವಿದ್ಯುತ್ ಲೈನ್ ಪರಿಶೀಲನೆ ನಡೆಸುತ್ತಿದ್ದ ವೇಳೆ ಏಕಾಏಕಿ ವಿದ್ಯುತ್ ಹರಿದು, ಅವರಿಗೆ ತೀವ್ರ ಶಾಕ್ ತಗುಲಿದ್ದು, ಟಿಸಿ ಮೇಲಿನಿಂದ ಕೆಳಗೆ ಬಿದ್ದಿದ್ದಾರೆ ಎಂದು ಹೇಳಲಾಗಿದೆ.
ಘಟನೆ ಸಂಭವಿಸಿದ ತಕ್ಷಣ ಸ್ಥಳೀಯರು ಅವರನ್ನು ರಕ್ಷಿಸಿ ಮನಗೂಳಿ ಸರ್ಕಾರಿ ಆಸ್ಪತ್ರೆಗೆ ಸಾಗಿಸಿದರು. ಆದರೆ ಆಸ್ಪತ್ರೆಗೆ ಕರೆದೊಯ್ದ ಬಳಿಕವೂ ಹಲವು ಗಂಟೆಗಳವರೆಗೆ ವೈದ್ಯರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಆಗಮಿಸಿಲ್ಲ ಎಂಬ ಆರೋಪ ಕೇಳಿ ಬಂದಿದ್ದು, ಇದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.
ಈ ಘಟನೆಗೆ ಸಂಬಂಧಿಸಿದಂತೆ ಸ್ಥಳೀಯರು ಹಾಗೂ ಮೃತನ ಸಂಬಂಧಿಕರು ಕೆಇಬಿ ಇಲಾಖೆಯ ವಿರುದ್ಧ ತೀವ್ರ ಆರೋಪ ಮಾಡಿದ್ದಾರೆ. ದುರಸ್ತಿ ಕಾರ್ಯಕ್ಕೂ ಮುನ್ನ ವಿದ್ಯುತ್ ಸಂಪರ್ಕ ಕಡಿತಗೊಳಿಸುವಂತೆ ಮಾಹಿತಿ ನೀಡಿದ್ದರೂ ಸಹ ವಿದ್ಯುತ್ ಹರಿದಿರುವುದೇ ಈ ದುರ್ಘಟನೆಗೆ ಕಾರಣ ಎಂದು ಅವರು ಆರೋಪಿಸಿದ್ದಾರೆ. ಕೆಲವರು ಇದರಲ್ಲಿ ನಿರ್ಲಕ್ಷ್ಯ ಅಥವಾ ಸಂಚು ಇರುವ ಶಂಕೆಯನ್ನೂ ವ್ಯಕ್ತಪಡಿಸಿದ್ದಾರೆ.
ಮೃತ ಶ್ರೀಧರ್ ಲಮಾಣಿ ಕುಟುಂಬದವರು ಮಾಧ್ಯಮದೊಂದಿಗೆ ಮಾತನಾಡಿ, ಪ್ರಕರಣದ ಸಂಪೂರ್ಣ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. “ನಮ್ಮ ಮಗ ಕರ್ತವ್ಯ ನಿರ್ವಹಿಸುವಾಗಲೇ ಪ್ರಾಣ ಕಳೆದುಕೊಂಡಿದ್ದಾನೆ. ಇದು ಸಾಮಾನ್ಯ ಅಪಘಾತವಲ್ಲ. ಯಾರ ನಿರ್ಲಕ್ಷ್ಯದಿಂದ ಈ ಘಟನೆ ನಡೆದಿದೆ ಎಂಬುದು ಬಹಿರಂಗವಾಗಬೇಕು” ಎಂದು ಕುಟುಂಬಸ್ಥರು ಕಣ್ಣೀರಿಟ್ಟಿದ್ದಾರೆ.
ಇದೇ ವೇಳೆ ನಮ್ಮ ಮಾಧ್ಯಮದೊಂದಿಗೆ ಮಾತನಾಡಿದ ಕೆಇಬಿ ಅಧಿಕಾರಿಗಳು, ಘಟನೆ ಕುರಿತು ಪ್ರಾಥಮಿಕ ಮಾಹಿತಿ ಪಡೆದುಕೊಂಡಿದ್ದು, ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ. ಘಟನೆಗೆ ನಿಖರ ಕಾರಣ ಏನು ಎಂಬುದನ್ನು ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.
ಪ್ರಸ್ತುತ ಪೊಲೀಸ್ ಇಲಾಖೆ ಹಾಗೂ ಸಂಬಂಧಪಟ್ಟ ವಿದ್ಯುತ್ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.
ಕರ್ತವ್ಯ ನಿರ್ವಹಣೆಯಲ್ಲಿದ್ದ ಯುವ ಲೈನ್ಮ್ಯಾನ್ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯಲ್ಲಿ ದುಃಖದ ವಾತಾವರಣ ಸೃಷ್ಟಿಸಿದ್ದು, ಮೃತನ ಕುಟುಂಬಕ್ಕೆ ನ್ಯಾಯ ದೊರಕಿಸಬೇಕೆಂಬ ಒತ್ತಾಯ ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ.
ಹಿಂದೂಸ್ತಾನ್ ಸಮಾಚಾರ್ / jyothi deshpande