
ಬಾಗಲಕೋಟೆ, 08 ಮೇ (ಹಿ.ಸ.) :
ಆಂಕರ್ : ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಸುನಗ ಗ್ರಾಮದಲ್ಲಿ ನೂಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳ ಶೈಕ್ಷಣಿಕ ಭವಿಷ್ಯವನ್ನು ಉಜ್ವಲಗೊಳಿಸುವ ಉದ್ದೇಶದಿಂದ ಸುಮಾರು 8 ಎಕರೆ ಪ್ರದೇಶದಲ್ಲಿ ರೂ.35 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ “ಶ್ರಮಿಕ ವಸತಿ ಶಾಲೆ” ನೂತನ ಕಟ್ಟಡ ಕಾಮಗಾರಿಗೆ ಶಾಸಕ ಜೆ.ಟಿ.ಪಾಟೀಲ ಅವರು ಭೂಮಿಪೂಜೆ ನೆರವೇರಿಸಿದರು.
ಈ ಮಹತ್ವಾಕಾಂಕ್ಷಿ ಯೋಜನೆ ಕಾರ್ಮಿಕ ಕುಟುಂಬಗಳ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ, ವಸತಿ ಹಾಗೂ ಮೂಲಭೂತ ಸೌಲಭ್ಯಗಳನ್ನು ಒದಗಿಸುವ ದಿಸೆಯಲ್ಲಿ ಸರ್ಕಾರದ ಮಹತ್ವದ ಹೆಜ್ಜೆಯಾಗಿದೆ. ಶಾಲೆ ನಿರ್ಮಾಣವಾದ ನಂತರ ಗ್ರಾಮೀಣ ಭಾಗದ ಅನೇಕ ಕಾರ್ಮಿಕರ ಮಕ್ಕಳಿಗೆ ಉತ್ತಮ ಶಿಕ್ಷಣ ಪಡೆಯಲು ಅನುಕೂಲವಾಗಲಿದೆ ಎಂದು ಅಭಿಪ್ರಾಯ ವ್ಯಕ್ತವಾಯಿತು.
ಭೂಮಿಪೂಜೆ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ಜೆ.ಟಿ.ಪಾಟೀಲ ಅವರು, “ಕಾರ್ಮಿಕರು ದೇಶದ ಅಭಿವೃದ್ಧಿಯ ಬೆನ್ನೆಲುಬು. ಅವರ ಮಕ್ಕಳಿಗೆ ಉತ್ತಮ ಶಿಕ್ಷಣ ಸಿಗಬೇಕೆಂಬ ಉದ್ದೇಶದಿಂದ ಸರ್ಕಾರ ವಿಶೇಷ ಯೋಜನೆಗಳನ್ನು ಜಾರಿಗೆ ತರುತ್ತಿದೆ. ಸುನಗ ಗ್ರಾಮದಲ್ಲಿ ನಿರ್ಮಾಣವಾಗುವ ಈ ಶ್ರಮಿಕ ವಸತಿ ಶಾಲೆ ಉತ್ತರ ಕರ್ನಾಟಕ ಭಾಗದ ಮಾದರಿ ಶಿಕ್ಷಣ ಸಂಸ್ಥೆಯಾಗಿ ರೂಪುಗೊಳ್ಳಲಿದೆ,” ಎಂದು ಹೇಳಿದರು.
ಶಾಲೆಯಲ್ಲಿ ವಿದ್ಯಾರ್ಥಿಗಳ ವಸತಿ ವ್ಯವಸ್ಥೆ, ಆಧುನಿಕ ತರಗತಿ ಕೊಠಡಿಗಳು, ಗ್ರಂಥಾಲಯ, ಕ್ರೀಡಾಂಗಣ, ಕುಡಿಯುವ ನೀರು ಹಾಗೂ ಇತರೆ ಮೂಲಸೌಕರ್ಯಗಳನ್ನು ಒಳಗೊಂಡ ಸಮಗ್ರ ಕಟ್ಟಡ ನಿರ್ಮಿಸಲಾಗುವುದು ಎಂದು ಅಧಿಕಾರಿಗಳು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳು, ಗ್ರಾಮ ಪಂಚಾಯತ್ ಸದಸ್ಯರು, ಕಾರ್ಮಿಕ ಸಂಘಟನೆಗಳ ಮುಖಂಡರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು. ಗ್ರಾಮದಲ್ಲಿ ಈ ಯೋಜನೆ ಆರಂಭವಾಗುತ್ತಿರುವುದಕ್ಕೆ ಸ್ಥಳೀಯರು ಸಂತಸ ವ್ಯಕ್ತಪಡಿಸಿದರು.
ಹಿಂದೂಸ್ತಾನ್ ಸಮಾಚಾರ್ / jyothi deshpande