
ಬಾಗಲಕೋಟೆ, 08 ಮೇ (ಹಿ.ಸ.) :
ಆಂಕರ್ : ಬಾಗಲಕೋಟೆ ಜಿಲ್ಲೆಯ ಬಾದಾಮಿ ಪೊಲೀಸ್ ಠಾಣಾ ವ್ಯಾಪ್ತಿಯ ಬನಶಂಕರಿ ಪ್ರದೇಶದಲ್ಲಿ ನಡೆಯಲಿರುವ ಅಖಿಲ ಭಾರತ ದೇವಾಂಗ (ನೇಕಾರ) ಜಾಗೃತಾ ಸಮಾವೇಶ–2026, ಶ್ರೀ ದಯಾನಂದಪುರಿ ಮಹಾಸ್ವಾಮಿಗಳವರ 36ನೇ ವರ್ಷದ ಪಟ್ಟಾಭಿಷೇಕ ಹಾಗೂ ತುಲಾಭಾರ ಸಮಾರಂಭದ ಹಿನ್ನೆಲೆಯಲ್ಲಿ ಭದ್ರತಾ ಮತ್ತು ಬಂದೋಬಸ್ತ್ ವ್ಯವಸ್ಥೆಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಪೊಲೀಸ್ ಇಲಾಖೆ ಸಕಲ ಸಿದ್ಧತೆಗಳನ್ನು ಕೈಗೊಂಡಿದೆ.
ರಾಜ್ಯ ದೇವಾಂಗ ಸಂಘ ಬೆಂಗಳೂರು ಇವರ ನೇತೃತ್ವದಲ್ಲಿ ನಡೆಯಲಿರುವ ಈ ಮಹತ್ವದ ಧಾರ್ಮಿಕ ಹಾಗೂ ಸಾಮಾಜಿಕ ಕಾರ್ಯಕ್ರಮಕ್ಕೆ ರಾಜ್ಯದ ವಿವಿಧ ಭಾಗಗಳಿಂದ ಸಾವಿರಾರು ಭಕ್ತರು, ಸಮಾಜದ ಮುಖಂಡರು ಹಾಗೂ ಗಣ್ಯರು ಆಗಮಿಸುವ ನಿರೀಕ್ಷೆಯಿದ್ದು, ಸಾರ್ವಜನಿಕರ ಸುರಕ್ಷತೆ ಮತ್ತು ಸಂಚಾರ ವ್ಯವಸ್ಥೆಯನ್ನು ಸಮರ್ಪಕವಾಗಿ ನಿರ್ವಹಿಸುವ ಉದ್ದೇಶದಿಂದ ಬಂದೋಬಸ್ತ್ ಕರ್ತವ್ಯಕ್ಕೆ ನಿಯೋಜಿಸಲಾದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ವಿಶೇಷ ಸೂಚನೆಗಳನ್ನು ನೀಡಲಾಯಿತು.
ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಅಧಿಕಾರಿಗಳು ಮಾತನಾಡಿ, ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡದಂತೆ ಎಚ್ಚರಿಕೆಯಿಂದ ಕರ್ತವ್ಯ ನಿರ್ವಹಿಸಬೇಕು ಎಂದು ಸೂಚಿಸಿದರು. ಕಾರ್ಯಕ್ರಮ ನಡೆಯುವ ಸ್ಥಳ, ವಾಹನ ನಿಲುಗಡೆ ಪ್ರದೇಶ, ಮುಖ್ಯ ರಸ್ತೆ ಮಾರ್ಗಗಳು ಹಾಗೂ ಜನಸಂದಣಿ ಪ್ರದೇಶಗಳಲ್ಲಿ ಹೆಚ್ಚುವರಿ ಪೊಲೀಸ್ ನಿಯೋಜನೆ ಮಾಡಲಾಗುವುದು ಎಂದು ತಿಳಿಸಲಾಯಿತು.
ಭಕ್ತಾದಿಗಳ ಅನುಕೂಲಕ್ಕಾಗಿ ಸಂಚಾರ ದಟ್ಟಣೆ ನಿಯಂತ್ರಣ, ಮಹಿಳಾ ಮತ್ತು ಮಕ್ಕಳ ಸುರಕ್ಷತೆ, ತುರ್ತು ಆರೋಗ್ಯ ಸೇವೆ ಹಾಗೂ ಶಾಂತಿ-ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪ್ರತ್ಯೇಕ ತಂಡಗಳನ್ನು ರಚಿಸಲಾಗಿದೆ. ಕರ್ತವ್ಯದಲ್ಲಿರುವ ಸಿಬ್ಬಂದಿ ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸಬೇಕು ಹಾಗೂ ಯಾವುದೇ ತುರ್ತು ಪರಿಸ್ಥಿತಿಯನ್ನು ಸಮರ್ಪಕವಾಗಿ ನಿಭಾಯಿಸಲು ಸದಾ ಸಿದ್ಧರಾಗಿರಬೇಕು ಎಂದು ಸೂಚನೆ ನೀಡಲಾಯಿತು.
ಧಾರ್ಮಿಕ ಆಚರಣೆಗಳು, ತುಲಾಭಾರ ಕಾರ್ಯಕ್ರಮ ಮತ್ತು ಸಮಾವೇಶದ ವೇದಿಕೆ ಪ್ರದೇಶಗಳಲ್ಲಿ ವಿಶೇಷ ನಿಗಾವಹಿಸಲು ಸಿಸಿಟಿವಿ ಹಾಗೂ ಗುಪ್ತಚರ ಸಿಬ್ಬಂದಿಯನ್ನೂ ನಿಯೋಜಿಸಲಾಗುತ್ತಿದೆ. ಕಾರ್ಯಕ್ರಮ ಯಶಸ್ವಿಯಾಗಿ ಹಾಗೂ ಶಾಂತಿಯುತವಾಗಿ ನಡೆಯಲು ಪೊಲೀಸ್ ಇಲಾಖೆ ಸಂಪೂರ್ಣ ಬದ್ಧವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ಹಾಗೂ ಸಂಘಟಕರ ಉಪಸ್ಥಿತಿ ಗಮನ ಸೆಳೆಯಿತು.
ಹಿಂದೂಸ್ತಾನ್ ಸಮಾಚಾರ್ / jyothi deshpande