
ವಿಜಯಪುರ, 08 ಮೇ (ಹಿ.ಸ.) :
ಆಂಕರ್ : ವಿಜಯಪುರ ನಗರದಲ್ಲಿ ಬೀದಿ ನಾಯಿಗಳ ಹಾವಳಿ ದಿನೇದಿನೇ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಲ್ಲಿ ಆತಂಕದ ವಾತಾವರಣ ಉಂಟಾಗಿದ್ದು, ತಕ್ಷಣ ಕಟ್ಟುನಿಟ್ಟಿನ ನಿಯಂತ್ರಣ ಕ್ರಮಗಳನ್ನು ಜಾರಿಗೆ ತರಬೇಕು ಎಂದು ವಿಧಾನ ಪರಿಷತ್ ಸದಸ್ಯ ಕೇಶವ ಪ್ರಸಾದ್ ಅವರು ಆಗ್ರಹಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ನಗರದಲ್ಲಿ ಬೀದಿ ನಾಯಿಗಳ ಗುಂಪುಗಳ ದಾಳಿಯಿಂದ ಮಕ್ಕಳಿಗೂ, ವೃದ್ಧರಿಗೂ ಹಾಗೂ ಸಾಮಾನ್ಯ ಜನರಿಗೂ ಹೊರಗೆ ಸಂಚರಿಸುವುದು ಕಷ್ಟಕರವಾಗಿರುವ ಪರಿಸ್ಥಿತಿ ಉಂಟಾಗಿದೆ ಎಂದು ಹೇಳಿದ್ದಾರೆ.
ಇತ್ತೀಚೆಗೆ ಚಿಕ್ಕ ಮಗುವಿನ ಮೇಲೆ ಬೀದಿ ನಾಯಿಗಳ ದಾಳಿ ನಡೆದಿರುವ ಘಟನೆ ಅತ್ಯಂತ ದುಃಖಕರವಾಗಿದ್ದು, ಆ ಮಗು ಗಂಭೀರ ಗಾಯಗಳೊಂದಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದೆ ಎಂದು ತಿಳಿಸಿದ್ದಾರೆ.
ಆ ಮಗುವಿನ ಸಂಪೂರ್ಣ ವೈದ್ಯಕೀಯ ವೆಚ್ಚವನ್ನು ಸರ್ಕಾರವೇ ಭರಿಸಬೇಕು ಎಂದು ಕೇಶವ ಪ್ರಸಾದ್ ಒತ್ತಾಯಿಸಿದ್ದಾರೆ.
ಅಗತ್ಯವಿದ್ದರೆಅತ್ಯುತ್ತಮ ಮಟ್ಟದ ವೈದ್ಯಕೀಯ ಚಿಕಿತ್ಸೆ ನೀಡಲು ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಅವರು ಹೇಳಿದ್ದಾರೆ.
ನಗರದ ವಿವಿಧ ಭಾಗಗಳಿಂದ ಬೀದಿ ನಾಯಿಗಳ ಹಾವಳಿ ಕುರಿತು ನಿರಂತರವಾಗಿ ಸಾರ್ವಜನಿಕ ದೂರುಗಳು ಬರುತ್ತಿರುವ ಹಿನ್ನೆಲೆಯಲ್ಲಿ, ಪಾಲಿಕೆ ಅಧಿಕಾರಿಗಳು ಹಾಗೂ ಸಂಬಂಧಿತ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ ತಕ್ಷಣ ಪರಿಣಾಮಕಾರಿ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ನಗರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕಾಗಿ ಸಮಗ್ರ ಕಾರ್ಯಯೋಜನೆ ರೂಪಿಸಿ, ಜನರ ಸುರಕ್ಷತೆಯನ್ನು ಮೊದಲ ಆದ್ಯತೆಯಾಗಿ ಪರಿಗಣಿಸಬೇಕು ಎಂದು ಅವರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ಈ ಘಟನೆ ಸಾರ್ವಜನಿಕ ಆರೋಗ್ಯ ಮತ್ತು ಸುರಕ್ಷತೆಯ ದೃಷ್ಟಿಯಿಂದ ಗಂಭೀರವಾಗಿರುವುದರಿಂದ, ತಕ್ಷಣದ ಕ್ರಮ ಕೈಗೊಳ್ಳದಿದ್ದರೆ ಪರಿಸ್ಥಿತಿ ಇನ್ನಷ್ಟು ಹದಗೆಡಬಹುದೆಂದು ಕೇಶವ ಪ್ರಸಾದ್ ಎಚ್ಚರಿಸಿದ್ದಾರೆ
ಹಿಂದೂಸ್ತಾನ್ ಸಮಾಚಾರ್ / jyothi deshpande