
ವಿಜಯಪುರ, 08 ಮೇ (ಹಿ.ಸ.) :
ಆಂಕರ್ : ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಅರಳದಿನ್ನಿ ಗ್ರಾಮದ ಸಮೀಪ ಬಸಿಗಾಲುವೆ ಹೂಳು ಎತ್ತುವ ಕಾಮಗಾರಿ ನಡೆಯುತ್ತಿರುವ ಸ್ಥಳಕ್ಕೆ ಜಿಲ್ಲಾ ಪಂಚಾಯತಿ ಉಪ ಕಾರ್ಯದರ್ಶಿಗಳಾದ ಪ್ರಕಾಶ ವಡ್ಡರ ಅವರು ಶುಕ್ರವಾರ ಭೇಟಿ ನೀಡಿ ಕಾಮಗಾರಿಯ ಪ್ರಗತಿ ಹಾಗೂ ಗುಣಮಟ್ಟವನ್ನು ಪರಿಶೀಲಿಸಿದರು.
ಕಾಮಗಾರಿ ಸ್ಥಳದಲ್ಲಿ ಅಧಿಕಾರಿಗಳಿಂದ ಮಾಹಿತಿ ಪಡೆದ ಅವರು, ಹೂಳು ಎತ್ತುವ ಕಾರ್ಯವನ್ನು ಸಮರ್ಪಕವಾಗಿ ಹಾಗೂ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಸೂಚಿಸಿದರು.
ಕಾಲುವೆಗಳ ಸ್ವಚ್ಛತೆ ಹಾಗೂ ನಿರ್ವಹಣೆಯಿಂದ ರೈತರಿಗೆ ನೀರಾವರಿ ವ್ಯವಸ್ಥೆ ಸುಗಮವಾಗುವಂತೆ ಕ್ರಮ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಸ್ಥಳೀಯ ರೈತರಿಗೆ ಯಾವುದೇ ತೊಂದರೆ ಆಗದಂತೆ ಕಾಮಗಾರಿಯನ್ನು ಯೋಜಿತ ರೀತಿಯಲ್ಲಿ ನಿರ್ವಹಿಸುವಂತೆ ಸಲಹೆ ನೀಡಿದರು.
ಬಳಿಕ ಮುದ್ದೇಬಿಹಾಳ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಮುದ್ದೇಬಿಹಾಳ ಹಾಗೂ ತಾಳಿಕೋಟಿ ಜಂಟಿ ತಾಲೂಕುಗಳ ವಿವಿಧ ಅಭಿವೃದ್ಧಿ ಯೋಜನೆಗಳ ಕುರಿತು ಪ್ರಗತಿ ಪರಿಶೀಲನಾ ಸಭೆ ಜಿಲ್ಲಾ ಪಂಚಾಯತಿ ಉಪ ಕಾರ್ಯದರ್ಶಿಗಳಾದ ಶ್ರೀ ಪ್ರಕಾಶ ವಡ್ಡರ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಸಭೆಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ನರೇಗಾ), ಗ್ರಾಮ ಪಂಚಾಯತಿ ತೆರಿಗೆ ವಸೂಲಾತಿ, ಗ್ರಾಮೀಣ ಗ್ರಂಥಾಲಯಗಳ ಅಭಿವೃದ್ಧಿ, ವಸತಿ ಯೋಜನೆಗಳ ಅನುಷ್ಠಾನ, ಸ್ವಚ್ಛ ಭಾರತ ಮಿಷನ್ (ಎಸ್.ಬಿ.ಎಮ್.) ಅನುದಾನ ಪಾವತಿ, ಇ-ಹಾಜರಾತಿ ವ್ಯವಸ್ಥೆ, ಮಹಿಳಾ ಗ್ರಾಮ ಸಭೆಗಳ ಆಯೋಜನೆ ಹಾಗೂ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆಗಳ ಕುರಿತು ಸಮಗ್ರವಾಗಿ ಪರಿಶೀಲನೆ ನಡೆಸಲಾಯಿತು.
ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ಪ್ರಕಾಶ ವಡ್ಡರ ಅವರು, ಸರ್ಕಾರದ ಯೋಜನೆಗಳು ಗ್ರಾಮೀಣ ಜನರಿಗೆ ಸಮರ್ಪಕವಾಗಿ ತಲುಪುವಂತೆ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು. ಗ್ರಾಮ ಪಂಚಾಯತಿಗಳಲ್ಲಿ ತೆರಿಗೆ ವಸೂಲಾತಿಯನ್ನು ಹೆಚ್ಚಿಸುವ ಮೂಲಕ ಸ್ಥಳೀಯ ಆಡಳಿತವನ್ನು ಆರ್ಥಿಕವಾಗಿ ಬಲಪಡಿಸಬೇಕೆಂದರು. ನರೇಗಾ ಯೋಜನೆಯಡಿ ಹೆಚ್ಚಿನ ಕಾರ್ಮಿಕರಿಗೆ ಉದ್ಯೋಗಾವಕಾಶ ಕಲ್ಪಿಸುವ ಜೊತೆಗೆ ಕಾಮಗಾರಿಗಳನ್ನು ಪಾರದರ್ಶಕವಾಗಿ ಅನುಷ್ಠಾನಗೊಳಿಸಬೇಕೆಂದು ಹೇಳಿದರು.
ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದ ಅವರು, ಮಹಿಳಾ ಗ್ರಾಮ ಸಭೆಗಳನ್ನು ಪರಿಣಾಮಕಾರಿಯಾಗಿ ನಡೆಸಿ ಮಹಿಳೆಯರ ಅಭಿಪ್ರಾಯಗಳಿಗೆ ಆದ್ಯತೆ ನೀಡಬೇಕು ಎಂದು ತಿಳಿಸಿದರು. ಇ-ಹಾಜರಾತಿ ವ್ಯವಸ್ಥೆಯನ್ನು ಕಡ್ಡಾಯವಾಗಿ ಅನುಸರಿಸುವ ಮೂಲಕ ಆಡಳಿತದಲ್ಲಿ ಪಾರದರ್ಶಕತೆ ತರಬೇಕೆಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತಿ ಯೋಜನಾಧಿಕಾರಿಗಳಾದ ಅರುಣಕುಮಾರ್ ದಳವಾಯಿ, ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳಾದ ವೆಂಕಟೇಶ ವಂದಾಲ, ಮುದ್ದೇಬಿಹಾಳ ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿಗಳಾದ ಸಂಗನಗೌಡ, ತಾಳಿಕೋಟಿ ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀಮತಿ ಅನುಸೂಯಾ ಚಲವಾದಿ, ಸಹಾಯಕ ನಿರ್ದೇಶಕರು (ಗ್ರಾ.ಉ ಮತ್ತು ಪಂ.ರಾ), ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / jyothi deshpande