
ಬಾಗಲಕೋಟೆ, 09 ಮೇ (ಹಿ.ಸ.) :
ಆಂಕರ್ : ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ನಾಗರಾಳ ಗ್ರಾಮದ ಪಿಕೆಪಿಎಸ್ (ಕೃಷಿ ಪತ್ತಿನ ಸಹಕಾರಿ ಸಂಘ) ಕಚೇರಿಯ ಕಾರ್ಯದರ್ಶಿಯಾಗಿರುವ ಆನಂದ ದೇಶಪಾಂಡೆ ಅವರ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿದ್ದು, ಈ ಘಟನೆ ಇದೀಗ ಗ್ರಾಮದಲ್ಲಿ ಚರ್ಚೆಗೆ ಗ್ರಾಸವಾಗಿದೆ.
ಕರ್ತವ್ಯದ ಸಮಯದಲ್ಲೇ ಮಹಿಳೆಯನ್ನು ಕಚೇರಿಗೆ ಕರೆಸಿ ಅನುಚಿತ ವರ್ತನೆ ನಡೆಸಿದ್ದಾರೆ ಎಂಬ ಆರೋಪಗಳು ವ್ಯಕ್ತವಾಗಿವೆ. ಈ ಸಂಬಂಧಿತ ಕೆಲವು ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವುದಾಗಿ ತಿಳಿದು ಬಂದಿದ್ದು, ಸಾರ್ವಜನಿಕರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
ಸಹಕಾರಿ ಸಂಘದಂತಹ ಸಾರ್ವಜನಿಕ ಸೇವಾ ಸಂಸ್ಥೆಯಲ್ಲಿ ಈ ರೀತಿಯ ಘಟನೆ ನಡೆದಿದೆ ಎನ್ನಲಾಗುತ್ತಿರುವ ಹಿನ್ನೆಲೆ ಗ್ರಾಮಸ್ಥರು ಹಾಗೂ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸಾರ್ವಜನಿಕರ ವಿಶ್ವಾಸಕ್ಕೆ ಧಕ್ಕೆ ತರುವಂತಹ ಘಟನೆಗಳ ವಿರುದ್ಧ ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ತನಿಖೆ ನಡೆಸಿ ಕಾನೂನಾತ್ಮಕವಾಗಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ಘಟನೆ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆ ನಡೆಯುತ್ತಿದ್ದು, ಕೆಲವರು ಆರೋಪದ ಸತ್ಯಾಸತ್ಯತೆ ಕುರಿತು ಸಮಗ್ರ ತನಿಖೆ ನಡೆಸಬೇಕೆಂದು ಆಗ್ರಹಿಸಿದ್ದಾರೆ. ಅಧಿಕೃತ ತನಿಖೆ ಪೂರ್ಣಗೊಳ್ಳುವವರೆಗೆ ಆರೋಪಿಗಳನ್ನು ತಪ್ಪಿತಸ್ಥರೆಂದು ಘೋಷಿಸಬಾರದು ಎಂಬ ಅಭಿಪ್ರಾಯವೂ ಕೇಳಿ ಬರುತ್ತಿದೆ.
ಈ ಕುರಿತು ಸಂಬಂಧಪಟ್ಟ ಸಹಕಾರಿ ಇಲಾಖೆ ಹಾಗೂ ಸ್ಥಳೀಯ ಆಡಳಿತದಿಂದ ಇನ್ನಷ್ಟೇ ಅಧಿಕೃತ ಪ್ರತಿಕ್ರಿಯೆ ಹೊರಬೀಳಬೇಕಿದೆ. ಸಾರ್ವಜನಿಕ ವಲಯದಲ್ಲಿ ಈ ಪ್ರಕರಣ ಸಾಕಷ್ಟು ಚರ್ಚೆಗೆ ಕಾರಣವಾಗಿದ್ದು, ಮುಂದಿನ ಕ್ರಮದ ಬಗ್ಗೆ ಎಲ್ಲರ ಗಮನ ನೆಟ್ಟಿದೆ.
ಹಿಂದೂಸ್ತಾನ್ ಸಮಾಚಾರ್ / jyothi deshpande