ಅಧಿಕಾರಕ್ಕಾಗಿ ಕಾಂಗ್ರೆಸ್ ಕಾಲಹರಣ, ಅಭಿವೃದ್ಧಿ ಕುಂಟಿತ : ರಾಜು ಕುರುಡಗಿ ಆರೋಪ
ಗದಗ, 01 ಜೂನ್ (ಹಿ.ಸ.) : ಆ್ಯಂಕರ್ : ರಾಜ್ಯದ ಬಡಜನರ ಅಭಿವೃದ್ಧಿ, ರೈತರ ಸಮಸ್ಯೆಗಳು ಹಾಗೂ ಶ್ರಮಿಕ ವರ್ಗದ ಸಂಕಷ್ಟಗಳಿಗೆ ಪರಿಹಾರ ಕಂಡುಕೊಳ್ಳುವ ಬದಲು ಕಾಂಗ್ರೆಸ್ ಪಕ್ಷ ಅಧಿಕಾರ ರಾಜಕಾರಣದಲ್ಲೇ ತೊಡಗಿಕೊಂಡಿದ್ದು, ರಾಜ್ಯದ ಅಭಿವೃದ್ಧಿ ಕಾರ್ಯಗಳಿಗೆ ತೀವ್ರ ಹಿನ್ನಡೆ ಉಂಟಾಗಿದೆ ಎಂದು ಬಿಜೆಪಿ ಗದಗ ಜಿಲ
ಫೋಟೋ


ಗದಗ, 01 ಜೂನ್ (ಹಿ.ಸ.) :

ಆ್ಯಂಕರ್ : ರಾಜ್ಯದ ಬಡಜನರ ಅಭಿವೃದ್ಧಿ, ರೈತರ ಸಮಸ್ಯೆಗಳು ಹಾಗೂ ಶ್ರಮಿಕ ವರ್ಗದ ಸಂಕಷ್ಟಗಳಿಗೆ ಪರಿಹಾರ ಕಂಡುಕೊಳ್ಳುವ ಬದಲು ಕಾಂಗ್ರೆಸ್ ಪಕ್ಷ ಅಧಿಕಾರ ರಾಜಕಾರಣದಲ್ಲೇ ತೊಡಗಿಕೊಂಡಿದ್ದು, ರಾಜ್ಯದ ಅಭಿವೃದ್ಧಿ ಕಾರ್ಯಗಳಿಗೆ ತೀವ್ರ ಹಿನ್ನಡೆ ಉಂಟಾಗಿದೆ ಎಂದು ಬಿಜೆಪಿ ಗದಗ ಜಿಲ್ಲಾಧ್ಯಕ್ಷ ತೊಟಪ್ಪ (ರಾಜು) ಕುರುಡಗಿ ಆರೋಪಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಕಾಂಗ್ರೆಸ್ ಪಕ್ಷದ ನಾಯಕರು ಜನಪರ ಆಡಳಿತ ನಡೆಸುವುದಕ್ಕಿಂತ ಅಧಿಕಾರ ಉಳಿಸಿಕೊಳ್ಳುವುದು ಮತ್ತು ಅಧಿಕಾರ ಹಿಡಿಯುವ ರಾಜಕೀಯದಲ್ಲೇ ಹೆಚ್ಚು ಆಸಕ್ತಿ ತೋರುತ್ತಿದ್ದಾರೆ ಎಂದು ಟೀಕಿಸಿದ್ದಾರೆ.

ರಾಜ್ಯದ ರೈತರು, ಕಾರ್ಮಿಕರು, ಬಡವರು ಹಾಗೂ ಶ್ರಮಿಕ ವರ್ಗದ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಸರ್ಕಾರ ವಿಫಲವಾಗಿದೆ. ಜನರ ಬದುಕಿನ ಸಂಕಷ್ಟಗಳನ್ನು ಅರ್ಥ ಮಾಡಿಕೊಳ್ಳದೆ ಕೇವಲ ರಾಜಕೀಯ ಲಾಭಕ್ಕಾಗಿ ಕಾಲಹರಣ ಮಾಡುತ್ತಿರುವುದರಿಂದ ರಾಜ್ಯದ ಅಭಿವೃದ್ಧಿ ಕಾರ್ಯಗಳು ಕುಂಠಿತಗೊಂಡಿವೆ ಎಂದು ಅವರು ಆರೋಪಿಸಿದ್ದಾರೆ.

ಇನ್ನೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯಗಳ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಎಸ್.ಸಿ ಹಾಗೂ ಎಸ್.ಟಿ ನಿಗಮದ ಅನುದಾನವನ್ನು ಸಮರ್ಪಕವಾಗಿ ಬಳಸದೇ, ಆ ಸಮುದಾಯಗಳಿಗೆ ಅನ್ಯಾಯ ಮಾಡಲಾಗಿದೆ ಎಂದು ರಾಜು ಕುರುಡಗಿ ಆರೋಪಿಸಿದರು. ಸಮಾಜದ ಹಿಂದುಳಿದ ವರ್ಗಗಳ ಏಳಿಗೆಗಾಗಿ ಬಳಸಬೇಕಿದ್ದ ಅನುದಾನ ದುರ್ಬಳಕೆಯಾಗಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.

ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ದೇಶದ ಜನರ ಹಿತದೃಷ್ಟಿಯಿಂದ ಇಂಧನ ಹಾಗೂ ತೈಲ ಬಳಕೆಯನ್ನು ಮಿತವಾಗಿ ಬಳಸುವಂತೆ ಕರೆ ನೀಡಿದ್ದರೂ, ರಾಜ್ಯ ಸರ್ಕಾರ ಮಾತ್ರ ತೈಲದ ಬೆಲೆ ಹೆಚ್ಚಿಸುವ ಮೂಲಕ ಜನರ ಮೇಲೆ ಆರ್ಥಿಕ ಹೊರೆ ಹಾಕುತ್ತಿದೆ ಎಂದು ಅವರು ದೂರಿದರು. ಬೆಲೆ ಏರಿಕೆಯಿಂದ ಸಾಮಾನ್ಯ ಜನರ ಬದುಕು ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿದ್ದು, ಸರ್ಕಾರ ಜನಸಾಮಾನ್ಯರ ನೋವಿಗೆ ಸ್ಪಂದಿಸುವ ಕೆಲಸ ಮಾಡುತ್ತಿಲ್ಲ ಎಂದು ಹೇಳಿದರು.

ಮಹಿಳಾ ಸಬಲೀಕರಣದ ವಿಚಾರದಲ್ಲಿಯೂ ಕಾಂಗ್ರೆಸ್ ಪಕ್ಷದ ನಿಲುವನ್ನು ಪ್ರಶ್ನಿಸಿರುವ ಅವರು, ದೇಶದ ಮಹಿಳೆಯರಿಗೆ ಶೇ.30ರಷ್ಟು ರಾಜಕೀಯ ಪ್ರಾತಿನಿಧ್ಯ ಕಲ್ಪಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಮಸೂದೆ ತರಲು ಮುಂದಾದಾಗ, ಸದನದಲ್ಲಿ ಅದಕ್ಕೆ ವಿರೋಧ ವ್ಯಕ್ತಪಡಿಸುವ ಮೂಲಕ ಮಹಿಳೆಯರ ಹಕ್ಕುಗಳಿಗೆ ಧಕ್ಕೆ ತರಲಾಗಿದೆ ಎಂದು ಆರೋಪಿಸಿದರು.

ದೇಶದ ಮಹಿಳೆಯರ ರಾಜಕೀಯ ಸಬಲೀಕರಣಕ್ಕೆ ಅಡ್ಡಿಯಾಗುವ ರೀತಿಯ ನಿಲುವು ಕಾಂಗ್ರೆಸ್ ಪಕ್ಷಕ್ಕೆ ಭವಿಷ್ಯದಲ್ಲಿ ರಾಜಕೀಯವಾಗಿ ಹಿನ್ನಡೆ ಉಂಟುಮಾಡಲಿದೆ ಎಂದು ಅಭಿಪ್ರಾಯಪಟ್ಟ ಅವರು, ಬಿಜೆಪಿ ಸರ್ಕಾರ ಜನಪರ ಯೋಜನೆಗಳು, ಅಭಿವೃದ್ಧಿ ಕಾರ್ಯಕ್ರಮಗಳು ಮತ್ತು ಬಡಜನರ ಕಲ್ಯಾಣಕ್ಕೆ ಬದ್ಧವಾಗಿದೆ ಎಂದು ತಿಳಿಸಿದರು.

ರಾಜ್ಯದ ಜನತೆ ಅಭಿವೃದ್ಧಿ, ಪಾರದರ್ಶಕ ಆಡಳಿತ ಮತ್ತು ಜನಪರ ರಾಜಕಾರಣವನ್ನು ಬಯಸುತ್ತಿದ್ದು, ಅಧಿಕಾರ ರಾಜಕಾರಣ ಮಾಡುವವರನ್ನು ಜನರು ಸೂಕ್ತ ಸಮಯದಲ್ಲಿ ತಿರಸ್ಕರಿಸಲಿದ್ದಾರೆ ಎಂದು ಬಿಜೆಪಿ ಗದಗ ಜಿಲ್ಲಾಧ್ಯಕ್ಷ ತೊಟಪ್ಪ (ರಾಜು) ಕುರುಡಗಿ ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande