
ಗದಗ, 01 ಜೂನ್ (ಹಿ.ಸ.) :
ಆ್ಯಂಕರ್ : ಹೊಸ ಶೈಕ್ಷಣಿಕ ವರ್ಷದ ಆರಂಭವನ್ನು ಸ್ಮರಣೀಯವಾಗಿಸುವ ಉದ್ದೇಶದಿಂದ ಗದಗ ತಾಲೂಕಿನ ಅಸುಂಡಿಯ ಕುವೆಂಪು ಶತಮಾನೋತ್ಸವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾರಂಭೋತ್ಸವ ಕಾರ್ಯಕ್ರಮ ಅದ್ಧೂರಿಯಾಗಿ ಹಾಗೂ ಸಂಭ್ರಮದಿಂದ ಜರುಗಿತು. ಶಾಲೆಯ ಮೊದಲ ದಿನವೇ ಮಕ್ಕಳಲ್ಲಿ ಕಲಿಕೆಯ ಆಸಕ್ತಿ, ಉತ್ಸಾಹ ಮತ್ತು ಶಾಲೆಯ ಬಗ್ಗೆ ಆತ್ಮೀಯತೆ ಮೂಡಿಸುವ ನಿಟ್ಟಿನಲ್ಲಿ ಹಲವು ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದ ಅಂಗವಾಗಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ವಿದ್ಯಾರ್ಥಿಗಳ ಭವ್ಯ ಮೆರವಣಿಗೆ ನಡೆಸಲಾಯಿತು. ವಿಶೇಷವಾಗಿ ಎತ್ತಿನಗಾಡಿ ಹಾಗೂ ಟ್ರಾಕ್ಟರ್ಗಳಲ್ಲಿ ಮಕ್ಕಳನ್ನು ಕೂರಿಸಿಕೊಂಡು ಗ್ರಾಮ ಸುತ್ತ ಮೆರವಣಿಗೆ ನಡೆಸಿ ಶಾಲೆಗೆ ಕರೆತರಲಾಯಿತು. ಮೆರವಣಿಗೆಯುದ್ದಕ್ಕೂ ಗ್ರಾಮಸ್ಥರು ಮಕ್ಕಳಿಗೆ ಹರ್ಷೋದ್ಗಾರಗಳೊಂದಿಗೆ ಸ್ವಾಗತ ಕೋರಿದರು.
ಶಾಲೆಯ ಮುಖ್ಯ ದ್ವಾರದಲ್ಲಿ ಶಿಕ್ಷಕರು ಹಾಗೂ ಗಣ್ಯರು ಸೇರಿ ವಿದ್ಯಾರ್ಥಿಗಳ ಮೇಲೆ ಪುಷ್ಪವೃಷ್ಟಿ ಮಾಡುವ ಮೂಲಕ ಆತ್ಮೀಯವಾಗಿ ಬರಮಾಡಿಕೊಂಡ ದೃಶ್ಯ ಗಮನ ಸೆಳೆಯಿತು.
ವಿದ್ಯಾರ್ಥಿಗಳು ಮತ್ತು ಪಾಲಕರಿಗಾಗಿ ವಿಶೇಷವಾಗಿ ಸಿದ್ಧಪಡಿಸಿದ್ದ ಸೆಲ್ಫಿ ಕಾರ್ನರ್ ಕಾರ್ಯಕ್ರಮಕ್ಕೆ ಮತ್ತಷ್ಟು ಮೆರಗು ತಂದಿತು. ಹೊಸ ಪುಸ್ತಕ, ಹೊಸ ಸಮವಸ್ತ್ರ ಹಾಗೂ ಹೊಸ ಶೈಕ್ಷಣಿಕ ವರ್ಷದ ಸಂಭ್ರಮ ಮಕ್ಕಳ ಮುಖದಲ್ಲಿ ವಿಶೇಷ ಉತ್ಸಾಹ ಮೂಡಿಸಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಆರ್.ಎಸ್. ಬುರಡಿ ಮಾತನಾಡಿ, ಶಿಕ್ಷಣ ಪ್ರತಿಯೊಬ್ಬ ಮಗುವಿನ ಮೂಲಭೂತ ಹಕ್ಕಾಗಿದ್ದು, ಎಲ್ಲ ಮಕ್ಕಳಿಗೂ ಸಮಾನ ಹಾಗೂ ಗುಣಮಟ್ಟದ ಶಿಕ್ಷಣ ಒದಗಿಸುವುದು ಸರ್ಕಾರ ಮತ್ತು ಸಂವಿಧಾನದ ಆಶಯವಾಗಿದೆ ಎಂದು ಹೇಳಿದರು.
ಮಕ್ಕಳಿಗೆ ಸುರಕ್ಷಿತ, ಸಂತೋಷದಾಯಕ ಹಾಗೂ ಪ್ರೇರಣಾದಾಯಕ ವಾತಾವರಣದಲ್ಲಿ ಶಿಕ್ಷಣ ದೊರಕಬೇಕು. ಶಾಲೆಯ ಮೊದಲ ದಿನವೇ ಮಕ್ಕಳಲ್ಲಿ ಶಾಲೆಯ ಬಗ್ಗೆ ಪ್ರೀತಿ ಮತ್ತು ಅಭಿಮಾನ ಮೂಡಿದರೆ ಅದು ವರ್ಷಪೂರ್ತಿ ಕಲಿಕೆಯ ಉತ್ಸಾಹವನ್ನು ಹೆಚ್ಚಿಸುತ್ತದೆ ಎಂದು ಹೇಳಿದರು. ಶಾಲೆಯ ಅಭಿವೃದ್ಧಿಗೆ ಶಿಕ್ಷಕರು, ಪಾಲಕರು ಹಾಗೂ ಶಾಲಾಭಿವೃದ್ಧಿ ಸಮಿತಿ ಸದಸ್ಯರು ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.
ಸರ್ಕಾರಿ ಶಾಲೆಗಳಲ್ಲಿ ಆಧುನಿಕ ಕಲಿಕಾ ಸೌಲಭ್ಯಗಳು, ಉತ್ತಮ ಶಿಕ್ಷಕರ ಬಳಗ, ಉಚಿತ ಪಠ್ಯಪುಸ್ತಕಗಳು, ಸಮವಸ್ತ್ರ, ಮಧ್ಯಾಹ್ನದ ಬಿಸಿಯೂಟ ಸೇರಿದಂತೆ ವಿದ್ಯಾರ್ಥಿ ಸ್ನೇಹಿ ವ್ಯವಸ್ಥೆಗಳು ಲಭ್ಯವಿದ್ದು, ಸರ್ಕಾರಿ ಶಾಲೆಗಳು ಯಾವುದೇ ಖಾಸಗಿ ಶಾಲೆಗಳಿಗಿಂತ ಕಡಿಮೆ ಇಲ್ಲ ಎಂಬುದನ್ನು ಸಮಾಜ ಅರಿಯಬೇಕಾಗಿದೆ ಎಂದು ಅವರು ತಿಳಿಸಿದರು.
ಕನ್ನಡ ಮಾಧ್ಯಮದ ಜೊತೆಗೆ ಇಂಗ್ಲಿಷ್ ಶಿಕ್ಷಣಕ್ಕೂ ಆದ್ಯತೆ ನೀಡಲಾಗುತ್ತಿದ್ದು, ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಸಹ ಜಾಗತಿಕ ಮಟ್ಟದಲ್ಲಿ ಸ್ಪರ್ಧಿಸುವ ಸಾಮರ್ಥ್ಯ ಹೊಂದುವಂತೆ ಶಿಕ್ಷಣ ವ್ಯವಸ್ಥೆ ರೂಪಿಸಲಾಗುತ್ತಿದೆ ಎಂದು ಹೇಳಿದರು.
ಶಿಕ್ಷಣದ ಮಹತ್ವವನ್ನು ವಿಶಿಷ್ಟವಾಗಿ ವಿವರಿಸಿದ ಅವರು, “ಶಿಕ್ಷಣ ಕೊತ್ತಂಬರಿ ಸೊಪ್ಪಿನಂತಿದ್ದು, ಅದು ಎಲ್ಲಿದ್ದರೂ ತನ್ನ ಸುವಾಸನೆ ಹರಡುತ್ತದೆ. ಆದರೆ ಅದು ಎಲ್ಲಿದೆ ಎಂಬುದರ ಮೇಲೆ ಅದರ ಮೌಲ್ಯ ನಿರ್ಧಾರವಾಗುತ್ತದೆ. ಅದೇ ರೀತಿ ಮಕ್ಕಳು ತಾವು ಓದುತ್ತಿರುವ ಶಾಲೆಯನ್ನು ಹೆಮ್ಮೆಯಿಂದ ಕಾಣಬೇಕು” ಎಂದು ಕರೆ ನೀಡಿದರು.
ನಿವೃತ್ತ ಉಪನಿರ್ದೇಶಕ ಎ.ಎನ್. ನಾಗರಳ್ಳಿ ಮಾತನಾಡಿ, ಶಿಕ್ಷಕರ ಪಾತ್ರ ಸಮಾಜ ನಿರ್ಮಾಣದಲ್ಲಿ ಅತ್ಯಂತ ಮಹತ್ವದ್ದಾಗಿದೆ ಎಂದು ಹೇಳಿದರು. ಶಿಕ್ಷಕರು ಬದ್ಧತೆ ಹಾಗೂ ಜವಾಬ್ದಾರಿಯಿಂದ ಪಾಠ ಬೋಧನೆ ಮಾಡಿದಾಗ ಮಾತ್ರ ಮಕ್ಕಳು ಉತ್ತಮ ಜ್ಞಾನ ಮತ್ತು ಮೌಲ್ಯಗಳನ್ನು ಪಡೆದುಕೊಳ್ಳಲು ಸಾಧ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟರು.
ಅತಿಥಿ ಎಚ್.ಕೆ. ಬೂಮ್ಮಕ್ಕನವರ ಮಾತನಾಡಿ, ಗ್ರಾಮೀಣ ಪ್ರದೇಶಗಳಲ್ಲಿ ಸರ್ಕಾರಿ ಶಾಲೆಗಳ ಉಳಿವಿಗೆ ಎಲ್ಲರೂ ಕೈಜೋಡಿಸಬೇಕು ಎಂದು ಹೇಳಿದರು. ಖಾಸಗಿ ಶಾಲೆಗಳ ಹೆಚ್ಚಳದಿಂದ ಸರ್ಕಾರಿ ಶಾಲೆಗಳು ಸವಾಲು ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಪಾಲಕರು, ಹಳೆಯ ವಿದ್ಯಾರ್ಥಿಗಳು ಹಾಗೂ ಸಮಾಜದ ಎಲ್ಲ ವರ್ಗದವರು ಸರ್ಕಾರಿ ಶಾಲೆಗಳ ಬಲವರ್ಧನೆಗೆ ಮುಂದಾಗಬೇಕು ಎಂದು ತಿಳಿಸಿದರು.
ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ (ಅಭಿವೃದ್ಧಿ) ಕೆ.ಡಿ. ಬಡಿಗೇರ ಮಾತನಾಡಿ, ಸರ್ಕಾರಿ ಶಾಲೆಗಳ ಮೇಲಿನ ಸಾರ್ವಜನಿಕರ ವಿಶ್ವಾಸವನ್ನು ಗಟ್ಟಿಗೊಳಿಸುವ ಜವಾಬ್ದಾರಿ ಶಿಕ್ಷಕರ ಮೇಲಿದೆ ಎಂದು ಹೇಳಿದರು. ಒಂದು ಮಗುವೂ ಸರ್ಕಾರಿ ಶಾಲೆಯಿಂದ ಖಾಸಗಿ ಶಾಲೆಗೆ ಹೋಗದಂತೆ ನೋಡಿಕೊಳ್ಳಬೇಕು. ವಿದ್ಯಾರ್ಥಿಗಳೇ ಸರ್ಕಾರಿ ಶಾಲೆಗಳ ಜೀವಾಳ ಎಂಬುದನ್ನು ಶಿಕ್ಷಕರು ಮನಗಾಣಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕಗಳು ಹಾಗೂ ಸಮವಸ್ತ್ರಗಳನ್ನು ವಿತರಿಸಲಾಯಿತು. ಹೊಸ ಪುಸ್ತಕಗಳು ಮತ್ತು ಸಮವಸ್ತ್ರಗಳನ್ನು ಪಡೆದ ವಿದ್ಯಾರ್ಥಿಗಳ ಸಂತಸ ಗಮನ ಸೆಳೆಯಿತು. ಶಾಲೆಯ ಆವರಣ ಹಬ್ಬದ ವಾತಾವರಣವನ್ನು ಸೃಷ್ಟಿಸಿತ್ತು.
ಕಾರ್ಯಕ್ರಮದಲ್ಲಿ ಗದಗ ಗ್ರಾಮೀಣ ಕ್ಷೇತ್ರ ಸಮನ್ವಯಾಧಿಕಾರಿ ಜೆ.ಎ. ಭಾವಿಕಟ್ಟಿ, ಡಿ.ವೈ.ಪಿ.ಸಿ ರವಿ ಪ್ರಕಾಶ, ವಿವಿಧ ಶಿಕ್ಷಕರ ಸಂಘಗಳ ಪದಾಧಿಕಾರಿಗಳು, ಗ್ರಾಮ ಪಂಚಾಯಿತಿ ಪ್ರತಿನಿಧಿಗಳು, ಎಸ್ಡಿಎಂಸಿ ಸದಸ್ಯರು, ಶಿಕ್ಷಣ ಪ್ರೇಮಿಗಳು, ಪಾಲಕರು, ಶಿಕ್ಷಕರು, ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಒಟ್ಟಾರೆ ಅಸುಂಡಿಯ ಶಾಲಾರಂಭೋತ್ಸವ ಕಾರ್ಯಕ್ರಮ ಮಕ್ಕಳಲ್ಲಿ ಹೊಸ ಶೈಕ್ಷಣಿಕ ವರ್ಷದ ಬಗ್ಗೆ ಉತ್ಸಾಹ ಮೂಡಿಸುವುದರ ಜೊತೆಗೆ ಸರ್ಕಾರಿ ಶಾಲೆಗಳ ಮೇಲಿನ ಜನರ ವಿಶ್ವಾಸವನ್ನು ಮತ್ತಷ್ಟು ಬಲಪಡಿಸಿದ ವಿಶಿಷ್ಟ ಕಾರ್ಯಕ್ರಮವಾಗಿ ಗಮನ ಸೆಳೆಯಿತು.
ಹಿಂದೂಸ್ತಾನ್ ಸಮಾಚಾರ್ / lalita MP