
ಬಾಗಲಕೋಟೆ, 01 ಜೂನ್ (ಹಿ.ಸ.) :
ಆಂಕರ್ : ಉತ್ತರ ಕರ್ನಾಟಕದ ಪ್ರಮುಖ ದಲಿತ ನಾಯಕ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ಆರ್.ಬಿ. ತಿಮ್ಮಾಪುರ ಅವರಿಗೆ ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರ ಸಚಿವ ಸಂಪುಟದಲ್ಲಿ ಪ್ರಭಾವಿ ಖಾತೆಯೊಂದಿಗೆ ಉಪಮುಖ್ಯಮಂತ್ರಿ (ಡಿಸಿಎಂ) ಹುದ್ದೆ ನೀಡಬೇಕು ಎಂದು ಅವರ ಬೆಂಬಲಿಗರು ಕಾಂಗ್ರೆಸ್ ಹೈಕಮಾಂಡ್ ನಾಯಕರಿಗೆ ಒತ್ತಾಯಿಸಿದ್ದಾರೆ.
ಬಾಗಲಕೋಟೆ ಜಿಲ್ಲೆಯ ಮುಧೋಳ ಪಟ್ಟಣದ ಪ್ರವಾಸಿ ಮಂದಿರದ ಎದುರು ತಿಮ್ಮಾಪುರ ಅವರ ಅಭಿಮಾನಿಗಳು, ಬೆಂಬಲಿಗರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಸಭೆ ಸೇರಿ ಈ ಕುರಿತು ಚರ್ಚೆ ನಡೆಸಿದರು. ಸಭೆಯಲ್ಲಿ ಮಾತನಾಡಿದ ಮುಖಂಡರು, ಆರ್.ಬಿ. ತಿಮ್ಮಾಪುರ ಅವರು ಹಲವು ದಶಕಗಳಿಂದ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿ ಹಾಗೂ ಜನಪ್ರತಿನಿಧಿಯಾಗಿ ಸೇವೆ ಸಲ್ಲಿಸಿದ್ದು, ಪಕ್ಷದ ತತ್ವ ಸಿದ್ಧಾಂತಗಳಿಗೆ ಬದ್ಧರಾಗಿ ಕೆಲಸ ಮಾಡಿದ್ದಾರೆ ಎಂದು ಅಭಿಪ್ರಾಯಪಟ್ಟರು.
ಪಕ್ಷದ ಹೈಕಮಾಂಡ್ ಹಾಗೂ ರಾಜ್ಯ ನಾಯಕತ್ವ ನೀಡಿದ ಜವಾಬ್ದಾರಿಗಳನ್ನು ಸಮರ್ಥವಾಗಿ ನಿರ್ವಹಿಸಿರುವ ತಿಮ್ಮಾಪುರ ಅವರು, ಸಚಿವರಾಗಿ ಕಾರ್ಯನಿರ್ವಹಿಸಿದ ಸಂದರ್ಭದಲ್ಲೂ ಜನಪರ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೆ ತಂದಿದ್ದಾರೆ. ಗ್ರಾಮೀಣ ಅಭಿವೃದ್ಧಿ, ಸಾಮಾಜಿಕ ನ್ಯಾಯ ಹಾಗೂ ದಲಿತ ಸಮುದಾಯದ ಹಿತಾಸಕ್ತಿಗಾಗಿ ಅವರು ನಿರಂತರವಾಗಿ ಶ್ರಮಿಸಿದ್ದು, ಅವರ ಸೇವೆಯನ್ನು ಪರಿಗಣಿಸಿ ಉನ್ನತ ಸ್ಥಾನಮಾನ ನೀಡಬೇಕು ಎಂದು ಆಗ್ರಹಿಸಿದರು.
ಉತ್ತರ ಕರ್ನಾಟಕ ಭಾಗದ ದಲಿತ ಸಮುದಾಯದಲ್ಲಿ ತಿಮ್ಮಾಪುರ ಅವರಿಗೆ ಅಪಾರ ಜನಬೆಂಬಲವಿದ್ದು, ಅವರನ್ನು ಉಪಮುಖ್ಯಮಂತ್ರಿಯನ್ನಾಗಿ ನೇಮಿಸುವ ಮೂಲಕ ದಲಿತ ಸಮುದಾಯಕ್ಕೆ ಹೆಚ್ಚಿನ ರಾಜಕೀಯ ಪ್ರಾತಿನಿಧ್ಯ ಸಿಗಲಿದೆ ಎಂದು ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಯಿತು. ರಾಜ್ಯದ ಸಮಗ್ರ ಅಭಿವೃದ್ಧಿಗೆ ಹಾಗೂ ಸಾಮಾಜಿಕ ಸಮತೋಲನ ಕಾಪಾಡುವ ನಿಟ್ಟಿನಲ್ಲಿ ಅವರಂತಹ ಅನುಭವಿ ನಾಯಕರಿಗೆ ಮಹತ್ವದ ಜವಾಬ್ದಾರಿ ನೀಡುವುದು ಅಗತ್ಯ ಎಂದು ಬೆಂಬಲಿಗರು ಹೇಳಿದರು.
ನೂತನ ಸಚಿವ ಸಂಪುಟ ರಚನೆ ವೇಳೆ ಪ್ರಭಾವಿ ಖಾತೆಯೊಂದಿಗೆ ಡಿಸಿಎಂ ಹುದ್ದೆ ನೀಡಿದರೆ ಪಕ್ಷದ ಸಂಘಟನೆಗೂ ಬಲ ಸಿಗಲಿದ್ದು, ಉತ್ತರ ಕರ್ನಾಟಕ ಭಾಗದ ಜನರ ಆಶೋತ್ತರಗಳಿಗೂ ಸ್ಪಂದಿಸಿದಂತಾಗುತ್ತದೆ ಎಂದು ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.
ಸಭೆಯ ಅಂತ್ಯದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ನಾಯಕರು ಹಾಗೂ ಹೈಕಮಾಂಡ್ಗೆ ಮನವಿ ಸಲ್ಲಿಸಿ, ಆರ್.ಬಿ. ತಿಮ್ಮಾಪುರ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ಹಾಗೂ ಪ್ರಮುಖ ಖಾತೆ ನೀಡುವಂತೆ ಒಕ್ಕೊರಲಿನಿಂದ ಒತ್ತಾಯಿಸಲಾಯಿತು. ಬೆಂಬಲಿಗರ ಈ ಆಗ್ರಹ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದ್ದು, ಸಚಿವ ಸಂಪುಟ ರಚನೆ ಸಂದರ್ಭದಲ್ಲಿ ಹೈಕಮಾಂಡ್ ಯಾವ ನಿರ್ಧಾರ ಕೈಗೊಳ್ಳಲಿದೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ.
ಹಿಂದೂಸ್ತಾನ್ ಸಮಾಚಾರ್ / jyothi deshpande