
ಗದಗ, 10 ಜೂನ್ (ಹಿ.ಸ.) :
ಆ್ಯಂಕರ್ : ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸ್ಥಾನಕ್ಕಾಗಿ ನಡೆಯುತ್ತಿರುವ ಪೈಪೋಟಿ ಹಾಗೂ ಲಾಬಿ ರಾಜಕಾರಣ ಆಡಳಿತದ ಗುಣಮಟ್ಟವನ್ನು ಕುಗ್ಗಿಸುತ್ತಿದ್ದು, ಜನರ ಸಮಸ್ಯೆಗಳಿಗಿಂತ ಅಧಿಕಾರದ ಹಂಚಿಕೆಯೇ ಮುಖ್ಯ ವಿಷಯವಾಗಿ ಪರಿಣಮಿಸಿದೆ ಎಂದು ಬಿಜೆಪಿ ಗದಗ ಜಿಲ್ಲಾ ವಕ್ತಾರ ಎಂ.ಎಂ. ಹಿರೇಮಠ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಮೂರು ವರ್ಷಗಳ ಹಿಂದೆ ವಿವಿಧ ಗ್ಯಾರಂಟಿ ಯೋಜನೆಗಳ ಭರವಸೆಯ ಆಧಾರದ ಮೇಲೆ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿತ್ತು. ಆದರೆ ಆಡಳಿತದ ಮೂರು ವರ್ಷಗಳ ಬಳಿಕ ಸರ್ಕಾರದ ಗಮನ ಅಭಿವೃದ್ಧಿ ಕಾರ್ಯಗಳಿಗಿಂತ ಮಂತ್ರಿಗಿರಿ ಹಂಚಿಕೆ ಹಾಗೂ ಆಂತರಿಕ ರಾಜಕೀಯ ಕಸರತ್ತಿನತ್ತ ಹರಿದಿರುವುದು ದುರದೃಷ್ಟಕರ ಬೆಳವಣಿಗೆ ಎಂದು ಆರೋಪಿಸಿದರು.
ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅಧಿಕಾರ ಸ್ವೀಕರಿಸಿದ ದಿನದಿಂದಲೇ ಅನೇಕ ಶಾಸಕರು ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸುತ್ತಾ ಬಂದಿದ್ದಾರೆ. ಕಳೆದ ಹಲವು ತಿಂಗಳುಗಳಿಂದ ಮಂತ್ರಿಮಂಡಲ ಪುನರ್ರಚನೆ ಕುರಿತು ಚರ್ಚೆಗಳು ಆರಂಭವಾದ ಬಳಿಕ ಈ ಚಟುವಟಿಕೆಗಳು ಮತ್ತಷ್ಟು ತೀವ್ರಗೊಂಡಿವೆ. ರಾಜ್ಯದ ಅಭಿವೃದ್ಧಿ, ಜನರ ಸಮಸ್ಯೆಗಳು ಮತ್ತು ಕ್ಷೇತ್ರಗಳ ಅಗತ್ಯಗಳ ಬಗ್ಗೆ ಚಿಂತಿಸಬೇಕಾದ ಶಾಸಕರು ದೆಹಲಿ ಯಾತ್ರೆಗಳಲ್ಲಿ ನಿರತರಾಗಿ ಸಚಿವ ಸ್ಥಾನ ಪಡೆಯುವ ಪ್ರಯತ್ನದಲ್ಲಿ ತೊಡಗಿರುವುದು ಜನರ ನಿರೀಕ್ಷೆಗಳಿಗೆ ವಿರುದ್ಧವಾಗಿದೆ ಎಂದು ಅವರು ಟೀಕಿಸಿದರು.
ಕೆಲವು ಸಚಿವರು ತಮ್ಮ ಸ್ಥಾನವನ್ನು ಉಳಿಸಿಕೊಳ್ಳಲು ಪಕ್ಷದ ಹೈಕಮಾಂಡ್ ಮುಂದೆ ಪರೇಡ್ ನಡೆಸುತ್ತಿರುವುದು ಕಂಡುಬರುತ್ತಿದೆ. ಮತ್ತೊಂದೆಡೆ ಸಚಿವ ಸ್ಥಾನ ಸಿಗದ ಶಾಸಕರು ತಮ್ಮ ಬೆಂಬಲಿಗರ ಮೂಲಕ ಒತ್ತಡ ತಂತ್ರ ಅನುಸರಿಸುತ್ತಿದ್ದಾರೆ. ಇದರಿಂದ ಆಡಳಿತ ಯಂತ್ರದ ಮೇಲೆ ಪರಿಣಾಮ ಬೀಳುತ್ತಿದ್ದು, ಸರ್ಕಾರದ ಕಾರ್ಯಕ್ಷಮತೆ ಕುಂಠಿತಗೊಳ್ಳುತ್ತಿದೆ ಎಂದು ಹಿರೇಮಠ ಅಭಿಪ್ರಾಯಪಟ್ಟರು.
ಸಚಿವ ಸ್ಥಾನವನ್ನು ಜನಸೇವೆಯ ಜವಾಬ್ದಾರಿಯಾಗಿ ನೋಡುವ ಬದಲು ಕೆಲವರು ಅದನ್ನು ತಮ್ಮ ಜನ್ಮಸಿದ್ಧ ಹಕ್ಕು ಎಂಬಂತೆ ವರ್ತಿಸುತ್ತಿದ್ದಾರೆ. ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಗಮನಾರ್ಹ ಸಾಧನೆ ಮಾಡದ ಕೆಲ ನಾಯಕರು ಮತ್ತೆ ಸಚಿವ ಸ್ಥಾನಕ್ಕಾಗಿ ಒತ್ತಾಯಿಸುತ್ತಿರುವುದು ಆಶ್ಚರ್ಯಕರ ಸಂಗತಿ. ಇಂತಹ ಬೆಳವಣಿಗೆಗಳು ಕರ್ನಾಟಕದ ರಾಜಕೀಯ ಇತಿಹಾಸದಲ್ಲಿ ಅಪರೂಪವಾಗಿದ್ದು, ರಾಜ್ಯದ ಜನತೆ ಇದನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ ಎಂದು ಹೇಳಿದರು.
ಕಾಂಗ್ರೆಸ್ ಹೈಕಮಾಂಡ್ ಶೀಘ್ರವೇ ಬಾಕಿ ಉಳಿದಿರುವ ಸಚಿವ ಸ್ಥಾನಗಳನ್ನು ಭರ್ತಿ ಮಾಡಿ ಆಡಳಿತದ ಮೇಲೆ ಗಮನಹರಿಸಬೇಕು. ರಾಜ್ಯದ ಜನತೆ ಅಭಿವೃದ್ಧಿ, ಉದ್ಯೋಗ ಸೃಷ್ಟಿ, ಮೂಲಸೌಕರ್ಯ ಅಭಿವೃದ್ಧಿ, ಕೃಷಿ ಹಾಗೂ ಕೈಗಾರಿಕಾ ಕ್ಷೇತ್ರಗಳ ಪ್ರಗತಿಯನ್ನು ನಿರೀಕ್ಷಿಸುತ್ತಿದ್ದಾರೆ. ಆದರೆ ಸರ್ಕಾರದೊಳಗಿನ ಅಧಿಕಾರದ ಪೈಪೋಟಿ ಈ ಎಲ್ಲ ವಿಷಯಗಳನ್ನು ಹಿನ್ನೆಗೆ ತಳ್ಳಿದೆ ಎಂದು ಅವರು ಆರೋಪಿಸಿದರು.
ಕಾಂಗ್ರೆಸ್ ಸರ್ಕಾರದ ಮೂರು ವರ್ಷಗಳ ಆಡಳಿತಾವಧಿಯಲ್ಲಿ ರಾಜ್ಯದ ಅಭಿವೃದ್ಧಿ ಕಾರ್ಯಗಳಿಗೆ ಬೇಕಾದಷ್ಟು ಆದ್ಯತೆ ದೊರಕಿಲ್ಲ. ಗ್ಯಾರಂಟಿ ಯೋಜನೆಗಳ ಜಾರಿಗೆ ಹೆಚ್ಚಿನ ಆರ್ಥಿಕ ಹೊರೆ ಉಂಟಾಗಿದ್ದು, ಸರ್ಕಾರ ಸಾಲದ ಮೊರೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಹಿರೇಮಠ ದೂರಿದರು. ರಾಜ್ಯದ ಆರ್ಥಿಕ ಪರಿಸ್ಥಿತಿಯ ಬಗ್ಗೆ ಜನರಲ್ಲಿ ಆತಂಕ ಮೂಡಿದ್ದು, ಅಭಿವೃದ್ಧಿ ಯೋಜನೆಗಳ ಅನುಷ್ಠಾನದಲ್ಲೂ ಹಿನ್ನಡೆ ಕಂಡುಬರುತ್ತಿದೆ ಎಂದು ಅವರು ಹೇಳಿದರು.
ರಾಜ್ಯದ ಜನತೆ ಸರ್ಕಾರದ ಕಾರ್ಯವೈಖರಿಯನ್ನು ಗಮನಿಸುತ್ತಿದ್ದು, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಅದರ ಪರಿಣಾಮ ಗೋಚರಿಸಲಿದೆ. ಆಡಳಿತಕ್ಕಿಂತ ಅಧಿಕಾರ ರಾಜಕಾರಣಕ್ಕೆ ಹೆಚ್ಚಿನ ಮಹತ್ವ ನೀಡುತ್ತಿರುವ ಕಾಂಗ್ರೆಸ್ ಪಕ್ಷದ ವಿರುದ್ಧ ಜನರಲ್ಲಿ ಅಸಮಾಧಾನ ಹೆಚ್ಚಾಗುತ್ತಿದೆ. ಜನರ ನಿರೀಕ್ಷೆಗಳಿಗೆ ತಕ್ಕಂತೆ ಆಡಳಿತ ನೀಡುವಲ್ಲಿ ಸರ್ಕಾರ ವಿಫಲವಾಗಿದೆ ಎಂಬ ಭಾವನೆ ವ್ಯಾಪಕವಾಗಿದ್ದು, ಮುಂದಿನ ದಿನಗಳಲ್ಲಿ ಜನರ ತೀರ್ಪು ಸ್ಪಷ್ಟವಾಗಲಿದೆ ಎಂದು ಎಂ.ಎಂ. ಹಿರೇಮಠ ಅಭಿಪ್ರಾಯಪಟ್ಟಿದ್ದಾರೆ.
ಕಾಂಗ್ರೆಸ್ ಸರ್ಕಾರ ತನ್ನ ಆಂತರಿಕ ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ ರಾಜ್ಯದ ಅಭಿವೃದ್ಧಿಗೆ ಆದ್ಯತೆ ನೀಡಬೇಕು. ಜನರ ಸಮಸ್ಯೆಗಳ ಪರಿಹಾರ, ಮೂಲಸೌಕರ್ಯಗಳ ಅಭಿವೃದ್ಧಿ ಹಾಗೂ ಆರ್ಥಿಕ ಸ್ಥಿರತೆಗಾಗಿ ಸರ್ಕಾರ ಗಂಭೀರ ಕ್ರಮ ಕೈಗೊಳ್ಳಬೇಕಾಗಿದೆ. ಇಲ್ಲವಾದರೆ ಜನರ ವಿಶ್ವಾಸ ಕಳೆದುಕೊಳ್ಳುವ ಅಪಾಯ ಎದುರಾಗಲಿದೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / lalita MP