
ಬಾಗಲಕೋಟೆ, 10 ಜೂನ್ (ಹಿ.ಸ.) :
ಆಂಕರ್ : ಬಾಗಲಕೋಟೆ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಸುರಿದ ಭಾರೀ ಮಳೆಯಿಂದ ಸಾರ್ವಜನಿಕ ಮೂಲಸೌಕರ್ಯಗಳಿಗೆ ಹಾನಿ ಉಂಟಾಗಿರುವ ಹಿನ್ನೆಲೆಯಲ್ಲಿ, ಮಹಿಳೆಯರು ಹಾಗೂ ಬಾಲಕಿಯರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ತಕ್ಷಣದ ಕ್ರಮ ಕೈಗೊಳ್ಳುವಂತೆ ಬಾಗಲಕೋಟ ವಿಧಾನಸಭಾ ಕ್ಷೇತ್ರದ ಶಾಸಕ ಉಮೇಶ್ ಮೇಟಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಮಳೆಯ ಪರಿಣಾಮವಾಗಿ ಗ್ರಾಮದ ಸಾರ್ವಜನಿಕ ಶೌಚಾಲಯದ ಆವರಣ ಗೋಡೆ ಕುಸಿದು ಬಿದ್ದಿದ್ದು, ಇದರಿಂದ ಹೆಣ್ಣುಮಕ್ಕಳು, ಮಹಿಳೆಯರು ಹಾಗೂ ತಾಯಂದಿರಿಗೆ ತೊಂದರೆ ಉಂಟಾಗುವ ಸಾಧ್ಯತೆ ಎದುರಾಗಿತ್ತು. ವಿಷಯ ತಿಳಿಯುತ್ತಿದ್ದಂತೆಯೇ ಶಾಸಕ ಉಮೇಶ್ ಮೇಟಿ ಅಧಿಕಾರಿಗಳೊಂದಿಗೆ ಸಂಪರ್ಕ ಸಾಧಿಸಿ ತುರ್ತು ಕಾಮಗಾರಿಯನ್ನು ಕೈಗೆತ್ತಿಕೊಳ್ಳುವಂತೆ ಸೂಚಿಸಿದ್ದರು.
ಶಾಸಕರ ನಿರ್ದೇಶನದಂತೆ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿ ತುರ್ತು ದುರಸ್ತಿ ಕಾಮಗಾರಿಯನ್ನು ಕೈಗೊಂಡಿದ್ದಾರೆ. ಇದೀಗ ಆವರಣ ಗೋಡೆಯ ಮರುನಿರ್ಮಾಣ ಕಾಮಗಾರಿ ಪೂರ್ಣಗೊಂಡಿದ್ದು, ಸಾರ್ವಜನಿಕರು ಯಾವುದೇ ಆತಂಕವಿಲ್ಲದೆ ಶೌಚಾಲಯ ಸೌಲಭ್ಯವನ್ನು ಬಳಸಿಕೊಳ್ಳುವಂತಾಗಿದೆ.
ಈ ಕುರಿತು ಮಾತನಾಡಿದ ಶಾಸಕ ಉಮೇಶ್ ಮೇಟಿ, ಮಹಿಳೆಯರು ಮತ್ತು ಹೆಣ್ಣುಮಕ್ಕಳ ಸುರಕ್ಷತೆ ನಮ್ಮ ಮೊದಲ ಆದ್ಯತೆಯಾಗಿದೆ. ಸಾರ್ವಜನಿಕ ಸೌಲಭ್ಯಗಳಿಗೆ ಯಾವುದೇ ರೀತಿಯ ಹಾನಿ ಉಂಟಾದರೆ ತಕ್ಷಣ ಸ್ಪಂದಿಸಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಗ್ರಾಮೀಣ ಪ್ರದೇಶಗಳಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ನಮ್ಮ ಬದ್ಧತೆ ನಿರಂತರವಾಗಿರುತ್ತದೆ ಎಂದು ತಿಳಿಸಿದ್ದಾರೆ.
ಅವರು ಮುಂದುವರಿದು, ಗ್ರಾಮಗಳಲ್ಲಿ ಉಳಿದಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೂಡ ಶೀಘ್ರದಲ್ಲಿಯೇ ಆರಂಭಿಸಲಾಗುವುದು. ರಸ್ತೆ, ಚರಂಡಿ, ಕುಡಿಯುವ ನೀರು, ಶೌಚಾಲಯ ಸೇರಿದಂತೆ ಮೂಲಸೌಕರ್ಯಗಳ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡಲಾಗುತ್ತಿದೆ ಎಂದು ಹೇಳಿದರು.
ಸ್ಥಳೀಯ ಗ್ರಾಮಸ್ಥರು ಸಹ ತುರ್ತು ಪರಿಸ್ಥಿತಿಯಲ್ಲಿ ತಕ್ಷಣ ಸ್ಪಂದಿಸಿ ಸಮಸ್ಯೆ ಬಗೆಹರಿಸಿದ ಶಾಸಕ ಉಮೇಶ್ ಮೇಟಿ ಹಾಗೂ ಅಧಿಕಾರಿಗಳ ಕಾರ್ಯವನ್ನು ಶ್ಲಾಘಿಸಿದ್ದಾರೆ. ಮಹಿಳೆಯರು ಹಾಗೂ ಮಕ್ಕಳ ಅನುಕೂಲಕ್ಕಾಗಿ ಕೈಗೊಳ್ಳಲಾದ ಈ ಕ್ರಮ ಸಾರ್ವಜನಿಕರಲ್ಲಿ ಸಂತಸ ಮೂಡಿಸಿದೆ.
ಗ್ರಾಮೀಣ ಅಭಿವೃದ್ಧಿ ಮತ್ತು ಜನಸೇವೆಗೆ ಒತ್ತು ನೀಡುತ್ತಿರುವ ಶಾಸಕ ಉಮೇಶ್ ಮೇಟಿ, ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತ ಪರಿಹಾರ ಒದಗಿಸುವ ಮೂಲಕ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ನಿರಂತರವಾಗಿ ಶ್ರಮಿಸುತ್ತಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / jyothi deshpande