ರೌಡಿ ಶೀಟರ್ ಗಳ ವಿರುದ್ಧ ಕಾರ್ಯಾಚರಣೆ ; ಗೋಲಗುಂಬಜ್ ಠಾಣಾ ವ್ಯಾಪ್ತಿಯಲ್ಲಿ ದಾಳಿ
ಶೀಟರ್ಗ ಳ
ರೌಡಿಶೀಟರ್


ವಿಜಯಪುರ, 10 ಜೂನ್ (ಹಿ.ಸ.) :

ಆಂಕರ್ : ವಿಜಯಪುರ ನಗರದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ವಿಜಯಪುರ ಜಿಲ್ಲಾ ಪೊಲೀಸ್ ಇಲಾಖೆ ರೌಡಿ ಶೀಟರ್ಗಳ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿ ಅಪರಾಧ ಚಟುವಟಿಕೆಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಸಂದೇಶ ರವಾನಿಸಿದೆ.

ಗೋಲಗುಂಬಜ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಡಿವೈಎಸ್ಪಿ ಸುನಿಲ್ ಕಾಂಬ್ಳೆ, ಸಿಪಿಐ ಸಂಜೀವ್ ಬಳಿಗಾರ್ ಹಾಗೂ ಪಿಎಸ್ಐ ಮೊಹಮ್ಮದ್ ಗೌರಿ ನೇತೃತ್ವದಲ್ಲಿ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ರೌಡಿ ಶೀಟರ್ಗಳ ಮನೆಗಳ ಮೇಲೆ ದಿಢೀರ್ ದಾಳಿ ನಡೆಸಿ ಸಮಗ್ರ ತಪಾಸಣೆ ಕೈಗೊಂಡರು. ಕಾರ್ಯಾಚರಣೆಯ ವೇಳೆ ಹಲವು ರೌಡಿ ಶೀಟರ್ಗಳ ಚಟುವಟಿಕೆಗಳ ಕುರಿತು ಮಾಹಿತಿ ಸಂಗ್ರಹಿಸಿ, ಅವರ ಪ್ರಸ್ತುತ ಚಲನ-ವಲನಗಳ ಬಗ್ಗೆ ಪರಿಶೀಲನೆ ನಡೆಸಲಾಯಿತು.

ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿರುವ ಅಥವಾ ಪೊಲೀಸ್ ನಿಗಾದಲ್ಲಿರುವ ರೌಡಿ ಶೀಟರ್ಗಳನ್ನು ಠಾಣೆಗೆ ಕರೆಸಿ ಕಾನೂನುಬಾಹಿರ ಚಟುವಟಿಕೆಗಳಿಂದ ದೂರವಿರಲು ಕಟ್ಟುನಿಟ್ಟಿನ ಎಚ್ಚರಿಕೆ ನೀಡಲಾಯಿತು. ಸಮಾಜದ ಶಾಂತಿ ಮತ್ತು ನೆಮ್ಮದಿಗೆ ಧಕ್ಕೆ ತರುವ ಯಾವುದೇ ಕೃತ್ಯಗಳಲ್ಲಿ ತೊಡಗಿಸಿಕೊಂಡರೆ ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದರು.

ನಗರದಲ್ಲಿ ಅಪರಾಧ ಪ್ರಕರಣಗಳ ನಿಯಂತ್ರಣ, ಸಾರ್ವಜನಿಕರಲ್ಲಿ ಭದ್ರತೆಯ ಭಾವನೆ ಮೂಡಿಸುವುದು ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವುದು ಈ ವಿಶೇಷ ಕಾರ್ಯಾಚರಣೆಯ ಪ್ರಮುಖ ಉದ್ದೇಶವಾಗಿದೆ. ರೌಡಿ ಶೀಟರ್ಗಳ ಮೇಲೆ ನಿರಂತರ ನಿಗಾ ಇರಿಸಲಾಗುತ್ತಿದ್ದು, ಅವರ ಚಟುವಟಿಕೆಗಳ ಬಗ್ಗೆ ಪೊಲೀಸ್ ಇಲಾಖೆ ನಿರಂತರವಾಗಿ ಮಾಹಿತಿ ಸಂಗ್ರಹಿಸುತ್ತಿದೆ ಎಂದು ತಿಳಿದುಬಂದಿದೆ.

ಇತ್ತೀಚಿನ ದಿನಗಳಲ್ಲಿ ವಿಜಯಪುರ ನಗರದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ಹಲವು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದು, ಅದರ ಭಾಗವಾಗಿ ಈ ವಿಶೇಷ ಕಾರ್ಯಾಚರಣೆ ನಡೆಸಲಾಗಿದೆ. ಅಪರಾಧಿಗಳಿಗೆ ಯಾವುದೇ ರೀತಿಯ ಅವಕಾಶ ನೀಡದಂತೆ ಕಟ್ಟುನಿಟ್ಟಿನ ಕ್ರಮಗಳನ್ನು ಮುಂದುವರಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪೊಲೀಸರ ಈ ದಿಢೀರ್ ಕಾರ್ಯಾಚರಣೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದ್ದು, ಸಮಾಜಘಾತುಕ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಇಂತಹ ಕ್ರಮಗಳು ಅಗತ್ಯವೆಂದು ನಾಗರಿಕರು ಅಭಿಪ್ರಾಯಪಟ್ಟಿದ್ದಾರೆ. ನಗರದಲ್ಲಿ ಶಾಂತಿ, ಸುರಕ್ಷತೆ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ವಿಜಯಪುರ ಜಿಲ್ಲಾ ಪೊಲೀಸ್ ಇಲಾಖೆ ಇನ್ನಷ್ಟು ಪರಿಣಾಮಕಾರಿ ಕ್ರಮಗಳನ್ನು ಮುಂದುವರಿಸಲಿದೆ ಎಂದು ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande