
ವಿಜಯಪುರ, 10 ಜೂನ್ (ಹಿ.ಸ.)
ಆಂಕರ್ : ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಜಕ್ಕರಾಳ ಗ್ರಾಮದ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ಚೀಟಿದಾರರಿಗೆ ವಿತರಿಸಬೇಕಾದ ಅಕ್ಕಿಯನ್ನು ಕಡಿಮೆ ಪ್ರಮಾಣದಲ್ಲಿ ನೀಡಿ ಅನ್ಯಾಯ ಮಾಡಲಾಗುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದ್ದು, ಸಂತ್ರಸ್ತ ಫಲಾನುಭವಿಗಳು ತಹಶೀಲ್ದಾರ್ ಕಚೇರಿಗೆ ದೌಡಾಯಿಸಿ ಲಿಖಿತ ದೂರು ಸಲ್ಲಿಸಿದ್ದಾರೆ.
ಸಾರ್ವಜನಿಕರ ದೂರಿಗೆ ತಕ್ಷಣ ಸ್ಪಂದಿಸಿದ ತಹಶೀಲ್ದಾರ್ ಕೀರ್ತಿ, ಸ್ಥಳ ಪರಿಶೀಲನೆ ನಡೆಸಿ ಸಮಗ್ರ ವರದಿ ಸಲ್ಲಿಸುವಂತೆ ಆಹಾರ ಇಲಾಖೆಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.ಜಕ್ಕರಾಳ ಗ್ರಾಮದ ನಿವಾಸಿಗಳಾದ ಶಿವಪ್ಪ ಪೂಜಾರಿ ಸೇರಿದಂತೆ ಹಲವಾರು ಪಡಿತರ ಚೀಟಿದಾರರು ತಹಶೀಲ್ದಾರ್ ಅವರನ್ನು ಭೇಟಿ ಮಾಡಿ ತಮ್ಮ ಅಹವಾಲು ಸಲ್ಲಿಸಿದರು. ಗ್ರಾಮದ ನ್ಯಾಯಬೆಲೆ ಅಂಗಡಿಯಲ್ಲಿ ಕಳೆದ ಮೇ ತಿಂಗಳ ಪಡಿತರ ವಿತರಣೆಯ ಸಂದರ್ಭದಲ್ಲಿ ಫಲಾನುಭವಿಗಳಿಗೆ ನೀಡಬೇಕಾದ ಅಕ್ಕಿಯ ಪ್ರಮಾಣವನ್ನು ಕಡಿತಗೊಳಿಸಲಾಗಿದ್ದು, ಈ ಬಗ್ಗೆ ಪ್ರಶ್ನಿಸಿದಾಗ ಅಂಗಡಿ ನಿರ್ವಹಣಾಧಿಕಾರಿಗಳು ಸಮರ್ಪಕ ಉತ್ತರ ನೀಡದೆ ನಿರ್ಲಕ್ಷ್ಯ ಧೋರಣೆ ತಾಳಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಗ್ರಾಮಸ್ಥರ ಆರೋಪದ ಪ್ರಕಾರ, ಪ್ರತಿ ಕುಟುಂಬಕ್ಕೂ ಸರ್ಕಾರ ನಿಗದಿಪಡಿಸಿರುವ ಪ್ರಮಾಣದ ಅಕ್ಕಿ ವಿತರಿಸಬೇಕಾಗಿದ್ದರೂ, ಹಲವು ಕುಟುಂಬಗಳಿಗೆ ಕಡಿಮೆ ಪ್ರಮಾಣದಲ್ಲಿ ಅಕ್ಕಿ ನೀಡಲಾಗಿದೆ. ಈ ಕುರಿತು ನ್ಯಾಯಬೆಲೆ ಅಂಗಡಿ ಸಿಬ್ಬಂದಿಯನ್ನು ಪ್ರಶ್ನಿಸಿದಾಗ, “ಮೇಲಿಂದಲೇ ಅಕ್ಕಿ ಕಡಿಮೆ ಬಂದಿದೆ, ನಾವು ಏನೂ ಮಾಡಲು ಸಾಧ್ಯವಿಲ್ಲ” ಎಂದು ಹೇಳಿ ಜವಾಬ್ದಾರಿಯಿಂದ ತಪ್ಪಿಸಿಕೊಳ್ಳುವ ಪ್ರಯತ್ನ ಮಾಡಿದ್ದಾರೆ ಎಂದು ಫಲಾನುಭವಿಗಳು ಆರೋಪಿಸಿದ್ದಾರೆ.
ಪಡಿತರ ವ್ಯವಸ್ಥೆ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಜೀವನಾಧಾರವಾಗಿದ್ದು, ಅಕ್ಕಿ ಕಡಿತದಿಂದ ಅನೇಕ ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿವೆ. ದಿನನಿತ್ಯದ ಜೀವನ ನಿರ್ವಹಣೆಗೆ ಪಡಿತರವೇ ಪ್ರಮುಖ ಆಧಾರವಾಗಿರುವ ಸಂದರ್ಭದಲ್ಲಿ ಈ ರೀತಿಯ ಅಕ್ರಮಗಳು ಜನರ ಆಕ್ರೋಶಕ್ಕೆ ಕಾರಣವಾಗಿವೆ.
ಗ್ರಾಮಸ್ಥರು ನ್ಯಾಯಬೆಲೆ ಅಂಗಡಿಯಲ್ಲಿ ನಡೆಯುತ್ತಿರುವ ವಿತರಣಾ ಪ್ರಕ್ರಿಯೆಯನ್ನು ಸಮಗ್ರವಾಗಿ ತನಿಖೆ ನಡೆಸಬೇಕು. ಪಡಿತರ ದಾಸ್ತಾನು, ವಿತರಣಾ ದಾಖಲೆಗಳು ಹಾಗೂ ಫಲಾನುಭವಿಗಳ ಮಾಹಿತಿಯನ್ನು ಪರಿಶೀಲಿಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದ್ದಾರೆ. ಅಲ್ಲದೆ, ಕಡಿತಗೊಳಿಸಲಾದ ಅಕ್ಕಿಯನ್ನು ತಕ್ಷಣವೇ ಫಲಾನುಭವಿಗಳಿಗೆ ವಿತರಿಸುವಂತೆ ಮನವಿ ಮಾಡಿದ್ದಾರೆ.
ಒಂದು ವೇಳೆ ಈ ಪ್ರಕರಣದಲ್ಲಿ ಸೂಕ್ತ ಕ್ರಮ ಕೈಗೊಳ್ಳದಿದ್ದರೆ, ಗ್ರಾಮದ ನೂರಾರು ಪಡಿತರ ಚೀಟಿದಾರರು ಹಾಗೂ ಕುಟುಂಬ ಸದಸ್ಯರೊಂದಿಗೆ ಮುದ್ದೇಬಿಹಾಳ ತಹಶೀಲ್ದಾರ್ ಕಚೇರಿ ಎದುರು ಉಗ್ರ ಧರಣಿ ಹಾಗೂ ಸತ್ಯಾಗ್ರಹ ಹಮ್ಮಿಕೊಳ್ಳುವುದಾಗಿ ಗ್ರಾಮಸ್ಥರಾದ ಎಸ್.ಎಸ್. ಮೇಲಿಮನಿ, ರಂಗಪ್ಪ ವೈ. ಪೂಜಾರಿ ಸೇರಿದಂತೆ ಹಲವರು ಎಚ್ಚರಿಕೆ ನೀಡಿದ್ದಾರೆ.
ಗ್ರಾಮಸ್ಥರ ದೂರನ್ನು ಗಂಭೀರವಾಗಿ ಪರಿಗಣಿಸಿದ ತಹಶೀಲ್ದಾರ್ ಕೀರ್ತಿ ಚಾಲಕ್ ಅವರು, ಸ್ಥಳದಲ್ಲೇ ಆಹಾರ ಇಲಾಖೆಯ ಅಧಿಕಾರಿಗಳಿಗೆ ದೂರು ಹಸ್ತಾಂತರಿಸಿ, ಜಕ್ಕರಾಳ ಗ್ರಾಮದ ನ್ಯಾಯಬೆಲೆ ಅಂಗಡಿಗೆ ಖುದ್ದಾಗಿ ಭೇಟಿ ನೀಡಿ ಪರಿಶೀಲನೆ ನಡೆಸುವಂತೆ ಸೂಚಿಸಿದರು. ಪಡಿತರ ದಾಸ್ತಾನು, ವಿತರಣಾ ವಹಿ ಹಾಗೂ ಫಲಾನುಭವಿಗಳ ದಾಖಲೆಗಳನ್ನು ಪರಿಶೀಲಿಸಿ ವಾಸ್ತವಾಂಶದ ವರದಿಯನ್ನು ಶೀಘ್ರ ಸಲ್ಲಿಸಬೇಕು ಎಂದು ನಿರ್ದೇಶನ ನೀಡಿದರು.
ಈ ಬೆಳವಣಿಗೆ ಜಕ್ಕರಾಳ ಗ್ರಾಮದಲ್ಲಿ ಪಡಿತರ ವಿತರಣೆಯ ಪಾರದರ್ಶಕತೆ ಕುರಿತು ಪ್ರಶ್ನೆಗಳನ್ನು ಹುಟ್ಟುಹಾಕಿದ್ದು, ತನಿಖೆಯ ಬಳಿಕ ಸತ್ಯಾಸತ್ಯತೆ ಹೊರಬರಲಿದೆ. ಬಡ ಕುಟುಂಬಗಳ ಆಹಾರ ಭದ್ರತೆಗೆ ಸಂಬಂಧಿಸಿದ ಈ ವಿಷಯದಲ್ಲಿ ಜಿಲ್ಲಾಡಳಿತ ಯಾವ ಕ್ರಮ ಕೈಗೊಳ್ಳುತ್ತದೆ ಎಂಬುದರತ್ತ ಗ್ರಾಮಸ್ಥರು ಕಾತರದಿಂದ ಕಾಯುತ್ತಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / jyothi deshpande