
ನವದೆಹಲಿ, 11 ಜೂನ್ (ಹಿ.ಸ.) :
ಆ್ಯಂಕರ್ : ದೇಶವು ಇಂದು ಹಣದುಬ್ಬರ, ನಿರುದ್ಯೋಗ, ಪರೀಕ್ಷಾ ಹಗರಣಗಳು ಹಾಗೂ ಸಾಮಾಜಿಕ ಅಸಮಾನತೆಯಂತಹ ಗಂಭೀರ ಸವಾಲುಗಳನ್ನು ಎದುರಿಸುತ್ತಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪ್ರಕಟಿಸಿರುವ ಹೇಳಿಕೆಯಲ್ಲಿ ಅವರು, ನೀಟ್ ಪ್ರಶ್ನೆಪತ್ರಿಕೆ ಸೋರಿಕೆ, ವಿವಿಧ ನೇಮಕಾತಿ ಪರೀಕ್ಷೆಗಳಲ್ಲಿನ ಅಕ್ರಮಗಳು ಹಾಗೂ ಶಿಕ್ಷಣ ವ್ಯವಸ್ಥೆಯನ್ನು ಸುತ್ತುವರೆದಿರುವ ವಿವಾದಗಳು ಲಕ್ಷಾಂತರ ವಿದ್ಯಾರ್ಥಿಗಳು ಮತ್ತು ಅವರ ಕುಟುಂಬಗಳ ಆತ್ಮವಿಶ್ವಾಸವನ್ನು ಅಲುಗಾಡಿಸಿವೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
ಈ ಸಂದರ್ಭದಲ್ಲಿ ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಬಾಧಿತ ವಿದ್ಯಾರ್ಥಿಗಳು ಮತ್ತು ಯುವಕರನ್ನು ವೈಯಕ್ತಿಕವಾಗಿ ಭೇಟಿ ಮಾಡಿ, ಅವರ ಸಮಸ್ಯೆಗಳು ಹಾಗೂ ಬೇಡಿಕೆಗಳನ್ನು ರಾಷ್ಟ್ರದ ಮುಂದೆ ಬಲವಾಗಿ ಮಂಡಿಸಿದ್ದಾರೆ ಎಂದು ಖರ್ಗೆ ಹೇಳಿದ್ದಾರೆ.
ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯ ಕುರಿತು ಕಳವಳ ವ್ಯಕ್ತಪಡಿಸಿದ ಅವರು, ದಶಕಗಳಿಂದ ನಿರ್ಮಾಣಗೊಂಡಿರುವ ಸಂಸ್ಥೆಗಳು ಮತ್ತು ವ್ಯವಸ್ಥೆಗಳನ್ನು ದುರ್ಬಲಗೊಳಿಸುವ ಪ್ರಯತ್ನಗಳು ನಡೆಯುತ್ತಿರುವುದು ದುರದೃಷ್ಟಕರ ಬೆಳವಣಿಗೆಯಾಗಿದೆ ಎಂದು ಆರೋಪಿಸಿದ್ದಾರೆ.
ರಾಜಕೀಯ ಹೋರಾಟವು ಕೇವಲ ಅಧಿಕಾರಕ್ಕಾಗಿ ಮಾತ್ರವಲ್ಲ; ಭಾರತದ ಸಂವಿಧಾನ, ಪ್ರಜಾಪ್ರಭುತ್ವ ಮೌಲ್ಯಗಳು ಹಾಗೂ ಸಾಮಾಜಿಕ ನ್ಯಾಯವನ್ನು ರಕ್ಷಿಸುವ ಜವಾಬ್ದಾರಿಯೂ ನಮ್ಮ ಮೇಲಿದೆ ಎಂದು ಖರ್ಗೆ ಹೇಳಿದ್ದಾರೆ.
ದೇಶದ ಯುವಕರು, ವಿದ್ಯಾರ್ಥಿಗಳು ಹಾಗೂ ಸಾಮಾನ್ಯ ಜನರ ಹಕ್ಕುಗಳನ್ನು ಕಾಪಾಡುವ ಹೋರಾಟವನ್ನು ಕಾಂಗ್ರೆಸ್ ಮುಂದುವರಿಸಲಿದೆ ಎಂದು ಅವರು ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh.M.B.