
ವಿಜಯಪುರ, 11 ಜೂನ್ (ಹಿ.ಸ.) :
ಆಂಕರ್ : ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಸಂದರ್ಭದಲ್ಲಿ ದಲಿತ ಸಮುದಾಯದ ಇಬ್ಬರು ಹಿರಿಯ ನಾಯಕರಿಗೆ ಸಚಿವ ಸ್ಥಾನ ನೀಡಬೇಕು ಎಂದು ದಲಿತ ಸಮುದಾಯದ ಮುಖಂಡ ಚಂದ್ರಶೇಖರ ಕೊಡಬಾಗಿ ಒತ್ತಾಯಿಸಿದ್ದಾರೆ.
ವಿಜಯಪುರ ನಗರದ ಬೌದ್ಧ ವಿಹಾರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಸುಮಾರು 80 ಲಕ್ಷಕ್ಕೂ ಅಧಿಕ ಎಸ್ಸಿ ಸಮುದಾಯದ ಜನಸಂಖ್ಯೆ ಇದೆ. ಈ ಹಿನ್ನೆಲೆಯಲ್ಲಿ ಸಮುದಾಯಕ್ಕೆ ಸಮರ್ಪಕ ರಾಜಕೀಯ ಪ್ರಾತಿನಿಧ್ಯ ನೀಡುವ ಅಗತ್ಯವಿದೆ ಎಂದು ಹೇಳಿದರು.
ಚಲವಾದಿ ಸಮುದಾಯದ ಹಿರಿಯ ನಾಯಕರಾದ ಎಚ್.ಸಿ. ಮಹಾದೇವಪ್ಪ ಹಾಗೂ ಪ್ರಸಾದ ಅಬ್ಬಯ್ಯ ಅವರಿಗೆ ಸಚಿವ ಸಂಪುಟದಲ್ಲಿ ಅವಕಾಶ ನೀಡಬೇಕು ಎಂದು ಆಗ್ರಹಿಸಿದ ಅವರು, ಇಬ್ಬರೂ ನಾಯಕರು ರಾಜ್ಯದ ಶೋಷಿತ ಹಾಗೂ ಹಿಂದುಳಿದ ವರ್ಗಗಳ ಪರವಾಗಿ ನಿರಂತರವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ತಿಳಿಸಿದರು.
“ಎಚ್.ಸಿ. ಮಹಾದೇವಪ್ಪ ಅವರು ತಮ್ಮದೇ ಆದ ಕಾರ್ಯಶೈಲಿಯಲ್ಲಿ ಹಲವು ಅಭಿವೃದ್ಧಿ ಕಾರ್ಯಗಳು ಹಾಗೂ ವಿನೂತನ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದಾರೆ. ಶೋಷಿತ ವರ್ಗಗಳ ಧ್ವನಿಯಾಗಿ ಅವರು ಕೆಲಸ ಮಾಡಿದ್ದಾರೆ. ಮೊದಲ ಹಂತದ ಸಚಿವ ಸಂಪುಟದಲ್ಲಿಯೇ ಅವರಿಗೆ ಅವಕಾಶ ಸಿಗಬೇಕಿತ್ತು. ಈಗ ನಡೆಯಲಿರುವ ಎರಡನೇ ಹಂತದ ಸಂಪುಟ ವಿಸ್ತರಣೆಯಲ್ಲಿ ಮಹಾದೇವಪ್ಪ ಹಾಗೂ ಪ್ರಸಾದ ಅಬ್ಬಯ್ಯ ಅವರಿಗೆ ಸಚಿವ ಸ್ಥಾನ ನೀಡಬೇಕು” ಎಂದು ಚಂದ್ರಶೇಖರ ಕೊಡಬಾಗಿ ಹೇಳಿದರು.
ಈ ಕುರಿತು ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರಾದ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಹಾಗೂ ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವು ಮುಖಂಡರಿಗೆ ಮನವಿ ಮಾಡಲಾಗಿದೆ ಎಂದು ಅವರು ತಿಳಿಸಿದರು.
ಇದೇ ವೇಳೆ ಚಲವಾದಿ ಸಮುದಾಯಕ್ಕೆ ವಿಧಾನ ಪರಿಷತ್ ಸದಸ್ಯ ಸ್ಥಾನದಲ್ಲಿಯೂ ಅವಕಾಶ ನೀಡಬೇಕು ಎಂದು ಒತ್ತಾಯಿಸಿದ ಅವರು, ಸಮುದಾಯದ ಧ್ವನಿಗೆ ಸರ್ಕಾರ ಮತ್ತು ಪಕ್ಷದ ನಾಯಕರು ಸ್ಪಂದಿಸಬೇಕು ಎಂದು ಮನವಿ ಮಾಡಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮುಖಂಡರು, ಸಾಮಾಜಿಕ ನ್ಯಾಯದ ದೃಷ್ಟಿಯಿಂದ ದಲಿತ ಸಮುದಾಯಕ್ಕೆ ಹೆಚ್ಚಿನ ರಾಜಕೀಯ ಪ್ರಾತಿನಿಧ್ಯ ದೊರೆಯಬೇಕಿದ್ದು, ಸಚಿವ ಸಂಪುಟದಲ್ಲಿ ಸೂಕ್ತ ಸ್ಥಾನಮಾನ ನೀಡುವುದು ಅಗತ್ಯವಾಗಿದೆ ಎಂದು ಹೇಳಿದರು.
ಹಿಂದೂಸ್ತಾನ್ ಸಮಾಚಾರ್ / jyothi deshpande