
ಕೊಪ್ಪಳ, 11 ಜೂನ್ (ಹಿ.ಸ.) :
ಆ್ಯಂಕರ್ : ಜೂನ್ 12 ರಂದು ವಿಶ್ವ ಬಾಲ ಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಪದ್ಧತಿ ವಿರೋಧಿ ದಿನವನ್ನು ಜಿಲ್ಲಾ ಮಟ್ಟದಿಂದ ಪ್ರತಿಯೊಂದು ಗ್ರಾಮ ಮಟ್ಟದಲ್ಲಿ ಹಮ್ಮಿಕೊಳ್ಳುವ ಮೂಲಕ ಕೊಪ್ಪಳ ಜಿಲ್ಲೆಯಲ್ಲಿ ಬಾಲ ಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಪದ್ಧತಿ ನಿರ್ಮೂಲನೆಯ ಆಂದೋಲನದಲ್ಲಿ ಎಲ್ಲರೂ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ಹಾಗೂ ಕೊಪ್ಪಳ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಅಧ್ಯಕ್ಷರಾದ ಡಾ. ಸುರೇಶ ಬಿ. ಇಟ್ನಾಳ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಹಾಗೂ ವಿವಿಧ ಇಲಾಖೆಗಳ ಸಹಭಾಗಿತ್ವದಲ್ಲಿ ಜಾಗೃತಿ ಜಾಥಾ ಕಾನೂನು ಅರಿವು ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಜಿಲ್ಲಾ ಮಟ್ಟದಲ್ಲಿ ಬಾಲ ಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಪದ್ಧತಿಯ ವಿರೋಧಿ ದಿನಾಚರಣೆಯನ್ನು ಆಚರಿಸಲಾಗುತ್ತಿದೆ.
ತಾಲ್ಲೂಕು ಮಟ್ಟದ ಕಾರ್ಯಕ್ರಮಗಳು : ಜಿಲ್ಲೆಯ ಕೊಪ್ಪಳ, ಗಂಗಾವತಿ, ಯಲಬುರ್ಗಾ, ಕುಷ್ಟಗಿ, ಕುಕನೂರು, ಕನಕಗಿರಿ ಹಾಗೂ ಕಾರಟಗಿ ತಾಲ್ಲೂಕು ಕೇಂದ್ರಗಳಲ್ಲಿ ತಾಲ್ಲೂಕು ಕಾನೂನು ಸೇವಾ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನೆ, ಆಯಾ ತಹಶೀಲ್ದಾರರು, ತಾಲ್ಲೂಕು ಪಂಚಾಯತ್, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ, ಶಿಕ್ಷಣ, ವಿವಿಧ ಇಲಾಖೆ ಮತ್ತು ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ತಾಲ್ಲೂಕು ಮಟ್ಟದಲ್ಲಿ ಜಾಗೃತಿ ಜಾಥಾ ಅರಿವು ಕಾರ್ಯಕ್ರಮಗಳನ್ನು ಆಯೋಜಿಸಬೇಕು.
ಗ್ರಾಮ ಪಂಚಾಯತ್, ವಾರ್ಡ್ ಮಟ್ಟದ ಕಾರ್ಯಕ್ರಮಗಳು : ಕೊಪ್ಪಳ ಜಿಲ್ಲೆಯ ಪ್ರತಿಯೊಂದು ಗ್ರಾಮ ಪಂಚಾಯತ್ ಅಧ್ಯಕ್ಷರು ಮತ್ತು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ನೇತೃತ್ವದಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕಾಗಿದ್ದು, ಎಲ್ಲಾ ಶಾಲೆಯ ಮುಖ್ಯೋಪಾಧ್ಯಾಯರು ಎಲ್ಲಾ ಮಕ್ಕಳಿಗೂ ಮತ್ತು ಅವರ ಪೋಷಕರಿಗೆ ಶಾಲೆಯಲ್ಲಿ ಸಮಾವೇಶ ಸೇರಿಸಿ ಪ್ರತಿಜ್ಞಾ ವಿಧಿ ಬೋಧಿಸುವುದು. ಬಾಲ ಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಪದ್ಧತಿಯಿಂದಾಗುವ ದುಷ್ಪರಿಣಾಮದ ಬಗ್ಗೆ ಮಕ್ಕಳಲ್ಲಿ ಮತ್ತು ಪೋಷಕರಲ್ಲಿ ಅರಿವು ಮೂಡಿಸುವ ನಿಟ್ಟಿನಲ್ಲಿ ಮಕ್ಕಳಿಂದಲೇ ಕಿರುನಾಟಕ, ಜಾಗೃತಿ ಗೀತೆಗಳನ್ನು, ಮುಂತಾದ ಕಾರ್ಯಕ್ರಮಗಳನ್ನು ಆಯೋಜಿಸಬೇಕು.
ಪ್ರತಿ ಪಂಚಾಯತ್ ಮತ್ತು ವಾರ್ಡ್ಗಳಲ್ಲಿ ‘ಮಕ್ಕಳ ರಕ್ಷಣಾ ಸಮಿತಿ’ ಸಭೆಯನ್ನು ಆಯೋಜಿಸಿ, ಸಭೆಯಲ್ಲಿ ಮಕ್ಕಳ ಗ್ರಾಮ ಸಭೆಯಲ್ಲಿ ಮಕ್ಕಳು ಮುಂದಿಟ್ಟ ಸಮಸ್ಯೆಗಳ ಬಗ್ಗೆ ಚರ್ಚಿಸಿ ಸಮಸ್ಯೆಗಳನ್ನು ಪರಿಹರಿಸುವುದು. ಎಲ್ಲಾ ಶಾಲೆಗಳಲ್ಲಿ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಭೆಯನ್ನು ಆಯೋಜಿಸಿ 2025-2026 ರಲ್ಲಿ ನಡೆದ ಶಾಲೆಯಿಂದ ಹೊರಗುಳಿದ ಮಕ್ಕಳ ಸಮೀಕ್ಷೆಯಲ್ಲಿ ಶಾಲೆಯಿಂದ ಹೊರಗುಳಿದ ಎಲ್ಲಾ ಮಕ್ಕಳನ್ನು ಮರಳಿ ಶಾಲೆಗೆ ತರಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಿ, ಸೂಕ್ತ ನಿರ್ಧಾರಗಳನ್ನು ತೆಗೆದುಕೊಳ್ಳುವುದು ಅತ್ಯವಶ್ಯಕವಾಗಿದೆ.
ಇದಲ್ಲದೇ ಗ್ರಾಮ ಪಂಚಾಯತ್ ಸಾಮಾನ್ಯ ಸಭೆಯನ್ನು ಆಯೋಜಿಸಿ ಮಕ್ಕಳ ಹಕ್ಕುಗಳ ರಕ್ಷಣೆಯ ಬಗ್ಗೆ ಚರ್ಚಿಸುವುದು. ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಬರುವ ಎನ್.ಆರ್.ಇ.ಜಿ ಕುಟುಂಬ ಮತ್ತು ಸ್ವ-ಸಹಾಯ ಸಂಘಗಳನ್ನು ಬಾಲ ಕಾರ್ಮಿಕ ಮುಕ್ತ ಕುಟುಂಬಗಳಾಗಿ ಘೋಷಿಸಲು ಕ್ರಮ ಕೈಗೊಳ್ಳಲು ತಿಳಿಸಬೇಕು. ಎಲ್ಲಾ ಕಾರ್ಮಿಕ ಸಂಘಟನೆಗಳು, ಮಾಲೀಕರ ಸಂಘಟನೆಗಳು ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನದಂದು ವಿವಿಧ ಅರಿವು ಕಾರ್ಯಕ್ರಮಗಳನ್ನು ಆಯೋಜಿಸುವುದು ಮತ್ತು ಎಲ್ಲಾ ಸರಕಾರಿ ಕಛೇರಿಗಳಲ್ಲಿ ಜೂ. 12 ರಂದು ಪ್ರತಿಜ್ಞಾ ವಿಧಿ ಸ್ವೀಕಾರ ಕಾರ್ಯಕ್ರಮವನ್ನು ಆಯೋಜಿಸಿ, ವರದಿಯನ್ನು ಜಿಲ್ಲಾಧಿಕಾರಿ ಕಚೇರಿಗೆ ಸಲ್ಲಿಸಬೇಕು ಎಂದು ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್