
ಬಾಗಲಕೋಟೆ, 11 ಜೂನ್ (ಹಿ.ಸ.) :
ಆಂಕರ್ : ಬಾಗಲಕೋಟೆ ಜಿಲ್ಲೆಯ ಮುಧೋಳ ನಗರದ ಅಗ್ನಿಶಾಮಕ ಠಾಣೆಯಲ್ಲಿ ಸಾರ್ವಜನಿಕರ ಸುರಕ್ಷತೆ ಹಾಗೂ ತುರ್ತು ಸಂದರ್ಭಗಳಲ್ಲಿ ತ್ವರಿತ ಸೇವೆ ಒದಗಿಸುವ ಉದ್ದೇಶದಿಂದ ಮಂಜೂರಾದ ನೂತನ ಅಗ್ನಿಶಾಮಕ ವಾಹನವನ್ನು ಇಂದು ಶಾಸಕ ಆರ್ ಬಿ ತಿಮ್ಮಾಪುರ ಚಾಲನೆ ನೀಡುವ ಮೂಲಕ ಉದ್ಘಾಟಿಸಿದರು.
ಕ್ಷೇತ್ರದ ಜನರ ಜೀವ, ಆಸ್ತಿ-ಪಾಸ್ತಿ ರಕ್ಷಣೆ ಹಾಗೂ ಬೆಂಕಿ ಅವಘಡಗಳು ಸೇರಿದಂತೆ ವಿವಿಧ ತುರ್ತು ಪರಿಸ್ಥಿತಿಗಳಿಗೆ ತಕ್ಷಣ ಸ್ಪಂದಿಸಲು ಈ ಅತ್ಯಾಧುನಿಕ ಅಗ್ನಿಶಾಮಕ ವಾಹನವು ಸಹಕಾರಿಯಾಗಲಿದೆ ಎಂದು ತಿಳಿಸಲಾಯಿತು.
ಕಾರ್ಯಕ್ರಮದಲ್ಲಿ ಮಾತನಾಡಿದ avru, ಸಾರ್ವಜನಿಕರ ಹಿತ ಮತ್ತು ಸುರಕ್ಷತೆ ಸರ್ಕಾರದ ಪ್ರಮುಖ ಆದ್ಯತೆಯಾಗಿದ್ದು, ಅಗ್ನಿಶಾಮಕ ಇಲಾಖೆಗೆ ಅಗತ್ಯ ಸೌಲಭ್ಯಗಳನ್ನು ಒದಗಿಸುವ ಮೂಲಕ ತುರ್ತು ಸೇವೆಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಬಲಪಡಿಸಲಾಗುತ್ತಿದೆ ಎಂದು ಹೇಳಿದರು.
ಹೊಸ ವಾಹನ ಸೇರ್ಪಡೆಯಿಂದ ಮುಧೋಳ ನಗರ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಜನರಿಗೆ ಅಗ್ನಿ ಅವಘಡಗಳ ಸಂದರ್ಭದಲ್ಲಿ ವೇಗವಾಗಿ ನೆರವು ದೊರೆಯಲಿದೆ. ಆಧುನಿಕ ತಂತ್ರಜ್ಞಾನ ಹೊಂದಿರುವ ಈ ವಾಹನವು ರಕ್ಷಣಾ ಕಾರ್ಯಾಚರಣೆಗಳನ್ನು ಸುಗಮಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸಲಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಮುಧೋಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸದುಗೌಡ ಪಾಟೀಲ, ಲೋಕಾಪೂರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕಿವಡಿ, ಪ್ರಮುಖ ಮುಖಂಡರಾದ ಕಲ್ಮೇಶ ಪಂಚಗಾಂವಿ, ರಾಘು ಮೊಕಾಶಿ, ಕುಮಾರ ಮಿರ್ಜಿ, ಹೊಳಬಸು ತೇಲಿ ಸೇರಿದಂತೆ ಪಕ್ಷದ ಮುಖಂಡರು, ಅಗ್ನಿಶಾಮಕ ಸಿಬ್ಬಂದಿ ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ನೂತನ ಅಗ್ನಿಶಾಮಕ ವಾಹನದ ಸೇವೆಯಿಂದ ಮುಧೋಳ ಕ್ಷೇತ್ರದಲ್ಲಿ ತುರ್ತು ಪರಿಸ್ಥಿತಿಗಳ ನಿರ್ವಹಣೆಗೆ ಮತ್ತಷ್ಟು ಶಕ್ತಿ ದೊರೆತಂತಾಗಿದೆ. ಸಾರ್ವಜನಿಕರ ಸುರಕ್ಷತೆ ಮತ್ತು ಹಿತರಕ್ಷಣೆಗೆ ಅಗತ್ಯ ಕ್ರಮಗಳನ್ನು ಮುಂದುವರಿಸಲಾಗುವುದು ಎಂದು ಮುಖಂಡರು ಹೇಳಿದರು.
ಹಿಂದೂಸ್ತಾನ್ ಸಮಾಚಾರ್ / jyothi deshpande