
ಬಾಗಲಕೋಟೆ, 11 ಜೂನ್ (ಹಿ.ಸ.) :
ಆಂಕರ್ : ಡಿ.ಕೆ. ಶಿವಕುಮಾರ್ ನೇತೃತ್ವದ ರಾಜ್ಯ ಸಚಿವ ಸಂಪುಟದಲ್ಲಿ ಜಮೀರ್ ಅಹಮದ್ ಖಾನ್ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಆಗ್ರಹಿಸಿ ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರ ಪಟ್ಟಣದಲ್ಲಿ ಮುಸ್ಲಿಂ ಸಮುದಾಯದ ಮುಖಂಡರು ಹಾಗೂ ಬೆಂಬಲಿಗರು ಬೃಹತ್ ಪ್ರತಿಭಟನೆ ನಡೆಸಿದರು.
ಪಟ್ಟಣದ ಪ್ರಮುಖ ಬೀದಿಗಳಲ್ಲಿ ಜಮಾಯಿಸಿದ ಪ್ರತಿಭಟನಾಕಾರರು, ತಮ್ಮ ಬೇಡಿಕೆಯನ್ನು ಈಡೇರಿಸುವಂತೆ ಘೋಷಣೆಗಳನ್ನು ಕೂಗಿ ಸರ್ಕಾರ ಹಾಗೂ ಕಾಂಗ್ರೆಸ್ ಪಕ್ಷದ ಹೈಕಮಾಂಡ್ಗೆ ಮನವಿ ಸಲ್ಲಿಸಿದರು. ಹಲವು ವರ್ಷಗಳಿಂದ ಪಕ್ಷ ಸಂಘಟನೆ ಹಾಗೂ ಜನಪರ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಜಮೀರ್ ಅಹ್ಮದ್ ಖಾನ್ ಅವರಿಗೆ ಸಚಿವ ಸ್ಥಾನ ನೀಡುವುದು ಸೂಕ್ತ ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಮಾತನಾಡಿದ ಮುಖಂಡರು, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಬಲವರ್ಧನೆಗೆ ಜಮೀರ್ ಅಹ್ಮದ್ ಖಾನ್ ಅವರ ಕೊಡುಗೆ ಮಹತ್ವದ್ದಾಗಿದೆ. ವಿವಿಧ ಸಮುದಾಯಗಳೊಂದಿಗೆ ಉತ್ತಮ ಬಾಂಧವ್ಯ ಹೊಂದಿರುವ ಅವರಿಗೆ ಸಚಿವ ಸ್ಥಾನ ನೀಡುವುದರಿಂದ ಸರ್ಕಾರದ ಆಡಳಿತಕ್ಕೆ ಮತ್ತಷ್ಟು ಬಲ ಬರಲಿದೆ ಎಂದು ಅಭಿಪ್ರಾಯಪಟ್ಟರು.
ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಪಕ್ಷದ ವರಿಷ್ಠರು ಜಮೀರ್ ಅಹ್ಮದ್ ಖಾನ್ ಅವರ ಸೇವೆ ಹಾಗೂ ಅನುಭವವನ್ನು ಪರಿಗಣಿಸಬೇಕು. ಅವರಿಗೆ ಸೂಕ್ತ ಸ್ಥಾನಮಾನ ನೀಡುವ ಮೂಲಕ ಅಲ್ಪಸಂಖ್ಯಾತ ಸಮುದಾಯಕ್ಕೂ ನ್ಯಾಯ ಒದಗಿಸಬೇಕು ಎಂದು ಮುಖಂಡರು ಆಗ್ರಹಿಸಿದರು.
ಬೃಹತ್ ಪ್ರತಿಭಟನೆಯ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಕೆಲಕಾಲ ರಾಜಕೀಯ ಚಟುವಟಿಕೆಗಳು ಚುರುಕುಗೊಂಡಿದ್ದವು. ಪ್ರತಿಭಟನೆಯಲ್ಲಿ ಮುಸ್ಲಿಂ ಸಮಾಜದ ಮುಖಂಡರು, ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಬೆಂಬಲಿಗರು ಭಾಗವಹಿಸಿದ್ದರು.
ಪ್ರತಿಭಟನಾಕಾರರು ತಮ್ಮ ಬೇಡಿಕೆಯನ್ನು ಒಳಗೊಂಡ ಮನವಿಯನ್ನು ಸಂಬಂಧಿಸಿದ ಅಧಿಕಾರಿಗಳ ಮೂಲಕ ಸರ್ಕಾರಕ್ಕೆ ಸಲ್ಲಿಸಿದರು. ಸಚಿವ ಸ್ಥಾನ ನೀಡುವ ಕುರಿತು ಪಕ್ಷದ ನಾಯಕತ್ವ ಶೀಘ್ರ ನಿರ್ಧಾರ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.
ಹಿಂದೂಸ್ತಾನ್ ಸಮಾಚಾರ್ / jyothi deshpande