10 ವರ್ಷಗಳ ಅಭಿವೃದ್ಧಿ ಪರ್ವ ; ವಿಜಯಪುರ ಲೋಕಸಭಾ ಕ್ಷೇತ್ರದಲ್ಲಿ ₹3516.67 ಕೋಟಿ ಕಾಮಗಾರಿ ಪೂರ್ಣ
ವಿಜಯಪುರ, 12 ಜೂನ್ (ಹಿ.ಸ.) : ಆಂಕರ್ : ಕಳೆದ ಹತ್ತು ವರ್ಷಗಳಲ್ಲಿ ವಿಜಯಪುರ ಲೋಕ ಸಭಾ ಕ್ಷೇತ್ರದಲ್ಲಿ ₹3516.67 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದ್ದು, ರಸ್ತೆ, ರೈಲ್ವೆ ಮೇಲ್ಸೇತುವೆ ಸೇರಿದಂತೆ ಮೂಲಸೌಕರ್ಯ ಕ್ಷೇತ್ರದಲ್ಲಿ ಮಹತ್ವದ ಪ್ರಗತಿ ಸಾಧಿಸಲಾಗಿದೆ ಎಂದು ಸಂಸದ
Mp


ವಿಜಯಪುರ, 12 ಜೂನ್ (ಹಿ.ಸ.) :

ಆಂಕರ್ : ಕಳೆದ ಹತ್ತು ವರ್ಷಗಳಲ್ಲಿ ವಿಜಯಪುರ ಲೋಕ ಸಭಾ ಕ್ಷೇತ್ರದಲ್ಲಿ ₹3516.67 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದ್ದು, ರಸ್ತೆ, ರೈಲ್ವೆ ಮೇಲ್ಸೇತುವೆ ಸೇರಿದಂತೆ ಮೂಲಸೌಕರ್ಯ ಕ್ಷೇತ್ರದಲ್ಲಿ ಮಹತ್ವದ ಪ್ರಗತಿ ಸಾಧಿಸಲಾಗಿದೆ ಎಂದು ಸಂಸದ ರಮೇಶ ಜಿಗಜಿಣಗಿ ತಿಳಿಸಿದ್ದಾರೆ.

ಸಂಸದರ ಸಾಧನೆ ಏನು ಎಂದು ಪ್ರಶ್ನಿಸುವವರಿಗೆ ಅಭಿವೃದ್ಧಿ ಕಾರ್ಯಗಳೇ ಉತ್ತರವಾಗಿವೆ ಎಂದು ಹೇಳಿರುವ ಅವರು, ಕ್ಷೇತ್ರದಲ್ಲಿ ಕೈಗೊಂಡಿರುವ ಪ್ರಮುಖ ಯೋಜನೆಗಳ ವಿವರವನ್ನು ಪ್ರಕಟಣೆ ಮೂಲಕ ನೀಡಿದ್ದಾರೆ.

ವಿಜಯಪುರ ರಾಷ್ಟ್ರೀಯ ಹೆದ್ದಾರಿ ವಿಭಾಗದ ವ್ಯಾಪ್ತಿಯಲ್ಲಿ ನಾಲ್ಕು ಪ್ರಮುಖ ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸುವ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಒಟ್ಟು 208.04 ಕಿ.ಮೀ ಉದ್ದದ ರಸ್ತೆ ಅಭಿವೃದ್ಧಿಗೆ ₹1668.88 ಕೋಟಿ ಅನುದಾನ ಮೀಸಲಿಡಲಾಗಿದ್ದು, ಇದರಲ್ಲಿ ಎರಡು ರೈಲ್ವೆ ಮೇಲ್ಸೇತುವೆ ಕಾಮಗಾರಿಗಳೂ ಸೇರಿವೆ ಎಂದು ತಿಳಿಸಿದ್ದಾರೆ.

ಕೇಂದ್ರ ರಸ್ತೆ ನಿಧಿ ಯೋಜನೆಯಡಿ 2016-17ನೇ ಸಾಲಿನಲ್ಲಿ 14 ಕಾಮಗಾರಿಗಳಿಗೆ ಅನುಮೋದನೆ ದೊರೆತಿದ್ದು, ಸುಮಾರು 60 ಕಿ.ಮೀ ಉದ್ದದ ರಸ್ತೆ ಅಭಿವೃದ್ಧಿ ಹಾಗೂ ಎರಡು ಸೇತುವೆ ನಿರ್ಮಾಣ ಸೇರಿದಂತೆ ₹72 ಕೋಟಿ ವೆಚ್ಚದ ಕಾಮಗಾರಿಗಳು ಪೂರ್ಣಗೊಂಡಿವೆ. ಅದೇ ರೀತಿ 2023-24ನೇ ಸಾಲಿನಲ್ಲಿ ಕೇಂದ್ರ ರಸ್ತೆ ಯೋಜನೆಯಡಿ 10 ಕಾಮಗಾರಿಗಳಿಗೆ ಮಂಜೂರಾತಿ ದೊರೆತಿದ್ದು, 81 ಕಿ.ಮೀ ಉದ್ದದ ರಸ್ತೆ ಅಭಿವೃದ್ಧಿ ಕಾಮಗಾರಿಗಳು ₹48 ಕೋಟಿ ವೆಚ್ಚದಲ್ಲಿ ಪೂರ್ಣಗೊಂಡಿವೆ. 2025-26ನೇ ಸಾಲಿನಲ್ಲಿ 9 ಕಾಮಗಾರಿಗಳಿಗೆ ಪ್ರಸ್ತಾವನೆ ಸಲ್ಲಿಸಿ ಮಂಜೂರಾತಿ ಪಡೆದುಕೊಳ್ಳಲಾಗಿದ್ದು, 80.76 ಕಿ.ಮೀ ಉದ್ದದ ರಸ್ತೆ ಅಭಿವೃದ್ಧಿಗೆ ₹54 ಕೋಟಿ ಅನುದಾನ ನಿಗದಿಯಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ ವಿಜಯಪುರ-ಸೋಲಾಪುರ ಹಾಗೂ ಮೋರಟಗಿ-ಆಲಮಟ್ಟಿ ಮಾರ್ಗಗಳ ಅಭಿವೃದ್ಧಿಗೆ ಒಟ್ಟು 200 ಕಿ.ಮೀ ಉದ್ದದ ಕಾಮಗಾರಿಗಳನ್ನು ₹1700 ಕೋಟಿ ವೆಚ್ಚದಲ್ಲಿ ಕೈಗೊಂಡು ಪೂರ್ಣಗೊಳಿಸಲಾಗಿದೆ ಎಂದು ಹೇಳಿದ್ದಾರೆ. ಇದಲ್ಲದೆ ವಿಜಯಪುರ-ಹುಬ್ಬಳ್ಳಿ ಹಾಗೂ ವಿಜಯಪುರ-ಕಲಬುರಗಿ ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ವಿಸ್ತೃತ ಯೋಜನಾ ವರದಿ (DPR) ತಯಾರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯಡಿ 451.45 ಕಿ.ಮೀ ಉದ್ದದ ರಸ್ತೆ ಕಾಮಗಾರಿಗಳಿಗೆ ₹27.79 ಕೋಟಿ ಅನುದಾನ ನೀಡಲಾಗಿದೆ. ಒಟ್ಟಾರೆ ವಿಜಯಪುರ ಜಿಲ್ಲೆಯಲ್ಲಿ 1000.69 ಕಿ.ಮೀ ರಸ್ತೆ ಅಭಿವೃದ್ಧಿ ಹಾಗೂ ಎರಡು ರೈಲ್ವೆ ಮೇಲ್ಸೇತುವೆ ಕಾಮಗಾರಿಗಳನ್ನು ಒಳಗೊಂಡಂತೆ ₹3516.67 ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯಗಳು ನಡೆದಿವೆ ಎಂದು ಸಂಸದರು ವಿವರಿಸಿದ್ದಾರೆ.

ಕ್ಷೇತ್ರದ ಅಭಿವೃದ್ಧಿಯ ಕುರಿತು ಟೀಕೆ ಮಾಡುವವರು ಈ ಕಾಮಗಾರಿಗಳ ಪ್ರಗತಿಯನ್ನು ಗಮನಿಸಬೇಕು. ಜನರ ಅನುಕೂಲಕ್ಕಾಗಿ ಹಲವು ಬೃಹತ್ ಯೋಜನೆಗಳನ್ನು ಜಾರಿಗೆ ತರಲಾಗಿದ್ದು, ಅಭಿವೃದ್ಧಿಯೇ ತಮ್ಮ ಕಾರ್ಯಕ್ಕೆ ಸಾಕ್ಷಿಯಾಗಿದೆ ಎಂದು ರಮೇಶ ಜಿಗಜಿಣಗಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande