
ನವದೆಹಲಿ, 12 ಜೂನ್ (ಹಿ.ಸ.) :
ಆ್ಯಂಕರ್ : ಕರ್ನಾಟಕದ ಮಹತ್ವಾಕಾಂಕ್ಷಿ ನೀರಾವರಿ ಮತ್ತು ಕುಡಿಯುವ ನೀರಿನ ಯೋಜನೆಗಳಾದ ಮೇಕೆದಾಟು, ಕೃಷ್ಣಾ ಮೇಲ್ದಂಡೆ, ಭದ್ರಾ ಮೇಲ್ದಂಡೆ ಹಾಗೂ ಮಹದಾಯಿ ಯೋಜನೆಗಳಿಗೆ ಅಗತ್ಯ ಅನುಮತಿ ಮತ್ತು ಕೇಂದ್ರದ ಹಣಕಾಸು ನೆರವು ನೀಡುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.
ರಾಜ್ಯದ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಆದ್ಯತೆ ನೀಡಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗುರುವಾರ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ ವಿವಿಧ ಬೇಡಿಕೆಗಳ ಕುರಿತು ಮನವಿ ಸಲ್ಲಿಸಿದ್ದರು. ಇದರ ಮುಂದುವರಿದ ಭಾಗವಾಗಿ ಶುಕ್ರವಾರ ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿ ಮಾಡಿ ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ಸಹಕಾರ ಕೋರಿದರು.
ಮೇಕೆದಾಟು ಯೋಜನೆಗೆ ತ್ವರಿತ ಅನುಮತಿ
ಮೇಕೆದಾಟು ಯೋಜನೆ ಕುರಿತು ಸುಪ್ರೀಂ ಕೋರ್ಟ್ 2025ರ ನವೆಂಬರ್ 13ರಂದು ತಮಿಳುನಾಡು ಸೇರಿದಂತೆ ವಿವಿಧ ಅರ್ಜಿಗಳನ್ನು ವಜಾಗೊಳಿಸಿದ್ದು, ಯೋಜನೆಗೆ ಅನುಮತಿ ನೀಡುವ ಕುರಿತು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಹಾಗೂ ಕೇಂದ್ರ ಜಲ ಆಯೋಗ ಸೂಕ್ತ ನಿರ್ಧಾರ ಕೈಗೊಳ್ಳಬೇಕು ಎಂದು ಅಭಿಪ್ರಾಯಪಟ್ಟಿದೆ ಎಂದು ಮುಖ್ಯಮಂತ್ರಿ ವಿವರಿಸಿದರು.
ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಈಗಾಗಲೇ ಯೋಜನೆಯ ಮೌಲ್ಯಮಾಪನಕ್ಕಾಗಿ ಕೇಂದ್ರ ಜಲ ಆಯೋಗಕ್ಕೆ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ, ಮೇಕೆದಾಟು ಯೋಜನೆಗೆ ಶೀಘ್ರ ಅನುಮೋದನೆ ದೊರೆಯುವಂತೆ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.
ಕೃಷ್ಣಾ ಮೇಲ್ದಂಡೆ ಯೋಜನೆಗೆ ಕೇಂದ್ರದ ಬೆಂಬಲ ಅಗತ್ಯ
ಕೃಷ್ಣಾ ನದಿ ನೀರು ಹಂಚಿಕೆಗೆ ಸಂಬಂಧಿಸಿದ ಕೃಷ್ಣಾ ಜಲ ವಿವಾದ ನ್ಯಾಯಮಂಡಳಿ–2ರ ತೀರ್ಪು ಪ್ರಕಟವಾಗಿ ಹತ್ತು ವರ್ಷಗಳಿಗಿಂತ ಹೆಚ್ಚು ಕಾಲ ಕಳೆದಿದ್ದರೂ, ಕೇಂದ್ರ ಸರ್ಕಾರ ಇದುವರೆಗೆ ಅದರ ಗೆಜೆಟ್ ಅಧಿಸೂಚನೆಯನ್ನು ಹೊರಡಿಸಿಲ್ಲ ಎಂದು ಮುಖ್ಯಮಂತ್ರಿ ಗಮನ ಸೆಳೆದರು.
ಕರ್ನಾಟಕ ಸರ್ಕಾರ ಕೃಷ್ಣಾ ಮೇಲ್ದಂಡೆ ಯೋಜನೆಯ ಮೂರನೇ ಹಂತದ ಅನುಷ್ಠಾನಕ್ಕಾಗಿ ಈಗಾಗಲೇ ಭಾರಿ ಪ್ರಮಾಣದ ಹೂಡಿಕೆ ಮಾಡಿದ್ದು, ರಾಜ್ಯಕ್ಕೆ ನ್ಯಾಯಮಂಡಳಿಯಿಂದ ಹಂಚಿಕೆಯಾದ ನೀರನ್ನು ಸಮರ್ಪಕವಾಗಿ ಬಳಸಿಕೊಳ್ಳಲು ಹಾಗೂ ಯೋಜನೆಯನ್ನು ಮುಂದುವರಿಸಲು ಕೇಂದ್ರದ ಬೆಂಬಲ ಅತ್ಯಗತ್ಯವಾಗಿದೆ ಎಂದು ಹೇಳಿದರು.
ಭದ್ರಾ ಮೇಲ್ದಂಡೆ ಯೋಜನೆಗೆ ಘೋಷಿತ ಅನುದಾನ ಬಿಡುಗಡೆಗೆ ಒತ್ತಾಯ
ಭದ್ರಾ ಮೇಲ್ದಂಡೆ ಯೋಜನೆಗೆ 2023-24ನೇ ಸಾಲಿನ ಕೇಂದ್ರ ಬಜೆಟ್ನಲ್ಲಿ 5,300 ಕೋಟಿ ರೂಪಾಯಿ ನೆರವು ಘೋಷಿಸಲಾಗಿತ್ತು. ಆದರೆ ಮೂರು ವರ್ಷಗಳು ಕಳೆದರೂ ಈ ಅನುದಾನ ರಾಜ್ಯಕ್ಕೆ ಬಿಡುಗಡೆಯಾಗಿಲ್ಲ ಎಂದು ಮುಖ್ಯಮಂತ್ರಿ ಅಸಮಾಧಾನ ವ್ಯಕ್ತಪಡಿಸಿದರು.
ಯೋಜನೆಯ ಪರಿಷ್ಕೃತ ವೆಚ್ಚದ ಅಂದಾಜು 21,167.93 ಕೋಟಿ ರೂಪಾಯಿಗಳಾಗಿದ್ದು, ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯ ವೇಗವರ್ಧಿತ ನೀರಾವರಿ ಲಾಭ ಕಾರ್ಯಕ್ರಮದಡಿ ಘೋಷಿತ ನೆರವನ್ನು ತ್ವರಿತವಾಗಿ ಬಿಡುಗಡೆ ಮಾಡಬೇಕು ಎಂದು ಮನವಿ ಮಾಡಿದರು.
ಮಹದಾಯಿ ಯೋಜನೆಗೆ ಪರಿಸರ ಮತ್ತು ಅರಣ್ಯ ಅನುಮತಿ ನೀಡುವಂತೆ ಮನವಿ
ಮಹದಾಯಿ ಕಣಿವೆಯ ಕಳಸಾ ಮತ್ತು ಬಂಡೂರಿ ನಾಲಾ ಯೋಜನೆಗಳು ಹುಬ್ಬಳ್ಳಿ–ಧಾರವಾಡ ಪ್ರದೇಶದ ಕುಡಿಯುವ ನೀರಿನ ಅಗತ್ಯಗಳನ್ನು ಪೂರೈಸುವ ಉದ್ದೇಶ ಹೊಂದಿವೆ. ಈ ಯೋಜನೆಗಳಿಗೆ 2022ರ ಡಿಸೆಂಬರ್ನಲ್ಲಿ ಕೇಂದ್ರ ಜಲ ಆಯೋಗ ಮತ್ತು ಜಲಶಕ್ತಿ ಸಚಿವಾಲಯ ಅನುಮೋದನೆ ನೀಡಿದ್ದರೂ, ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯದಿಂದ ಅಗತ್ಯ ಅರಣ್ಯ ಹಾಗೂ ವನ್ಯಜೀವಿ ಅನುಮತಿ ಇನ್ನೂ ದೊರೆತಿಲ್ಲ ಎಂದು ಮುಖ್ಯಮಂತ್ರಿ ತಿಳಿಸಿದರು.
ಯೋಜನೆಗಳಿಗೆ ಯಾವುದೇ ಕಾನೂನು ತೊಡಕುಗಳಿಲ್ಲದಿದ್ದರೂ ಅನುಮತಿ ವಿಳಂಬವಾಗುತ್ತಿರುವುದರಿಂದ ಹುಬ್ಬಳ್ಳಿ–ಧಾರವಾಡ ಮಹಾನಗರದ ಜನತೆಗೆ ಹಂಚಿಕೆಯಾದ ನೀರನ್ನು ಪೂರೈಸಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಅಗತ್ಯ ಅನುಮತಿಗಳನ್ನು ಶೀಘ್ರ ನೀಡಬೇಕು ಎಂದು ಒತ್ತಾಯಿಸಿದರು.
ಏತ ನೀರಾವರಿ ಮತ್ತು ಕಾಲುವೆ ಯೋಜನೆಗಳಿಗೆ ಕೇಂದ್ರದ ನೆರವು ಕೋರಿಕೆ
ಭಾರತ ಸರ್ಕಾರದ ವೇಗವರ್ಧಿತ ನೀರಾವರಿ ಲಾಭ ಕಾರ್ಯಕ್ರಮ ಹಾಗೂ ಪ್ರವಾಹ ನಿರ್ವಹಣಾ ಯೋಜನೆಗಳಡಿ ಕೇಂದ್ರದ ನೆರವು ಪಡೆಯಲು ಕರ್ನಾಟಕ ಸರ್ಕಾರವು 2025ರ ಫೆಬ್ರವರಿಯಲ್ಲಿ ಹಲವು ಯೋಜನೆಗಳ ಪ್ರಸ್ತಾವನೆಗಳನ್ನು ಸಲ್ಲಿಸಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.
ಸೊಂತಿ ಏತ ನೀರಾವರಿ ಯೋಜನೆ, ಇಂಡಿ ಶಾಖಾ ಕಾಲುವೆ, ಮಲಪ್ರಭಾ ಕಾಲುವೆಯ ಬಾಕಿ ಕಾಮಗಾರಿಗಳು, ಘಟಪ್ರಭಾ ಬಲದಂಡೆ ಹಾಗೂ ಚಿಕ್ಕೋಡಿ ಶಾಖಾ ಕಾಲುವೆ, ತುಂಗಭದ್ರಾ ಎಡದಂಡೆ ಕಾಲುವೆಯ ಬಾಕಿ ಕಾಮಗಾರಿಗಳು ಹಾಗೂ ಬೆಣ್ಣಿಹಳ್ಳ ನದಿಯ ಪ್ರವಾಹ ನಿಯಂತ್ರಣ ಮತ್ತು ನಿರ್ವಹಣಾ ಯೋಜನೆಗಳಿಗೆ ಕೇಂದ್ರ ಸರ್ಕಾರದಿಂದ ಹಣಕಾಸು ನೆರವು ಒದಗಿಸುವಂತೆ ಮನವಿ ಮಾಡಿದರು.
ನದಿ ಜೋಡಣೆ ಯೋಜನೆಗಳಲ್ಲಿ ಕರ್ನಾಟಕಕ್ಕೆ ನ್ಯಾಯಯುತ ಪಾಲು
ಕೇಂದ್ರ ಸರ್ಕಾರದ ನದಿ ಜೋಡಣೆ ಯೋಜನೆಗಳ ಅಡಿಯಲ್ಲಿ ರಾಜ್ಯಗಳಿಗೆ ನೀರು ಹಂಚಿಕೆ ಮಾಡುವಾಗ ಸಮಾನತೆ ಮತ್ತು ನ್ಯಾಯಯುತ ಹಂಚಿಕೆಯ ತತ್ವವನ್ನು ಅನುಸರಿಸಿ ಕರ್ನಾಟಕಕ್ಕೆ ಸೂಕ್ತ ಪಾಲು ನೀಡಬೇಕು ಎಂದು ಮುಖ್ಯಮಂತ್ರಿ ಆಗ್ರಹಿಸಿದರು.
ರಾಜ್ಯದ ಕುಡಿಯುವ ನೀರು, ಕೃಷಿ ಮತ್ತು ನೀರಾವರಿ ಅಭಿವೃದ್ಧಿಗೆ ಈ ಯೋಜನೆಗಳು ಅತ್ಯಂತ ಮಹತ್ವದ್ದಾಗಿದ್ದು, ಅವುಗಳ ಅನುಷ್ಠಾನಕ್ಕೆ ಕೇಂದ್ರ ಸರ್ಕಾರ ಅಗತ್ಯ ಸಹಕಾರ ಮತ್ತು ನೆರವು ನೀಡಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮನವಿ ಮಾಡಿದರು.
ಹಿಂದೂಸ್ತಾನ್ ಸಮಾಚಾರ್ / Rakesh.M.B.