
ವಿಜಯಪುರ, 12 ಜೂನ್ (ಹಿ.ಸ.) :
ಆಂಕರ್ : ಸತತ ಆರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಹಿರಿಯ ರಾಜಕಾರಣಿ
ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರದ ಶಾಸಕ ಸಿ.ಎಸ್. ನಾಡಗೌಡ (ಅಪ್ಪಾಜಿ) ಅವರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಸಂಪುಟ ದರ್ಜೆಯ ಸ್ಥಾನಮಾನ ನೀಡಬೇಕು ಎಂದು ಕಾಂಗ್ರೆಸ್ ಮುಖಂಡರು ಒತ್ತಾಯಿಸಿದ್ದಾರೆ.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್ ಪಕ್ಷದ ಎಸ್ಸಿ ಘಟಕದ ತಾಲ್ಲೂಕು ಉಪಾಧ್ಯಕ್ಷ ಸಂಗಮೇಶ ವಿಜಯಕರ ಅವರು, ಸಿ.ಎಸ್. ನಾಡಗೌಡ ಅವರು ದೀರ್ಘಕಾಲದ ರಾಜಕೀಯ ಅನುಭವ ಹೊಂದಿರುವ ಜನಪರ ನಾಯಕರು. ಕ್ಷೇತ್ರದ ಅಭಿವೃದ್ಧಿಗಾಗಿ ನಿರಂತರವಾಗಿ ಶ್ರಮಿಸುತ್ತಿದ್ದು, ಜಾತಿ-ಧರ್ಮದ ಭೇದವಿಲ್ಲದೆ ಎಲ್ಲ ವರ್ಗದ ಜನರನ್ನು ಒಗ್ಗೂಡಿಸಿಕೊಂಡು ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಹೇಳಿದರು.
ಈ ಹಿಂದೆ ನಾಡಗೌಡ ಅವರು ಮೈಸೂರು ಸ್ಯಾಂಡಲ್ ಸೋಪ್ ನಿಗಮ ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ ಸಂಸ್ಥೆಯನ್ನು ನಷ್ಟದಿಂದ ಹೊರತಂದು ಲಾಭದಾಯಕವಾಗಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಇಂತಹ ಅನುಭವಿ ಹಾಗೂ ಸಮರ್ಥ ನಾಯಕರಿಗೆ ಸಚಿವ ಸಂಪುಟದಲ್ಲಿ ಸೂಕ್ತ ಸ್ಥಾನ ನೀಡುವುದರಿಂದ ಪಕ್ಷಕ್ಕೂ ಹಾಗೂ ರಾಜ್ಯದ ಆಡಳಿತಕ್ಕೂ ಹೆಚ್ಚಿನ ಬಲ ದೊರೆಯಲಿದೆ ಎಂದು ಅವರು ಅಭಿಪ್ರಾಯಪಟ್ಟರು.
ಕಾಂಗ್ರೆಸ್ ವರಿಷ್ಠರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ರಾಜ್ಯ ಕಾಂಗ್ರೆಸ್ ನಾಯಕರು ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಈ ವಿಚಾರದಲ್ಲಿ ಮಧ್ಯಪ್ರವೇಶಿಸಿ ಸಿ.ಎಸ್. ನಾಡಗೌಡ ಅವರಿಗೆ ಸಚಿವ ಸ್ಥಾನ ನೀಡುವಂತೆ ಮನವಿ ಮಾಡಿದರು.
ನಾಡಗೌಡ ಅವರಂತಹ ಹಿರಿಯ ಶಾಸಕರನ್ನು ಕಡೆಗಣಿಸುವುದು ಪಕ್ಷದ ಹಿತದೃಷ್ಟಿಯಿಂದ ಸರಿಯಲ್ಲ. ನ್ಯಾಯಯುತ ಬೇಡಿಕೆಯನ್ನು ಹೈಕಮಾಂಡ್ ನಿರ್ಲಕ್ಷಿಸಿದರೆ ಮುದ್ದೇಬಿಹಾಳ ತಾಲ್ಲೂಕಿನ ಕಾಂಗ್ರೆಸ್ ಪಕ್ಷದ ಎಲ್ಲಾ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ತಮ್ಮ ಹುದ್ದೆಗಳಿಗೆ ಸಾಮೂಹಿಕ ರಾಜೀನಾಮೆ ನೀಡಲು ಸಿದ್ಧರಾಗಿದ್ದಾರೆ ಎಂದು ಸಂಗಮೇಶ ವಿಜಯಕರ ಎಚ್ಚರಿಕೆ ನೀಡಿದರು.
ಸುದ್ದಿಗೋಷ್ಠಿಯಲ್ಲಿ ವಿರೇಶ ಭಜಂತ್ರಿ, ಪಂಚ ಗ್ಯಾರಂಟಿ ಸಮಿತಿ ಸದಸ್ಯ ಸಂಗಮೇಶ ಚಲವಾದಿ, ಮುಖಂಡರಾದ ಮುತ್ತಣ್ಣ ಒಡ್ಡೊವಡಗಿ, ಶರಣಪ್ಪ ಚಲವಾದಿ, ಬಸವರಾಜ ಗೋನಾಳ ಸೇರಿದಂತೆ ಹಲವು ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / jyothi deshpande