
ಬಾಗಲಕೋಟೆ, 12 ಜೂನ್ (ಹಿ.ಸ.) :
ಆಂಕರ್ : ಬಾಗಲಕೋಟೆ ಜಿಲ್ಲೆಯ
ಮುಧೋಳ ನಗರದ ಪ್ರಸಿದ್ಧ ಮಹಾರಾಣಿ ಕೆರೆ ಆವರಣದಲ್ಲಿ ಸಾರ್ವಜನಿಕರ ಆರೋಗ್ಯ ಹಾಗೂ ದೈಹಿಕ ಕ್ಷಮತೆ ಹೆಚ್ಚಿಸುವ ಉದ್ದೇಶದಿಂದ ನಿರ್ಮಾಣಗೊಳ್ಳುತ್ತಿರುವ ಓಪನ್ ಜಿಮ್ (Open Gym) ಕಾಮಗಾರಿಯನ್ನು ಇಂದು ಶಾಸಕ ಆರ್ ಬಿ ತಿಮ್ಮಾಪುರ ಖುದ್ದಾಗಿ ವೀಕ್ಷಿಸಿ ಕಾಮಗಾರಿಯ ಪ್ರಗತಿಯನ್ನು ಪರಿಶೀಲನೆ ನಡೆಸಿದರು.
ನಗರದ ಜನತೆಗೆ ಉತ್ತಮ ಆರೋಗ್ಯಕರ ವಾತಾವರಣ ಕಲ್ಪಿಸುವ ನಿಟ್ಟಿನಲ್ಲಿ ಕೈಗೊಳ್ಳಲಾಗುತ್ತಿರುವ ಈ ಯೋಜನೆಯ ಕಾಮಗಾರಿ ವೇಗವಾಗಿ ನಡೆಯುತ್ತಿದ್ದು, ಸಾರ್ವಜನಿಕರಿಗೆ ಅನುಕೂಲವಾಗುವ ರೀತಿಯಲ್ಲಿ ಅಗತ್ಯ ಸೌಲಭ್ಯಗಳನ್ನು ಕಲ್ಪಿಸುವಂತೆ ಸೂಚಿಸಲಾಯಿತು.
ಕಾಮಗಾರಿಯಲ್ಲಿ ಯಾವುದೇ ಗುಣಮಟ್ಟದ ಕೊರತೆ ಉಂಟಾಗದಂತೆ, ನಿಗದಿತ ಮಾನದಂಡಗಳ ಪ್ರಕಾರ ಉತ್ತಮ ರೀತಿಯಲ್ಲಿ ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಲಾಯಿತು.
ಮಹಾರಾಣಿ ಕೆರೆ ಆವರಣವು ಈಗಾಗಲೇ ನಗರದ ಪ್ರಮುಖ ಸಾರ್ವಜನಿಕ ತಾಣವಾಗಿದ್ದು, ಇಲ್ಲಿ ನಿರ್ಮಾಣವಾಗುತ್ತಿರುವ ಓಪನ್ ಜಿಮ್ ಯುವಕರು, ಹಿರಿಯ ನಾಗರಿಕರು ಸೇರಿದಂತೆ ಎಲ್ಲ ವರ್ಗದ ಜನರಿಗೆ ವ್ಯಾಯಾಮ ಹಾಗೂ ಆರೋಗ್ಯ ಕಾಪಾಡಿಕೊಳ್ಳಲು ಸಹಕಾರಿಯಾಗಲಿದೆ.
ಸಾರ್ವಜನಿಕರ ಆರೋಗ್ಯಕ್ಕೆ ಆದ್ಯತೆ ನೀಡುವ ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ ಎಂದು ತಿಳಿಸಲಾಯಿತು.
ಈ ಸಂದರ್ಭದಲ್ಲಿ ಮುಧೋಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸದುಗೌಡ ಪಾಟೀಲ, ಲೋಕಾಪೂರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕಿವಡಿ (ವಕೀಲರು), ಸೇರಿದಂತೆ ಪಕ್ಷದ ಪ್ರಮುಖರು, ಮುಖಂಡರು ಹಾಗೂ ಗಣ್ಯರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / jyothi deshpande